ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಒಂದು ಮಹತ್ವದ ಬೆಳವಣಿಗೆಯಾಗಿದ್ದರೂ, ಅದರಿಂದ ಮಾತ್ರ ನ್ಯಾಯ ದೊರೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು. ನೀಟ್ ಪರೀಕ್ಷೆ ಅಕ್ರಮದಿಂದಾಗಿ ವಿದ್ಯಾರ್ಥಿಗಳು ಅನುಭವಿಸಿರುವ ಅನ್ಯಾಯಕ್ಕೆ ಸಂಪೂರ್ಣ ಹೊಣೆಗಾರರನ್ನು ಕಾನೂನಿನ ಮುಂದೆ ತರಬೇಕು ಹಾಗೂ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದೃಢ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ನಗರದ ಕಸ್ತೂರಿಬಾ ಗಾಂಧಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಆವರಣದಲ್ಲಿ ಗಾಂಧಿ ಪ್ರತಿಮೆ ಎದುರು ಮೇಣದಬತ್ತಿ ಮೆರವಣಿಗೆ ನಡೆಯಿತು. ಈ ವೇಳೆ ಶಾಸಕ ಕೆ. ಎಂ. ಶಿವಲಿಂಗೇಗೌಡ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗವಹಿಸಿ ವಿದ್ಯಾರ್ಥಿಗಳ ನ್ಯಾಯಸಮ್ಮತ ಹೋರಾಟಕ್ಕೆ ಬೆಂಬಲ ಸೂಚಿಸಿದರು.ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕರು, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಒಂದು ಮಹತ್ವದ ಬೆಳವಣಿಗೆಯಾಗಿದ್ದರೂ, ಅದರಿಂದ ಮಾತ್ರ ನ್ಯಾಯ ದೊರೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು. ನೀಟ್ ಪರೀಕ್ಷೆ ಅಕ್ರಮದಿಂದಾಗಿ ವಿದ್ಯಾರ್ಥಿಗಳು ಅನುಭವಿಸಿರುವ ಅನ್ಯಾಯಕ್ಕೆ ಸಂಪೂರ್ಣ ಹೊಣೆಗಾರರನ್ನು ಕಾನೂನಿನ ಮುಂದೆ ತರಬೇಕು ಹಾಗೂ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದೃಢ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ತಕ್ಷಣ ಹಿಂಪಡೆಯಬೇಕು. ಅಲ್ಲದೆ, ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ಮೂಲಕ ನ್ಯಾಯ ಒದಗಿಸಬೇಕು. ದೇಶದ ಯುವಜನತೆ ಶಿಕ್ಷಣ ವ್ಯವಸ್ಥೆಯ ಮೇಲೆ ಹೊಂದಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಪಾರದರ್ಶಕ ಮತ್ತು ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೊಳಿಸುವುದು ಅತ್ಯಗತ್ಯ ಎಂದು ಅವರು ಹೇಳಿದರು.ಮೆರವಣಿಗೆಯಲ್ಲಿ ಮೈಲಾಡುತುರೈ (ತಮಿಳುನಾಡು) ಲೋಕಸಭಾ ಕ್ಷೇತ್ರದ ಸಂಸದೆ ಹಾಗೂ ಎಐಸಿಸಿ ವೀಕ್ಷಕರಾದ ಆರ್. ಸುಧಾ, ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಎಂ. ಪಟೇಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಈ. ಎಚ್. ಲಕ್ಷ್ಮಣ್, ಕೆಪಿಸಿಸಿ ಕಾರ್ಯಾಧ್ಯಕ್ಷ ಶಶಿಧರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ವಿದ್ಯಾರ್ಥಿಗಳ ಹೋರಾಟಕ್ಕೆ ಐಕ್ಯತೆ ವ್ಯಕ್ತಪಡಿಸಿದರು.ಪ್ರತಿಭಟನೆಯ ಅಂತ್ಯದಲ್ಲಿ ಮೇಣದಬತ್ತಿ ಬೆಳಗಿಸಿ ಮೃತ ವಿದ್ಯಾರ್ಥಿಗಳಿಗೆ ಮೌನ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿದ್ಯಾರ್ಥಿಗಳ ಭವಿಷ್ಯ, ಶಿಕ್ಷಣ ವ್ಯವಸ್ಥೆಯ ಪಾರದರ್ಶಕತೆ ಹಾಗೂ ನ್ಯಾಯಕ್ಕಾಗಿ ಈ ಹೋರಾಟ ಮುಂದುವರಿಯಲಿದೆ ಎಂದು ನಾಯಕರು ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.