ಲಕ್ಷ್ಮೇಶ್ವರ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕರಿಂದ ಲೋಕಾಯುಕ್ತ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.
ಪಟ್ಟಣದ ಪ್ರಮುಖ ರಸ್ತೆಯಲ್ಲಿ ಅವ್ಯವಸ್ಥಿತವಾಗಿ ವ್ಯಾಪಾರ ನಡೆಯುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಎನ್ನುವ ದೂರು ಬಂದಿದೆ. ಈ ಕುರಿತಂತೆ ಶೀಘ್ರ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಲೋಕಾಯುಕ್ತ ಡಿಎಸ್‌ಪಿ ವಿಜಯ ಬಿರಾದಾರ ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ಅವರಿಗೆ ಹಾಗೂ ಪೋಲಿಸರಿಗೆ ಸೂಚಿಸಿದರು.
ಆನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳಿಗೆ ಸರಿಯಾದ ಆಹಾರ, ನೀರು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಪೂರೈಸಬೇಕು. ಮುಖ್ಯವಾಗಿ ಕುಡಿಯುವ ನೀರನ್ನು ಲ್ಯಾಬ್‌ಗೆ ಕಳುಹಿಸಿ ಗುಣಮಟ್ಟ ಪರೀಕ್ಷಿಸಬೇಕು. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ಸಹ ಮೇಲಿಂದ ಮೇಲೆ ಕೈಗೊಳ್ಳಬೇಕು. ಯಾವುದೇ ವಿಷಯದಲ್ಲಿ ಅಲಕ್ಷ್ಯ ವಹಿಸಿದ ಬಗ್ಗೆ ದೂರು ಬರದಂತೆ ಕೆಲಸ ನಿರ್ವಹಿಸಿ ಎಂದು ಹೇಳಿದರು.ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿ ಹಾಜರಾತಿ ಬಗ್ಗೆ ದೂರುಗಳಿದ್ದು, ಇನ್ನೂ ಮೇಲೆ ಎಲ್ಲ ಕಚೇರಿಗಳಲ್ಲಿ ಚಲನ-ವಲನ ವಹಿ ಮತ್ತು ಹಾಜರಾತಿ ವಹಿ ಕಟ್ಟುನಿಟ್ಟಾಗಿ ಇಡಬೇಕು. ಅವುಗಳಲ್ಲಿ ನಿತ್ಯ ದಾಖಲೆ ಮಾಡಬೇಕು. ಕೆಲವು ಇಲಾಖೆಯವರು ತಮ್ಮ ಕೆಲಸದ ವೇಳೆಯಲ್ಲಿ ಹೊರಗಡೆ ಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವ ದೂರುಗಳಿವೆ. ಸಿಬ್ಬಂದಿ ಕೆಲಸದ ಅವಧಿಯಲ್ಲಿ ಬೇರೆ ಬೇರೆ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದನ್ನು ನಿರ್ಬಂಧಿಸಿ, ಇಂತಹ ದೂರುಗಳು ಬರದಂತೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿದರು.
ತಹಸೀಲ್ದಾರ್ ವಾಸುದೇವ ಸ್ವಾಮಿ, ಗ್ರೇಡ್-೨ ತಹಸೀಲ್ದಾರ್ ಮಂಜುನಾಥ ಅಮಾಸಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.