ಸಂಡೂರು: ಸಮಕಾಲೀನ ಭಾರತಕ್ಕೆ ಬುದ್ಧ, ಬಸವ, ಅಂಬೇಡ್ಕರ್ ಅವರ ವಿಚಾರ ಧಾರೆಗಳೇ ದಿಕ್ಸೂಚಿಯಾಗಿವೆ ಎಂಬ ಅಭಿಪ್ರಾಯ ತಾಲೂಕಿನ ನಂದಿಹಳ್ಳಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳವಾರ ಬುದ್ಧ, ಬಸವ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ವ್ಯಕ್ತವಾಯಿತು.
ಕೇಂದ್ರ ಸಾಹಿತ್ಯ ಅಕಾಡೆಮಿ, ನವದೆಹಲಿಯ ಸದಸ್ಯರಾದ ಡಾ. ಬಸವರಾಜ ಸಾದರ ಬಸವಣ್ಣನವರ ವಿಚಾರಧಾರೆಗಳನ್ನು ಮಂಡಿಸಿ, ನಾನು ಮೇಲು-ನೀನು ಕೀಳು ಎಂಬ ಭಾವನೆಯನ್ನು ತೊರೆದು ಎಲ್ಲರನ್ನೂ ಸಮಾನವಾಗಿ ಕಾಣಬೇಕೆಂದು ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಸಾರಿದ್ದರು. ಮೂಢನಂಬಿಕೆ, ಕಂದಾಚಾರ ಹಾಗೂ ಅನಗತ್ಯ ಸಂಪ್ರದಾಯಗಳ ವಿರುದ್ಧ ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ್ದರು. ಇಂದಿನ ವಿಶ್ವವಿದ್ಯಾಲಯಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಇಂತಹ ವಿಚಾರ ಸಂಕಿರಣಗಳು ಅತ್ಯಂತ ಅಗತ್ಯವೆಂದು ತಿಳಿಸಿದರು.
ಪ್ರೊ.ಕೆ.ಸಿ ಮಹೇಶ್ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ ನೀಡಿ, ಸಾಮಾಜಿಕ ಅಸಮಾನತೆ, ಹಸಿವು, ಅನ್ಯಾಯ ಹಾಗೂ ಶೋಷಣೆಯ ವಿರುದ್ಧ ಹೋರಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದರು. ಪ್ರತಿ ಭಾರತೀಯನಿಗೂ ಗೌರವಯುತ ಬದುಕು ದೊರೆಯಬೇಕಾದರೆ ಹಸಿವು ಮತ್ತು ಬಡತನ ನಿರ್ಮೂಲನೆ ಅತ್ಯಗತ್ಯ. ಪ್ರಜಾಪ್ರಭುತ್ವ ಯಶಸ್ಸಿಗೆ ಮತದಾನದ ಶಕ್ತಿಯೇ ಪ್ರಮುಖ ಆಧಾರವಾಗಿದ್ದು, ಜಾಗೃತ ಮತದಾರರೇ ಉತ್ತಮ ಆಡಳಿತವನ್ನು ನಿರ್ಮಿಸಬಲ್ಲರು ಎಂಬ ಅಂಬೇಡ್ಕರ್ ಅವರ ಸಂದೇಶವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ತಿಪ್ಪೇಸ್ವಾಮಿ ಎಚ್. ಮಾತನಾಡಿ, ದುಡಿಮೆಯೇ ದುಡ್ಡಿನ ತಾಯಿ ಎಂಬ ತತ್ವವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿರುವ ಜ್ವಲಂತ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿಗಳು ವೈಚಾರಿಕವಾಗಿ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಜಾತಿ ವ್ಯವಸ್ಥೆ ಹಾಗೂ ಸಾಮಾಜಿಕ ಅಸಮಾನತೆಗಳನ್ನು ತೊಡೆದುಹಾಕುವಲ್ಲಿ ಯುವ ಜನತೆ ಪ್ರಮುಖ ಪಾತ್ರ ವಹಿಸಬೇಕೆಂದರು.
ವಿಚಾರ ಸಂಕಿರಣದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಂದ ೬೦ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಸಲ್ಲಿಕೆಯಾಗಿದ್ದವು. ವಿವಿಧ ವಿಶ್ವವಿದ್ಯಾಲಯಗಳ ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಚಿಂತಕರು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.