ಮಾದಕ ವಸ್ತು ಮುಕ್ತ ಭಾರತಕ್ಕಾಗಿ ಜಾಗೃತಿ ಕಾರ್ಯಕ್ರಮ ಉದ್ಘಾಟನೆ
ಮಾದಕ ವಸ್ತುಗಳ ಬಳಕೆಯಿಂದ ದೂರವಿದ್ದು, ಉತ್ತಮ ಶಿಕ್ಷಣದ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮುಂಡಗೋಡ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಎಚ್.ಎಸ್. ಶಿವರಾಜು ಹೇಳಿದರು.
ಶನಿವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ಅಭಿಯೋಜನಾ ಇಲಾಖೆ, ವಕೀಲರ ಸಂಘ, ಮುಂಡಗೋಡ, ಸಮಾಜ, ಆರೋಗ್ಯ, ಪೊಲೀಸ್ ಇಲಾಖೆ, ಮುಂಡಗೋಡ ಹಾಗೂ ಮುರಾರ್ಜಿ ದೇಸಾಯಿ ವಸತಿ ಶಾಲೆ, ಕರಗಿನಕೊಪ್ಪ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಭಾಂಗಣದಲ್ಲಿ ಮಾದಕ ವಸ್ತು ಜಾಗೃತಿ ಹಾಗೂ ಮಾದಕ ವಸ್ತು ಮುಕ್ತ ಭಾರತಕ್ಕಾಗಿ ಸ್ವಾಸ್ಥ್ಯ ಸಂಚರಣೆ ಯೋಜನೆ–೨೦೨೫ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಕ್ಕಳು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುವುದರಿಂದ ಉಂಟಾಗುವ ಆರೋಗ್ಯ, ಮಾನಸಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ದುಷ್ಪರಿಣಾಮಗಳ ಕುರಿತು ಅವರು ಸವಿಸ್ತಾರವಾಗಿ ತಿಳಿಸಿದ ಅವರು, ವಿದ್ಯಾರ್ಥಿಗಳು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೆ, ತಮ್ಮ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಿ, ತಮ್ಮ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ತದನಂತರ ಕಾನೂನು ಸೇವಾ ಪ್ರಾಧಿಕಾರದ ಧ್ಯೇಯೋದ್ದೇಶಗಳು, ಉಚಿತ ಕಾನೂನು ನೆರವು ಹಾಗೂ ಸಮಾಜದ ದುರ್ಬಲ ವರ್ಗಗಳಿಗೆ ಕಾನೂನು ಸೇವಾ ಪ್ರಾಧಿಕಾರಗಳ ಮೂಲಕ ದೊರೆಯುವ ಕಾನೂನು ಸಹಾಯದ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.