ಬೆಂಗಳೂರು : ಮಾಜಿ ಮುಖ್ಯಮಂತ್ರಿ, ರೈತ ನಾಯಕ ಬಿ.ಎಸ್.ಯಡಿಯೂರಪ್ಪ ಅವರ 83 ನೇ ಜನುಮ ದಿನದ ಅಂಗವಾಗಿ ಗುರುವಾರ ರಾಜಕೀಯ ಮುಖಂಡರು, ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ಅವರಿಗೆ ಸಿಹಿ ತಿನ್ನಿಸಿ, ಶುಭ ಕೋರಿದರು.
ಡಾಲರ್ಸ್ ಕಾಲೊನಿಯ ಧವಳಗಿರಿ ನಿವಾಸಕ್ಕೆ ಬೆಳಗ್ಗಿನಿಂದಲೇ ರಾಜ್ಯದ ಹಲವೆಡೆಯಿಂದ ಆಗಮಿಸಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಶುಭ ಕೋರಿದರು. ಅಭಿಮಾನಿಗಳು ತಂದಿದ್ದ 83 ಕೆ.ಜಿ. ತೂಕದ ಕೇಕ್ ಅನ್ನು ಕಟ್ ಮಾಡಿದ ಯಡಿಯೂರಪ್ಪ ಅವರು ಅಭಿಮಾನಿಗಳ ಜೊತೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ ಮತ್ತಿತರರು ದೂರವಾಣಿ ಕರೆ ಮಾಡಿ ಯಡಿಯೂರಪ್ಪ ಅವರಿಗೆ ಶುಭ ಹಾರೈಸಿದರು.
ಬಿಎಸ್‌ವೈ ನೇತೃತ್ವದಲ್ಲಿ ಪ್ರವಾಸ-ಅಶೋಕ್: ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಯಡಿಯೂರಪ್ಪ ಅವರು ಬಿಜೆಪಿ ಸಂಘಟಿಸಿ ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ಬರುವಂತೆ ಮಾಡಿದ್ದಾರೆ. ಮತ್ತೊಮ್ಮೆ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯುವಂತೆ ಮಾಡಲು ಹೋರಾಟ ನಡೆಸುತ್ತಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲಿ ಪುನಃ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಅಧಿಕಾರಕ್ಕೆ ತರುತ್ತೇವೆ ಎಂದು ಭರವಸೆ ನೀಡಿದರು.
ಯಡಿಯೂರಪ್ಪ ಅವರಿಗೆ ಶುಭ ಕೋರಿದ ಬಳಿಕ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಯಡಿಯೂರಪ್ಪ ಅವರು ನಿಜವಾದ ಜನಮೆಚ್ಚಿದ ನಾಯಕ. ಜನರ ಸಮಸ್ಯೆಗಳ ಪರಿಹಾರಕ್ಕೆ ಹಲವು ಹೋರಾಟಗಳನ್ನು ನಡೆಸಿದರು. ಅಧಿಕಾರದಲ್ಲಿದ್ದಾಗ ಆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು. ಕೆಳಸ್ತರದ ಬಡವರ ಅಭಿವೃದ್ಧಿಗೆ ಶ್ರಮಿಸಿದರು ಎಂದು ಪ್ರಶಂಸಿಸಿದರು.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ಶಾಸಕರಾದ ಅಶ್ವಥ್ ನಾರಾಯಣ, ಮುನಿರತ್ನ, ಎಸ್.ಆರ್.ವಿಶ್ವನಾಥ್, ಬೈರತಿ ಬಸವರಾಜ್, ಎಂ.ಕೃಷ್ಣಪ್ಪ, ಶೈಲೇಂದ್ರ ಬೆಲ್ದಾಳೆ, ಧೀರಜ್ ಮುನಿರಾಜ್, ಗೋಪಾಲಯ್ಯ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ವೈ.ಸಂಪಂಗಿ ಸೇರಿ ಹಲವು ಮುಖಂಡರು ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭ ಕೋರಿದರು. ಬಾಕ್ಸ್:
ಭ್ರಷ್ಟ ಸರ್ಕಾರ ಕಿತ್ತೆಸೆಯಲು ರಾಜ್ಯಾದ್ಯಂತ ಪ್ರವಾಸ: ಬಿಎಸ್‌ವೈ
ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೆಸೆದು ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ತರಬೇಕು. ಇದಕ್ಕಾಗಿ ಕಾರ್ಯಕರ್ತರನ್ನು ಹುರಿದುಂಬಿಸಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಹುಟ್ಟುಹಬ್ಬ ಆಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ಮುಖಂಡರೂ ಒಂದಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಬೇಕಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೆಸೆದು ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.
ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ನೀಡಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಪುನಸ್ಕಾರ ಮಾಡಿ ಒಳ್ಳೆಯದಾಗಲಿ ಎಂದು ಜನತೆ ನನಗೆ ಆಶೀರ್ವದಿಸಿದ್ದಾರೆ. ಯಡಿಯೂರು ಸಿದ್ದಲಿಂಗೇಶ್ವರನ ದರ್ಶನ ಮಾಡಿ ಆಶೀರ್ವಾದ ಪಡೆಯುತ್ತೇನೆ. ಎಲ್ಲರಿಗೂ ಒಳ್ಳೆಯದಾಗಲಿ. ಬಿಜೆಪಿ ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಆಗಲಿ ಎಂದು ಆಶಿಸಿದರು.