ಕೊಪ್ಪಳ: ದೇಶದಲ್ಲಿಯೇ ವಿಶೇಷ ಎನ್ನುವಂತೆ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಂದ ಜನರ ಶ್ರೇಯೋಭಿವೃದ್ಧಿಯಾಗಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದ್ದಾರೆ.
ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಂದ ಜನಜೀವನ ಆರ್ಥಿಕವಾಗಿ ಅಭಿವೃದ್ಧಿಯಾಗಿದೆ. ಆಯಾ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗಿದ್ದರೆ ಅಂತಹ ಫಲಾನುಭವಿಗಳು ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಿಗೆ ಹಾಗೂ ಸದಸ್ಯರನ್ನು ಕಂಡು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಬಾರದು ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಮಾತನಾಡಿ, ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಸಾಮಾಜಿಕ ಕಾರ್ಯಕ್ರಮವಾಗಿವೆ. ಅರ್ಹರೆಲ್ಲರೂ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಒಳಪಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು, ಯಾವುದೇ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ಹೊರಗುಳಿಯಬಾರದು. ಈ ಹಿನ್ನೆಲೆಯಲ್ಲಿ ಪ್ರಾಮಾಣಿಕವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾಡಬೇಕು ಎಂದು ಹೇಳಿದರು.ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಸೇರಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗುತ್ತಿರುವ ಸಣ್ಣ-ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು ಎಂದು ಹೇಳಿದರು.