ಸಮನ್ವಯತೆ, ಸ್ವಾಸ್ಥ್ಯತೆಯ ಬದುಕು ಕಟ್ಟಿಕೊಳ್ಳಿ: ಚಂದ್ರಶೇಖರ

KannadaprabhaNewsNetwork |  
Published : Nov 24, 2026, 01:15 AM IST
23 ರೋಣ 2. ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ಕಲ್ಯಾಣ ಕರ್ನಾಟಕ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ ಉದ್ಘಾಟಿಸಿದರು. | Kannada Prabha

ಸಾರಾಂಶ

ಪರಸ್ಪರ ಪ್ರೀತಿ, ವಿಶ್ವಾಸ, ಸಮನ್ವಯತೆ ಹಾಗೂ ಸ್ವಾಸ್ಥ್ಯತೆಯಿಂದ ಇರುವ ಮೂಲಕ ಸುಂದರವಾದ ಬದುಕನ್ನು ಕಟ್ಟಿಕೊಳ್ಳಬೇಕು.

ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ರೋಣ

ಪರಸ್ಪರ ಪ್ರೀತಿ, ವಿಶ್ವಾಸ, ಸಮನ್ವಯತೆ ಹಾಗೂ ಸ್ವಾಸ್ಥ್ಯತೆಯಿಂದ ಇರುವ ಮೂಲಕ ಸುಂದರವಾದ ಬದುಕನ್ನು ಕಟ್ಟಿಕೊಳ್ಳಬೇಕು. ಈ ದಿಶೆಯಲ್ಲಿ ಕುಟುಂಬ ಮತ್ತು ಸಮಾಜಕ್ಕೆ ಮಹಿಳೆಯರ ಕೊಡುಗೆ ಅಪಾರವಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ಕಲ್ಯಾಣ ಕರ್ನಾಟಕ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ ಹೇಳಿದರು.

​ಸೋಮವಾರ ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರೋಣ ತಾಲೂಕು ಯೋಜನಾ ಕಚೇರಿ ಹಾಗೂ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜರುಗಿದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

​ಕುಟುಂಬ ಮತ್ತು ಸಮಾಜ ಆರ್ಥಿಕವಾಗಿ ಪ್ರಗತಿ ಹೊಂದಬೇಕು, ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕು ಹಾಗೂ ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸಬೇಕು ಎಂಬ ಸದುದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಮಹತ್ವಪೂರ್ಣ ಕಾರ್ಯಕ್ರಮ ಅನುಷ್ಠಾನಗೊಳಿಸಿ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಸಾಕಾರಗೊಳಿಸುತ್ತಾ ಬಂದಿದೆ. ಪ್ರತಿಯೊಬ್ಬರಲ್ಲೂ ಸಮಾಜದ ಬಗ್ಗೆ ಕಳಕಳಿ ಮುಖ್ಯವಾಗಿದೆ. ನೀರು ಅಮೂಲ್ಯವಾದದ್ದು, ಇದನ್ನು ಅನಗತ್ಯವಾಗಿ ವ್ಯಯ ಮಾಡದೇ ಮಿತವ್ಯಯವಾಗಿ ಬಳಸಬೇಕು ಎಂದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಿಳಾ ಘಟಕದ ಕೋಶಾಧ್ಯಕ್ಷೆ ಸಂಯುಕ್ತಾ ಬಂಡಿ ಮಾತನಾಡಿ, ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವುದರಿಂದ ಇಡೀ ಕುಟುಂಬವೇ ಸುಶಿಕ್ಷಿತವಾಗುತ್ತದೆ. ಧರ್ಮಸ್ಥಳ ಸಂಘದ ಜ್ಞಾನವಿಕಾಸ ಕಾರ್ಯಕ್ರಮಗಳು ಗ್ರಾಮೀಣ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಲೇಖಕಿಯರ ಸಂಘದ ಗದಗ ಜಿಲ್ಲಾಧ್ಯಕ್ಷೆ ಕವಿತಾ ದಂಡಿನ ಮಾತನಾಡಿ, ಮಹಿಳೆ ಆರ್ಥಿಕವಾಗಿ ಸ್ವಾವಲಂಬಿಯಾದಾಗ ಮಾತ್ರ ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ಆಕೆಗೆ ನಿಜವಾದ ಗೌರವ ಹಾಗೂ ನಿರ್ಧಾರ ತೆಗೆದುಕೊಳ್ಳುವ ಸ್ವಾತಂತ್ರ್ಯ ಸಿಗುತ್ತದೆ. ಉಳಿತಾಯದ ಮನೋಭಾವ, ಸಣ್ಣ ಉದ್ಯಮಗಳ ಸ್ಥಾಪನೆ ಮತ್ತು ಆರ್ಥಿಕ ಸಾಕ್ಷರತೆಯನ್ನು ಮಹಿಳೆಯರು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಪಂದನಾ ಮಹಿಳಾ ಮಂಡಳದ ಅಧ್ಯಕ್ಷೆ ಶಶಿಕಲಾ ಪಾಟೀಲ ಮಾತನಾಡಿ, ಮಹಿಳೆಯರು ಕೀಳರಿಮೆ ಬಿಟ್ಟು, ಸರ್ಕಾರ ಮತ್ತು ಸಂಘ-ಸಂಸ್ಥೆಗಳು ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದರು.

​ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ಎಸ್.ಬಿ.ಐ ಬ್ಯಾಂಕ್ ವ್ಯವಸ್ಥಾಪಕಿ ಸಂಧ್ಯಾ ಸಂಪತ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಪ್ರವೀಣಕುಮಾರ ರಡ್ಡೇರ, ಡಾ. ವೀರೇಶ ಸತ್ತಿಗೇರಿ, ಯೋಜನಾಧಿಕಾರಿ ಮಹಾಬಲೇಶ್ವರ ಪಟಗಾರ, ಗೀತಾ ನಂದಿಕೋಲಮಠ, ನಿರ್ಮಲಾ ಹರಪನಹಳ್ಳಿ ಸೇರಿ ಅನೇಕರು ಉಪಸ್ಥಿತರಿದ್ದರು. ಸುನಿತಾ ಕಾತರಕಿ ನಿರೂಪಿಸಿ, ನಾಗೇಂದ್ರ ಕಮತರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಶ್ವ ವಿಕಲಚೇತನರ ದಿನಾಚರಣೆ ವ್ಯವಸ್ಥಿತವಾಗಿ ಆಯೋಜಿಸಿ: ಡಾ. ದುರಗೇಶ್
ಯುವಜನ ಓದುವ ಹವ್ಯಾಸ ಬೆಳೆಸಿಕೊಳ್ಳಲಿ: ಶಾಸಕ ದಿನಕರ ಶೆಟ್ಟಿ