ಬಳ್ಳಾರಿ: ಮುಂಬರುವ ದಿನಗಳಲ್ಲಿ ಲೋಕಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಯಾಗಲಿದ್ದು, ಅನುಮತಿಯಿಲ್ಲದೇ ಫ್ಲೆಕ್ಸ್, ಕರಪತ್ರ, ಬ್ಯಾನರ್ ಮುದ್ರಿಸುವಂತಿಲ್ಲ. ಕಡ್ಡಾಯವಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿ ಪಡೆಯಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಪ್ರಿಂಟಿಂಗ್ ಪ್ರೆಸ್ ಮಾಲೀಕರೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಯಾವುದೇ ರೀತಿಯ ರಾಜಕೀಯ ಮತಪ್ರಚಾರ ಮತ್ತು ಕೋಮುಗಲಭೆ ಸೃಷ್ಟಿಸುವಂತಹ ಬ್ಯಾನರ್‌ಗಳಾಗಲಿ, ಹೋರ್ಡಿಂಗ್ಸ್‌ಗಳಾಗಲಿ ಮತ್ತು ಕರಪತ್ರಗಳನ್ನಾಗಲಿ ಅನುಮತಿಯಿಲ್ಲದೇ ಮುದ್ರಿಸುವಂತಿಲ್ಲ. ಮುದ್ರಣಕ್ಕೆ ಮೂರು ದಿನಗಳ ಮುಂಚಿತವಾಗಿ ಅನುಮತಿ ಪಡೆಯಬೇಕು ಎಂದರು.
ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 127ಎ ಅನ್ವಯ ಪ್ರಿಂಟಿಂಗ್ ಪ್ರೆಸ್‌ನವರು ಚುನಾವಣಾ ಕರಪತ್ರಗಳನ್ನು ಮುದ್ರಣ ಮಾಡುವ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಹಾಗೂ ಚುನಾವಣಾ ಕರಪತ್ರದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು ಹಾಗೂ ಮುದ್ರಣ ಮಾಡಿದ ಪ್ರಮಾಣದ ವಿವರಗಳನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ಸೂಚಿಸಿದರು.ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ. ಯಾವುದೇ ಜಾತಿ, ಧರ್ಮದ ಜನರ ಭಾವನೆಗೆ ಧಕ್ಕೆ ತರುವ ವಿಷಯವನ್ನು ಮುದ್ರಿಸಬಾರದು. ಮಾಲೀಕರು ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸಿದರೆ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದರು.
1951ರ ಕಾಯಿದೆ ಸೆಕ್ಷನ್ 127ಎ ರನ್ವಯ ಚುನಾವಣಾ ಪಾಂಪ್ಲೆಟ್‍ಗಳು ಮತ್ತು ಪೋಸ್ಟರ್ಸ್‍ಗಳು ಮುದ್ರಕರ ಮತ್ತು ಪ್ರಕಾಶಕರ ಹೆಸರು ಮತ್ತು ವಿಳಾಸ ಒಳಗೊಂಡಿರಬೇಕು. ಈ ನಿಯಮ ಪಾಲನೆ ಮಾಡದಿದ್ದಲ್ಲಿ 6 ತಿಂಗಳು ಜೈಲು ಮತ್ತು ₹2 ಸಾವಿರ ದಂಡ ವಿಧಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.ಬೇರೆಡೆ ಸ್ಥಳಗಳಿಂದ ಮುದ್ರಿಸಿ, ನಮ್ಮ ಜಿಲ್ಲೆಯಲ್ಲಿ ಹಂಚುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಪ್ರಿಂಟಿಂಗ್ ಪ್ರೆಸ್ ಮಾಲೀಕರೊಬ್ಬರು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಜಿಲ್ಲೆಯಲ್ಲಿ ಈಗಾಗಲೇ ಎಸ್‍ಎಸ್‍ಟಿ ಮತ್ತು ಎಫ್‍ಎಸ್‍ಟಿ ತಂಡಗಳು ಕಾರ್ಯಪ್ರವೃತ್ತವಾಗಿವೆ. ಅಂತಹ ಘಟನೆಗಳು ಕಂಡುಬಂದಲ್ಲಿ ಜಿಲ್ಲಾಡಳಿತ ಗಮನಕ್ಕೆ ತರಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಸೇರಿದಂತೆ ಜಿಲ್ಲೆಯ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಹಾಗೂ ಇತರರು ಇದ್ದರು.