ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ಕಾಂಗ್ರೆಸ್ ಭದ್ರಕೋಟೆಯಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೊಂಬೆನಾಡು ಚನ್ನಪಟ್ಟಣದಲ್ಲಿ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಮಂಗಳವಾರ ಸಂಜೆ ಭರ್ಜರಿ ರೋಡ್ ಶೋ ಮಾಡುವ ಮೂಲಕ ಮತಬೇಟೆ ನಡೆಸಿದರು.
ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್ .ಮಂಜುನಾಥ್ , ಜೆಡಿಎಸ್ ನಾಯಕ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗೆ ಅಮಿತ್ ಶಾ ತೆರೆದ ವಾಹನದಲ್ಲಿ ೧ ಕಿಮೀ ರೋಡ್ ಶೋ ನಡೆಸಿ ಮತದಾರರನ್ನು ಸೆಳೆದರು.ನಂತರ ನಗರದ ಗಾಂಧಿ ಭವನ ವೃತ್ತದಲ್ಲಿ ಬಿಜೆಪಿ - ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಸ್ ಡಿಪಿಐ ಪಕ್ಷದ ಹಿನ್ನೆಲೆ ಎಲ್ಲರಿಗೂ ಗೊತ್ತಿದೆ. ಆ ಪಕ್ಷ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಅನ್ನು ಬೆಂಬಲ ನೀಡಿರುವ ಮಾಹಿತಿ ಬಂದಿದೆ. ಈ ಬಗ್ಗೆ ಮತದಾರರೂ ಆಲೋಚನೆ ಮಾಡಬೇಕು. ಇದಕ್ಕೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕೆಂದು ಪರೋಕ್ಷವಾಗಿ ಹೇಳಿದರು.
ಮೋದಿಯವರು 23 ವರ್ಷ ಮುಖ್ಯಮಂತ್ರಿಯಾಗಿ, 10 ವರ್ಷ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಮೇಲೆ 1 ರುಪಾಯಿಯ ಭ್ರಷ್ಟಾಚಾರದ ಆರೋಪ ಇಲ್ಲ. ಆದರೆ, ಕಾಂಗ್ರೆಸ್ ಪಕ್ಷ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿದೆ ಎಂದು ವಾಗ್ದಾಳಿ ನಡೆಸಿದರು.
ಮೋದಿಯವರು 400ಕ್ಕೂ ಹೆಚ್ಚು ಸಂಸದರನ್ನು ಗೆಲ್ಲಿಸಿ ದೇಶವನ್ನು ಮುನ್ನಡೆಸಲು ಅವಕಾಶ ನೀಡುವಂತೆ ಕರೆ ನೀಡಿದ್ದಾರೆ. ಇಡೀ ದೇಶ ಮೋದಿ ಪರವಾಗಿದೆ. ಮೋದಿ ಅವರಂತಹ ಪ್ರಾಮಾಣಿಕ ಪ್ರಧಾನಿ, ಮಂಜುನಾಥ್ ಅವರಂತರ ಸೇವಾಮನೋಭಾವದ ಅಭ್ಯರ್ಥಿ ನಮ್ಮಲ್ಲಿದ್ದಾರೆ ಎಂದು ಹೇಳಿದರು.
ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್ .ಮಂಜುನಾಥ್ , ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ , ಮಾಜಿ ಶಾಸಕ ಎ.ಮಂಜುನಾಥ್ , ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥ ನಾರಾಯಣಗೌಡ ಮತ್ತಿತರರು ಭಾಗವಹಿಸಿದ್ದರು.