ಉದ್ಯೋಗ ಖಾತ್ರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಆರಂಭ

KannadaprabhaNewsNetwork |  
Published : Oct 05, 2024, 01:34 AM IST
ಇಒ ಚಂದ್ರಶೇಖರ | Kannada Prabha

ಸಾರಾಂಶ

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉದ್ಯೋಗ ಖಾತ್ರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಆರಂಭಿಸಲಾಗಿದೆ

ಹರಪನಹಳ್ಳಿ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಅ. 2ರಿಂದ ಒಂದು ತಿಂಗಳಕಾಲ ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉದ್ಯೋಗ ಖಾತ್ರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಆರಂಭಿಸಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್‌. ಚಂದ್ರಶೇಖರ ತಿಳಿಸಿದ್ದಾರೆ.ಅವರು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಪ್ರತಿ ಮನೆಗೆ ಭೇಟಿ ನೀಡಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಕುರಿತು ಜಾಗೃತಿ ಮೂಡಿಸಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆ ಸ್ವೀಕರಿಸಲಾಗುವುದು. ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ ಕೆಲಸ ಖಾತ್ರಿಯಾಗಿದ್ದು, ಗಂಡು ಹೆಣ್ಣಿಗೆ ಸಮಾನ ಕೂಲಿ, ಪ್ರತಿ ದಿನಕ್ಕೆ 349 ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸದ ಪ್ರಮಾಣ ಮತ್ತು ಕೆಲಸದ ಅವಧಿ, ಯೋಜನೆಯಡಿ ದೊರೆಯುವ ವೈಯಕ್ತಿಕ ಸೌಲಭ್ಯಗಳು ಮತ್ತು ಅರ್ಹತೆಗಳ ಬಗ್ಗೆ ಅಭಿಯಾನದಲ್ಲಿ ತಿಳಿಸಲಾಗುತ್ತದೆ.

ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರೀಕರಿಗೆ ಮತ್ತು ವಿಶೇಷಚೇತನರಿಗೆ ಶೇ. 50 ರಿಯಾಯಿತಿ, ಕಾಮಗಾರಿಯ ಸ್ಥಳದಲ್ಲಿ ಒದಗಿಸಲಾಗುವ ಸೌಲಭ್ಯಗಳು, ಅಕುಶಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ನಿರ್ವಹಿಸುವ ಕೆಲಸಕ್ಕೆ, ಕೂಲಿ ಕಾರ್ಮಿಕರಿಗೆ ಹೆಚ್ಚುವರಿಯಾಗಿ ಶೇ. 10 ಕೆಲಸ ಪ್ರಮಾಣದಲ್ಲಿ ರಿಯಾಯಿತಿ, ಮಹಿಳಾ ಭಾಗವಹಿಸುವಿಕೆಯನ್ನು ಕನಿಷ್ಠ ಶೇ. 60 ಪ್ರತಿಶತಕ್ಕೆ ಹೆಚ್ಚಿಸುವ ಕುರಿತು ಅಭಿಯಾನದ ವೇಳೆ ತಿಳಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈ ಅಭಿಯಾನದಲ್ಲಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲ ಸದಸ್ಯರು, ಪಿಡಿಒ, ಪಂಚಾಯಿತಿ ಸಿಬ್ಬಂದಿ ಹಾಗೂ ನರೇಗಾ ಸಿಬ್ಬಂದಿಗಳಾದ ಕಾಯಕ ಬಂಧುಗಳು, ತಾಂಡಾ ರೋಜಗಾರ್ ಮಿತ್ರರು, ಗ್ರಾಮ ಕಾಯಕ ಮಿತ್ರರು ಬಿಎಫ್‌ಟಿಗಳು, ತಾಂತ್ರಿಕ ಸಹಾಯಕ ಅಭಿಯಂತರರು ಹಾಗೂ ಅನುಷ್ಠಾನ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಭಾಗವಹಿಸುವರು. ತಮ್ಮ ವಾರ್ಡ್‌ಗಳ ಪ್ರತಿ ಮನೆಗೂ ಭೇಟಿ ನೀಡಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆಯ ಅರ್ಜಿಗಳನ್ನು ಸ್ವೀಕರಿಸಲು ಬೇಡಿಕೆ ಪೆಟ್ಟಿಗೆಯನ್ನು ಅಂಗನವಾಡಿ, ಗ್ರಂಥಾಲಯ, ನ್ಯಾಯಬೆಲೆ ಅಂಗಡಿ ಮತ್ತು ಹಾಲಿನ ಕೇಂದ್ರಗಳಲ್ಲಿ ಸ್ಥಾಪಿಸಿ ಪ್ರತಿದಿನ ಸ್ವೀಕೃತವಾದ ಬೇಡಿಕೆಗಳನ್ನು ಅ. 31ರ ವರೆಗೆ ಅರ್ಜಿಗಳನ್ನು ಸಂಗ್ರಹಿಸಬೇಕು. ಮೊಬೈಲ್‌ ಅಪ್ಲಿಕೇಶನ್‌ ಕೂಡ ಸಿದ್ಧವಾಗಿದ್ದು, ಅದರ ಮೂಲಕವೂ ಸಾರ್ವಜನಿಕರು ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಕುರಿತು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಜನರಿಂದ ಹಾಗೂ ಕಾಮಗಾರಿ ಬೇಡಿಕೆ ಪೆಟ್ಟಿಗೆ ಮೂಲಕ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ, ನಿಯಮಾನುಸಾರ ವಾರ್ಡ್ ಸಭೆಗಳಲ್ಲಿ ಕಾಮಗಾರಿ ಪಟ್ಟಿ ತಯಾರಿಸಿ ಅನುಮೋದಿಸಿ, ಗ್ರಾಮ ಸಭೆಗೆ ಸಲ್ಲಿಸಲಾಗುವುದು ವಾರ್ಡ್ ಸಭೆಯನ್ನು ನ. 11ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಶೋಷಿತ ಮಹಿಳೆಯರು, ಅಬಲೆಯರು, ಪರಿತ್ಯಕ್ತ ಗ್ರಾಮೀಣ ಮಹಿಳೆಯರು ಗ್ರಾಮಸಭೆಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಅವರ ಬೇಡಿಕೆ ಸ್ವೀಕರಿಸುವುದಲ್ಲದೆ ಸಮಸ್ಯೆಗಳು ಇದ್ದಲ್ಲಿ, ಚರ್ಚಿಸಿ ಪರಿಹರಿಸಲು ನೆರವಾಗುವುದು. ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಅವಶ್ಯಕ ಶಾಲಾಭಿವೃದ್ಧಿ ಚಟುವಟಿಕೆಯನ್ನು ಕಾಮಗಾರಿ ಗುಚ್ಛದಲ್ಲಿ ಸೇರ್ಪಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕ್ರೂಢೀಕೃತ ತಾಲೂಕು ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಅನುಮೋದಿಸಿ ಡಿ. 20ರ ಒಳಗಾಗಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅನುಮೋದನೆಗೆ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ