ಕನ್ನಡಪ್ರಭ ವಾರ್ತೆ ಬೆಂಗಳೂರು
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಕಾಲಾವಕಾಶ ನೀಡಿದೆ. ಇದೇ ವೇಳೆ, ಬಿಎಸ್‌ವೈರನ್ನು ಬಂಧಿಸದಂತೆ ತನಿಖಾಧಿಕಾರಿಗೆ ಸೂಚಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ.ಫೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಯಡಿಯೂರಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಮತ್ತು ಪ್ರಕರಣ ಸಂಬಂಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳು, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿದ್ದವು.
ವಿಚಾರಣೆ ವೇಳೆ ಸರ್ಕಾರದ ಪರ ಹೆಚ್ಚುವರಿ ಸರ್ಕಾರಿ ವಿಶೇಷ ಅಭಿಯೋಜಕ ಬಿ.ಎನ್. ಜಗದೀಶ್, ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಈಗಾಗಲೇ ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಅರ್ಜಿಗಳಿಗೆ ತನಿಖಾಧಿಕಾರಿಗಳು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಅದಕ್ಕೆ ಕಾಲಾವಕಾಶ ನೀಡಬೇಕು ಎಂದು ಕೋರಿದರು.ಈ ಮನವಿ ಪರಿಗಣಿಸಿದ ನ್ಯಾಯಪೀಠವು ಎರಡು ವಾರ ಕಾಲ ಅರ್ಜಿಗಳ ವಿಚಾರಣೆ ಮುಂದೂಡಿತು. ಹಾಗೆಯೇ, ಮುಂದಿನ ವಿಚಾರಣೆವರೆಗೆ ಬಿಎಸ್‌ವೈ ಅವರನ್ನು ಬಂಧಿಸದಂತೆ ತನಿಖಾಧಿಕಾರಿಗೆ ಸೂಚಿಸಿ 2024ರ ಜೂ.14ರಂದು ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿತು.
ಅಲ್ಲದೆ, ಪ್ರಕರಣ ಸಂಬಂಧ ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಲು ತನಿಖಾಧಿಕಾರಿಗೆ ನಿರ್ದೇಶಿಸುವಂತೆ ಕೋರಿ ಸಂತ್ರಸ್ತೆಯ ಸಹೋದರ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ, ಆರೋಪಿಯನ್ನು ಬಂಧಿಸಲು ನ್ಯಾಯಾಲಯಗಳು ಹೊರಡಿಸಿರುವ ತೀರ್ಪುಗಳು ಇದ್ದರೆ, ಅವುಗಳನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸಬೇಕು ಎಂದು ನ್ಯಾಯಪೀಠ ಇದೇ ವೇಳೆ ಸಂತ್ರಸ್ತೆಯ ಸಹೋದರ ಪರ ವಕೀಲ ಬಾಲನ್‌ಗೆ ಸೂಚಿಸಿತು.