ಕನ್ನಡಪ್ರಭ ವಾರ್ತೆ ಬೆಂಗಳೂರು
ಕಳೆದ ತಿಂಗಳು ತಮ್ಮ ಹಾಗೂ ತಮ್ಮ ಕುಟುಂಬದ ವಿರುದ್ಧ ಸಚಿವ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಹಾಗೂ ಅವರ ಆಪ್ತ ಸುರೇಶ್ ಬಾಬು ಸುಳ್ಳು ಆರೋಪ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸಂಜಯನಗರ ಠಾಣೆಗೆ ಎಡಿಜಿಪಿ ದೂರು ನೀಡಿದ್ದರು. ಆಗ ಗಂಭೀರ ಸ್ವರೂಪವಲ್ಲದ (ಎನ್‌ಸಿಆರ್) ಪ್ರಕರಣ ಎಂದು ನಮೂದಿಸಿದ್ದ ಪೊಲೀಸರು, ಆನಂತರ ಎಫ್‌ಐಆರ್ ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಿದ್ದರು. ಈಗ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿಸಿದ ಮೇರೆಗೆ ಮೂವರ ವಿರುದ್ಧವೂ ಸೋಮವಾರ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ತನ್ಮೂಲಕ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸಚಿವ ಕುಮಾರಸ್ವಾಮಿ ಮತ್ತು ಎಡಿಜಿಪಿ ಚಂದ್ರಶೇಖರ್ ಮಧ್ಯೆ ನಡೆದಿದ್ದ ‘ಹಂದಿ ಜಂಗೀ ಕುಸ್ತಿ’ ನೇರ ಕಾನೂನು ಸಮರಕ್ಕೆ ಮುನ್ನುಡಿ ಬರೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.ಎಚ್‌ಡಿಕೆ- ಎಡಿಜಿಪಿ ಜಟಾಪಟಿ:
ಎಡಿಜಿಪಿ ದೂರಿನಲ್ಲೇನಿದೆ?:
ನನ್ನ ಕುಟುಂಬದವರ ವಿರುದ್ಧ ಸುಳ್ಳು ಆರೋಪ ಮಾಡಿ ಅವರಿಗೆ ತೊಂದರೆ ಕೊಡುವುದಾಗಿ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ. ನಾನು ಬೌರಿಂಗ್ ಆಸ್ಪತ್ರೆಯಲ್ಲಿ ಸುಳ್ಳು ವೈದ್ಯಕೀಯ ದಾಖಲೆಗಳನ್ನು ಪಡೆದು ಕರ್ನಾಟಕ ಕೇಡರ್‌ನಲ್ಲಿ ಮುಂದುವರೆದಿರುವುದಾಗಿ ಹಾಗೂ ನಾನು ಲಂಚ ತೆಗೆದುಕೊಂಡಿರುವುದಾಗಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಲ್ಲದೆ ಸೆ.29ರಂದು ಸುದ್ದಿಗೋಷ್ಠಿ ನಡೆಸಿ ನನ್ನ ವಿರುದ್ಧ ಕುಮಾಸ್ವಾಮಿ ಅವರ ಪುತ್ರ ನಿಖಿಲ್ ಹಾಗೂ ಅವರ ಆಪ್ತ ಸುರೇಶ್ ಬಾಬು ಸುಳ್ಳು ಆರೋಪ ಮಾಡಿದ್ದಾರೆ. ಇದಲ್ಲದೆ ನನ್ನ ಮೇಲೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿ ಬಳಿಕ ಆ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡುವ ಮೂಲಕ ಬೆದರಿಕೆ ಹಾಕಿದ್ದಾರೆ. ಆಧಾರರಹಿತ ಆರೋಪಗಳ ಮೂಲಕ ನನ್ನ ತೇಜೋವಧೆ ಮಾಡಿದ್ದಲ್ಲದೆ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಸಂಜಯನಗರ ಠಾಣೆಗೆ ಎಡಿಜಿಪಿ ದೂರು ಸಲ್ಲಿಸಿದ್ದಾರೆ.
ಕುಮಾರಸ್ವಾಮಿ ವಿರುದ್ಧ ಈಗಾಗಲೇ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ತಾತಾ ನೀಡಿರುವ ಜೀವ ಬೆದರಿಕೆ ದೂರು ಪೊಲೀಸ್ ಇಲಾಖೆಯಲ್ಲಿದೆ. ಈಗ ಎಡಿಜಿಪಿ ಚಂದ್ರಶೇಖರ್ ನೀಡಿರುವ ದೂರನ್ನೂ ಸೇರಿಸಿ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ನ್ಯಾಯಾಲಯದ ಆದೇಶದ ಮೇರೆಗೆ ಕೇಂದ್ರ ಸಚಿವರು ಸೇರಿದಂತೆ ಮೂವರ ವಿರುದ್ಧ ಸಂಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ.