)
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ನಂತರ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ. ಹಲವಾರು ತಿಂಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ ಇದೆ. ಚುನಾವಣಾ ಫಲಿತಾಂಶದ ನಂತರ ಸ್ಫೋಟ ಆಗಲಿದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಭವಿಷ್ಯ ನುಡಿದರು. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಚುನಾವಣೆಯನ್ನು ಕಾಂಗ್ರೆಸ್ ಸವಾಲಾಗಿ ಸ್ವೀಕಾರ ಮಾಡಿದೆ. ಬಿಜೆಪಿ ಕೂಡ ಈ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತ ವಿರೋಧಿ ಅಲೆ ಕಾಣುತ್ತಿದೆ ಎಂದರು.
ಕಳೆದ ಮೂರು ವರ್ಷಗಳ ಆಡಳಿತ ಅವಧಿಯಲ್ಲಿ ಕಾಂಗ್ರೆಸ್‌ಗೆ ಗ್ಯಾರಂಟಿ ಹೊರತುಪಡಿಸಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲು ಆಗಿಲ್ಲ. ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲಭೂತ ಸೌಕರ್ಯಗಳ ವಿಷಯದಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಶಿಕ್ಷಣ ಇಲಾಖೆ ಹದಗೆಟ್ಟು ಹೋಗಿದೆ. ಆರೋಗ್ಯ ಇಲಾಖೆ ವೈದ್ಯರಿಲ್ಲದೆ, ಔಷಧ ಇಲ್ಲದೆ ಕುಸಿದು ಹೋಗಿದೆ. ಬಡವರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಹಾಗೂ ಸಚಿವರಿಗೆ ಅಗಾಧ ವಿಶ್ವಾಸವಿದ್ದು, ಚುನಾವಣಾ ಫಲಿತಾಂಶ ಬಂದ ನಂತರ ಅವರಿಗೆ ಗೊತ್ತಾಗಲಿದೆ ಎಂದು ತಿರುಗೇಟು ನೀಡಿದರು.ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉತ್ಸಾಹ ಇಲ್ಲ. ಬಿಜೆಪಿ ಕಾರ್ಯಕರ್ತರು ರಣೋತ್ಸಾಹದಲ್ಲಿ ಕೆಲಸ ಮಾಡುತ್ತಿದ್ದಾರೆ. ಮತದಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ. ಅಲ್ಪಸಂಖ್ಯಾತರಿಗೆ ಯಾವುದೇ ರೀತಿ ಅನುಕೂಲ ಕಾಂಗ್ರೆಸ್ ಸರ್ಕಾರದಿಂದ ಆಗಿಲ್ಲ. ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬುದು ಗೊತ್ತಾಗಿದೆ. ಹೀಗಾಗಿ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಬದಲು ನೋಟಾಗೆ ಹಾಕಲು ತಿರ್ಮಾನಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ವಿಜಯೇಂದ್ರ ಉತ್ತರಿಸಿದರು.ಕಳೆದ ಒಂದು ವಾರದಿಂದ ಬಾಗಲಕೋಟೆ ನಗರ ಗ್ರಾಮಾಂತರ ಭಾಗದಲ್ಲಿ ಪ್ರವಾಸ ಮಾಡಿದ್ದೇನೆ. ಎಲ್ಲಾ ಮುಖಂಡರ ಜೊತೆ ಪ್ರವಾಸ ಮಾಡಿದ್ದೇನೆ. ನಮ್ಮ ಅಭ್ಯರ್ಥಿ ವೀರಣ್ಣ ಚರಂತಿಮಠ ಗೆಲ್ಲುತ್ತಾರೆ. ನನಗೆ ನೂರಕ್ಕೆ ನೂರು ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರವೂ ಬಿಜೆಪಿಯ ಐತಿಹಾಸಿಕ ಗೆಲುವು ಸಾಕ್ಷಿಯಾಗುತ್ತೆ ಎಂದು ಬಿ.ವೈ.ವಿಜಯೇಂದ್ರ ಭರವಸೆ ವ್ಯಕ್ತಪಡಿಸಿದರು.