ಕಸದ ಬುಟ್ಟಿ ಹೊತ್ತು, ತಮಟೆ ಬಾರಿಸಿ ಚಿತ್ತಾಕುಲ ಗ್ರಾಪಂಗೆ ಕರವೇ ಮುತ್ತಿಗೆ

KannadaprabhaNewsNetwork |  
Published : May 30, 2026, 02:15 AM IST
 | Kannada Prabha

ಸಾರಾಂಶ

ಸಮರ್ಪಕ ತ್ಯಾಜ್ಯ ವಿಲೇವಾರಿ ಕೊರತೆ ಹಾಗೂ ಅನಧಿಕೃತ ಅಪಾರ್ಟ್‌ಮೆಂಟ್ ನಿರ್ಮಾಣವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ತಾಲೂಕಿನ ಚಿತ್ತಾಕುಲ ಗ್ರಾಪಂ ಕಚೇರಿಗೆ ಕಸದ ಬುಟ್ಟಿ ಹೊತ್ತು, ತಮಟೆ ಬಾರಿಸುವ ಮೂಲಕ ವಿನೂತನ ರೀತಿಯಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಅನಧಿಕೃತ ಕಟ್ಟಡ, ತ್ಯಾಜ್ಯ ಸಮಸ್ಯೆಗೆ ಆಕ್ರೋಶ, ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಕಾರವಾರ

ಸಮರ್ಪಕ ತ್ಯಾಜ್ಯ ವಿಲೇವಾರಿ ಕೊರತೆ ಹಾಗೂ ಅನಧಿಕೃತ ಅಪಾರ್ಟ್‌ಮೆಂಟ್ ನಿರ್ಮಾಣವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ತಾಲೂಕಿನ ಚಿತ್ತಾಕುಲ ಗ್ರಾಪಂ ಕಚೇರಿಗೆ ಕಸದ ಬುಟ್ಟಿ ಹೊತ್ತು, ತಮಟೆ ಬಾರಿಸುವ ಮೂಲಕ ವಿನೂತನ ರೀತಿಯಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮದ ಪ್ರಮುಖ ರಸ್ತೆಗಳಲ್ಲಿ ತಮಟೆ ಬಾರಿಸುತ್ತಾ ಸಾಗಿದ ಪ್ರತಿಭಟನಾಕಾರರು, ಗ್ರಾಪಂ ಆಡಳಿತದ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ಗ್ರಾಪಂ ಕಚೇರಿ ಎದುರು ಧರಣಿ ಕುಳಿತು ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಅಕ್ಷಯ, ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಘಟಕದ ಕೊರತೆಯಿಂದ ಸ್ಥಳೀಯರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಪಾರ್ಟ್‌ಮೆಂಟ್ ನಿವಾಸಿಗಳು ಹಸಿ ಹಾಗೂ ಒಣ ಕಸವನ್ನು ರಸ್ತೆ ಬದಿ ಹಾಗೂ ಸಾರ್ವಜನಿಕ ಪ್ರದೇಶಗಳಿಗೆ ಎಸೆಯುತ್ತಿದ್ದಾರೆ. ಇದರಿಂದ ಚರಂಡಿಗಳು ಕಟ್ಟಿಕೊಂಡು ಮಳೆಗಾಲದಲ್ಲಿ ಕೊಚ್ಚೆ ನೀರು ಸರಾಗವಾಗಿ ಹರಿಯದೆ ರಸ್ತೆಗೆ ಬರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಕನ್ನಡ ಶಾಲೆ, ದೇವಸ್ಥಾನದ ಹಿಂಭಾಗ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೂ ಕಸದ ರಾಶಿ ಬಿದ್ದಿದ್ದು, ಸಾರ್ವಜನಿಕರ ಆರೋಗ್ಯಕ್ಕೆ ಕುತ್ತು ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಕೆಲವು ಅಪಾರ್ಟ್‌ಮೆಂಟ್‌ಗಳಿಗೆ ಯಾವುದೇ ಅಗತ್ಯ ಪರವಾನಗಿ ಇಲ್ಲದೇ ಕಾಮಗಾರಿ ನಡೆಸಲಾಗುತ್ತಿದೆ. ಯಾರ ಒತ್ತಡಕ್ಕೆ ಮಣಿದು ಅಧಿಕಾರಿಗಳು ಇದಕ್ಕೆ ಪರವಾನಗಿ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು. ತಕ್ಷಣವೇ ಹೊಸದಾಗಿ ನಿರ್ಮಾಣವಾಗುತ್ತಿರುವ ಅಪಾರ್ಟ್‌ಮೆಂಟ್‌ ಕಾಮಗಾರಿಗಳನ್ನು ಸ್ಥಗಿತಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಇದರ ಜತೆಗೆ, ಜಲ ಜೀವನ್ ಮಿಷನ್ ಯೋಜನೆಯಡಿ ಕೇವಲ ಕೆಲವೇ ಮನೆಗಳಿಗೆ ನೀರಿನ ಸಂಪರ್ಕ ನೀಡಿ, ಉಳಿದವರಿಗೆ ವಂಚಿಸಲಾಗಿದೆ. ಅಲ್ಲದೇ ಮೀನು ಮತ್ತು ಹಣ್ಣು ವ್ಯಾಪಾರಿಗಳಿಗೆ ನಿಯಮಬಾಹಿರವಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸುವ ಮೂಲಕ ಸಂಚಾರಕ್ಕೆ ಅಡ್ಡಿಯುಂಟುಮಾಡಲಾಗುತ್ತಿದೆ ಎಂದು ದೂರಿದರು.

ಗ್ರಾಪಂ ಆಡಳಿತವು ತಕ್ಷಣವೇ ಎಚ್ಚೆತ್ತುಕೊಂಡು ಗ್ರಾಮದ ಮೂಲಸೌಕರ್ಯ ಹಾಗೂ ಸ್ವಚ್ಛತೆಯತ್ತ ಗಮನಹರಿಸಬೇಕು. ಮುಂದಿನ ಏಳು ದಿನಗಳೊಳಗೆ ಅನಧಿಕೃತ ಕಟ್ಟಡ ಕಾಮಗಾರಿಗಳನ್ನು ಸ್ಥಗಿತಗೊಳಿಸದಿದ್ದರೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿ ಎದುರು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಬಳಿಕ ಚಿತ್ತಾಕುಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರು ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಟೆ ಆಂಜನೇಯ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರ್ಪಡೆ ಬೇಡ
ಭೂ ಸಂತ್ರಸ್ತ ರೈತರಿಗೆ ನ್ಯಾಯ ಸಿಗುವವರೆಗೂ ಹೋರಾಟ ಬಿಡಲ್ಲ: ಮಾಳಮ್ಮ