ಗಾಂಧಿ, ಲಾಲ್‌ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಕರೆ

KannadaprabhaNewsNetwork |  
Published : Sep 22, 2026, 02:15 AM IST
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ ಮಾತನಾಡಿದರು. | Kannada Prabha

ಸಾರಾಂಶ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅ.2ರಂದು ಜಿಲ್ಲೆಯಾದ್ಯಂತ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ ಸೂಚಿಸಿದರು.

ಹಾವೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅ.2ರಂದು ಜಿಲ್ಲೆಯಾದ್ಯಂತ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಯಂತಿ ಅಂಗವಾಗಿ ಸ್ವಚ್ಛತಾ ಶ್ರಮದಾನ, ಗಿಡ ನೆಡುವಿಕೆ ಹಾಗೂ ಪರಿಸರ ಸಂರಕ್ಷಣಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗಾಂಧೀಜಿಯವರ ಸ್ವಚ್ಛತೆ, ಶ್ರಮದ ಗೌರವ ಮತ್ತು ಸೇವಾ ಮನೋಭಾವದ ಸಂದೇಶವನ್ನು ಜನರಿಗೆ ತಲುಪಿಸಬೇಕು ಎಂದರು.

ಶ್ರಮದಾನಕ್ಕೆ ಆದ್ಯತೆ: ಗಾಂಧೀಜಿಯವರ ಸ್ವಚ್ಛತೆ, ಶ್ರಮದ ಗೌರವ, ಸ್ವಾವಲಂಬನೆ ಹಾಗೂ ಸಾಮಾಜಿಕ ಸೇವೆಯ ಆಶಯಗಳನ್ನು ಜನರಲ್ಲಿ ಬೆಳೆಸುವ ಉದ್ದೇಶದಿಂದ ಜಯಂತಿ ಅಂಗವಾಗಿ ವಿವಿಧೆಡೆ ಶ್ರಮದಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಗ್ರಾಮ ಪಂಚಾಯಿತಿಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಎಲ್ಲ ಇಲಾಖೆಗಳು ಸೆಪ್ಟೆಂಬರ್ 30ರಂದು ಸಾರ್ವಜನಿಕ ಸ್ಥಳಗಳು, ರಸ್ತೆಗಳು ಹಾಗೂ ಕಚೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಕಚೇರಿ ಆವರಣವನ್ನು ಸ್ವಚ್ಛಗೊಳಿಸುವುದು, ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ವಚ್ಛತಾ ಕಾರ್ಯಕ್ಕೆ ಅಗತ್ಯವಿರುವ ಸಾಮಗ್ರಿಗಳನ್ನು ನಗರಸಭೆ ವತಿಯಿಂದ ಒದಗಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಗಾಂಧೀಜಿಯವರ ಸ್ವಚ್ಛತೆ ಮತ್ತು ಸೇವೆಯ ಆಶಯಗಳನ್ನು ಜನಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ನಡೆಸಬೇಕು. ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಜವಾಬ್ದಾರಿ ಪ್ರತಿಯೊಬ್ಬರಲ್ಲೂ ಮೂಡಿಸುವುದರ ಜೊತೆಗೆ ಸಮುದಾಯದ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಶ್ರಮದಾನವನ್ನು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ನಿರಂತರ ಸ್ವಚ್ಛತೆ ಹಾಗೂ ಸಾರ್ವಜನಿಕ ಸೇವೆಯ ಮನೋಭಾವ ಬೆಳೆಸುವ ಕಾರ್ಯಕ್ರಮವನ್ನಾಗಿ ರೂಪಿಸಬೇಕು ಎಂದರು.

ಗಿಡ ನೆಟ್ಟು ಸಂರಕ್ಷಿಸಲು ಸೂಚನೆ: ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು, ವಿದ್ಯಾರ್ಥಿ ನಿಲಯಗಳು, ಸರ್ಕಾರಿ ಕಚೇರಿಗಳು ಹಾಗೂ ವಿವಿಧ ಇಲಾಖೆಗಳ ಆವರಣಗಳಲ್ಲಿ ವಿಶೇಷ ಗಿಡ ನೆಡುವಿಕೆ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಾಮಾಜಿಕ ಅರಣ್ಯ ಇಲಾಖೆಯಿಂದ ಉಚಿತವಾಗಿ ಗಿಡಗಳನ್ನು ಪಡೆದು ನೆಡಬೇಕು. ನೆಟ್ಟ ಗಿಡಗಳ ಪಾಲನೆ, ಪೋಷಣೆ ಹಾಗೂ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಬಿಳಿ ಅಥವಾ ಖಾದಿ ಉಡುಪು ಧರಿಸಲು ಕರೆ: ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ಇಲಾಖೆಗಳ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ಒಂದೇ ಮಾದರಿಯ ಸರಳ ಹಾಗೂ ಶಿಸ್ತಿನ ಉಡುಪು ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಬಿಳಿ ಬಣ್ಣದ ಉಡುಪು ಅಥವಾ ಖಾದಿ ಉಡುಪು ಧರಿಸುವ ಮೂಲಕ ಮಹಾತ್ಮ ಗಾಂಧೀಜಿಯವರ ಸರಳತೆ, ಸ್ವದೇಶಿ ಹಾಗೂ ಸ್ವಾವಲಂಬನೆಯ ಸಂದೇಶವನ್ನು ಪ್ರತಿಬಿಂಬಿಸುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದರು.

ಸಭೆಯಲ್ಲಿ ನಗರಸಭೆ ಆಯುಕ್ತರಾದ ಎಚ್.ಕಾಂತರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರಯ್ಯಸ್ವಾಮಿ ಹಿರೇಮಠ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋದಿ ಜನ್ಮದಿನ: ನಾಳೆ ಬೃಹತ್ ರಕ್ತದಾನ ಶಿಬಿರ
ಸಮಾಜಮುಖಿ ಚಿಂತನೆ, ಅಭಿವೃದ್ಧಿಗೆ ಸದಾಕಾಲ ಮನ್ನಣೆ: ಸಂಸದ ಬೊಮ್ಮಾಯಿ