ಬೆಲೆ ಏರಿಕೆ ಹೊರೆ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

KannadaprabhaNewsNetwork |  
Published : Nov 26, 2026, 02:15 AM IST
ಬೆಲೆ ಏರಿಕೆ ವಿರುದ್ಧ ಕೊಪ್ಪಳದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ಜೀವನ ನಿರ್ವಹಣೆ ಮಾಡಲು ಪರದಾಡುವಂತಾಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಬುಧವಾರ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಯಿತು.

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ಜೀವನ ನಿರ್ವಹಣೆ ಮಾಡಲು ಪರದಾಡುವಂತಾಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಬುಧವಾರ ನಗರದ ಅಶೋಕ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾವಚಿತ್ರ ಪ್ರದರ್ಶಿಸಿ ''ಟೋಪಿವಾಲ ಸಿಎಂ'' ಎಂದು ವ್ಯಂಗ್ಯವಾಡಿದರು. ಅಲ್ಲದೆ, ''ಸುಲಿಗೆಕೋರ ಸರ್ಕಾರ'' ಎಂದು ಘೋಷಣೆ ಕೂಗಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಳದಿಂದ ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಪ್ರಯೋಜನವೂ ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ. ಗ್ಯಾರಂಟಿಗಳ ಹೆಸರಿನಲ್ಲಿ ಭರವಸೆ ನೀಡಿದ ಸರ್ಕಾರ ಅವುಗಳ ಅನುಷ್ಠಾನದಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಾರಿಗೆ ಬಸ್‌ಗಳಿಗೆ ಡೀಸೆಲ್ ಪೂರೈಕೆ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲು ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಅಧಿಕಾರಿಗಳಿಗೆ ಬೆದರಿಕೆ ಹಾಕುವಂತಹ ಘಟನೆಗಳು ನಡೆಯುತ್ತಿವೆ. ಆಡಳಿತ ವ್ಯವಸ್ಥೆಯಲ್ಲಿ ಶಿಸ್ತು ಇಲ್ಲದಂತಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸರ್ಕಾರವೇ ಬಡವರ ಸಂಕಷ್ಟಕ್ಕೆ ಕಾರಣವಾಗುತ್ತಿದೆ. ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದರೂ ನಿಯಂತ್ರಣಕ್ಕೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಜನವಿರೋಧಿ ನೀತಿಗಳನ್ನು ಕೈಬಿಟ್ಟು ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಆಶಾ ಕಾರ್ಯಕರ್ತೆಯರು ಸೇರಿದಂತೆ ವಿವಿಧ ವರ್ಗಗಳ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಮುಖಂಡ ಡಾ. ಬಸವರಾಜ ಕ್ಯಾವಟರ್, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಳಕಲ್ಲಿಗೆ ಬಂತು ಕನ್ನಡ ಬಂಡಾರದ ರಥ
ಅಧಿವೇಶನ ಸಿದ್ಧತೆ ಹೆಸರಿನಲ್ಲಿ ಹಣ ದುರ್ಬಳಕೆ?