ಬೋಧನೆಗೆ ಸೀಮಿತವಾಗದೆ, ಮಕ್ಕಳ ವ್ಯಕ್ತಿತ್ವ ರೂಪಿಸಿ

KannadaprabhaNewsNetwork |  
Published : Sep 11, 2025, 12:04 AM IST
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಶಿಕ್ಷಕರು ಕೇವಲ ಪಾಠಗಳನ್ನು ಬೋಧಿಸುವುದರಲ್ಲಿ ಸೀಮಿತವಾಗದೆ, ಹೃದಯವಂತಿಕೆಯೊಂದಿಗೆ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವ ಜವಾಬ್ದಾರಿ ಹೊತ್ತಿರಬೇಕು

ಕನ್ನಡಪ್ರಭ ವಾರ್ತೆ ವಿಜಯಪುರ

ಮೊದಲಿನ ಶಿಕ್ಷಣ ವ್ಯವಸ್ಥೆಗೂ ಇಂದಿನ ಶಿಕ್ಷಣ ವ್ಯವಸ್ಥೆಗೂ ಸಾಕಷ್ಟು ಬದಲಾವಣೆಗಳಾಗಿವೆ. ಶಿಕ್ಷಕರು ಕೇವಲ ಪಾಠಗಳನ್ನು ಬೋಧಿಸುವುದರಲ್ಲಿ ಸೀಮಿತವಾಗದೆ, ಹೃದಯವಂತಿಕೆಯೊಂದಿಗೆ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವ ಜವಾಬ್ದಾರಿ ಹೊತ್ತಿರಬೇಕು ಎಂದು ವಿಜಯಪುರದ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯದರ್ಶಿ ಪ್ರೊ.ಎಂ.ಎಸ್.ಮದಭಾವಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಡಾ.ಎಸ್.ರಾಧಾಕೃಷ್ಣನ್ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸುವುದು ಒಂದು ಸಂತಸದ ವಿಷಯ. ಅವರ ಶಿಕ್ಷಣ ತತ್ವಗಳು ಹಾಗೂ ಮೌಲ್ಯಗಳು ಇಂದಿಗೂ ದಿಕ್ಕು ತೋರುತ್ತಿವೆ. ಶಿಕ್ಷಕರು ಕೇವಲ ಪಾಠವನ್ನು ಕಲಿಸುವವರಲ್ಲ, ಅವರು ಸಮಾಜಕ್ಕೆ ಆದರ್ಶ ವ್ಯಕ್ತಿತ್ವವನ್ನು ನೀಡುವವರಾಗಿದ್ದಾರೆ ಎಂದು ಹೇಳಿದರು.

ಐಕ್ಯೂಎಸಿ ಡೈರಕ್ಟರ್ ಪ್ರೊ.ಪಿ.ಜಿ.ತಡಸದ ಮಾತನಾಡಿ, ಇವತ್ತಿನ ತಂತ್ರಜ್ಞಾನ ಯುಗದಲ್ಲಿ, ಶಿಕ್ಷಕರು ಮುಂಬರುವ ಸವಾಲುಗಳನ್ನು ಎದುರಿಸಿ, ಹೊಸ ಹೊಸ ಬಗೆಯ ಬೋಧನಾ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಕರು ನಿರಂತರವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು, ತಮ್ಮ ವಿದ್ಯಾರ್ಥಿಗಳಿಗೆ ಹೆಚ್ಚು ಪರಿಣಾಮಕಾರಿಯಾಗಿ ಮಾರ್ಗದರ್ಶನ ನೀಡಲು ಸಿದ್ಧರಾಗಿರಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಕಂಪ್ಯೂಟರ್, ಅಂತರಜಾಲ ಸಂಪರ್ಕ ಮತ್ತು ಡಿಜಿಟಲ್ ಮಾಧ್ಯಮಗಳ ಮೂಲಕ ವಿಷಯವನ್ನು ಸಂಗ್ರಹಿಸಿ, ಜ್ಞಾನ ಪಡೆಯುವುದರ ಜೊತೆಗೆ ಪಠ್ಯ ಪುಸ್ತಕಗಳನ್ನು ಸವಿಸ್ತಾರವಾಗಿ ಅಧ್ಯಯನ ಮಾಡಬೇಕು. ಇಂದು ಶಿಕ್ಷಕರ ವೃತ್ತಿಯನ್ನು ಮತ್ತೊಮ್ಮೆ ನೆನಪಿಸಿಕೊಳ್ಳುವ ಒಂದು ವಿಶೇಷ ದಿನವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಜ್ಞಾನ ಅಭಿವೃದ್ಧಿ ಪಡಿಸುವುದರ ಜೊತೆಗೆ ಶಿಕ್ಷಕರು ಅಭಿವೃದ್ಧಿಯಾಗಬೇಕು ಎಂದರು.

ಶಿಕ್ಷಕರು ವೃತ್ತಿಪರತೆಯನ್ನು ಹೆಚ್ಚಿಸಲು ಹಲವಾರು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನವಷ್ಟೇ ಅಲ್ಲ, ಜೀವನ ಪಾಠಗಳನ್ನೂ ಕಲಿಸಬೇಕು. ಶಿಕ್ಷಕರು ಪ್ರತಿ ವಿದ್ಯಾರ್ಥಿಗಳ ಬದುಕಿಗೆ ಪ್ರೇರಣೆಯಾಗಬೇಕು. ಹೊಸ ದೃಷ್ಟಿಕೋನ, ಹೊಸ ಭರವಸೆಯಿಂದ ಮುಂದಕ್ಕೆ ಸಾಗೋಣ ಎಂದು ಹೇಳಿದರು.

ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿನಿಯರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಸಂಯೋಜಕ ಪ್ರೊ.ವೆಂಕೋಬ ನಾರಾಯಣಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಡಾ.ರೂಪಾ ನಾಯಿಕೋಡಿ ನಿರೂಪಿಸಿದರು. ವಿದ್ಯಾರ್ಥಿನಿ ಸರಸ್ವತಿ ಬೆಳ್ಳುಂಗಡಿಗಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ