ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಅಪ್ರಾಪ್ತ ಬಾಲಕಿಯೊಂದಿಗೆ ಭೋವಿನಗರದ ಬಡಾವಣೆಯ ರಾಘವೇಂದ್ರ (37) ಎಂಬಾತ ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂಬ ವಿಷಯ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದ ಜನರು ಸಾರ್ವಜನಿಕ ಆಸ್ಪತ್ರೆ ವೃತ್ತದಲ್ಲಿ ಜಮಾಯಿಸಿದರು. ಘಟನೆಯನ್ನು ಖಂಡಿಸಿ ಕೂಡಲೇ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ತಪಾಸಣೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಈ ಮಾಹಿತಿ ತಿಳಿದು ಸಾವಿರಾರು ಮಂದಿ ಆಸ್ಪತ್ರೆ ಹಾಗೂ ಪೊಲೀಸ್ ಠಾಣೆ ಬಳಿ ಜಮಾಯಿಸಿ, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಸ್ಥಳಕ್ಕೆ ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್, ಡಿವೈಎಸ್‌ಪಿ ಲಕ್ಷ್ಮಯ್ಯ, ಬಂಗಾರಪೇಟೆ ಸರ್ಕಲ್ ಇನ್‌ಸ್ಪೆಕ್ಟರ್ ರವಿಕುಮಾರ್ ಸೇರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಿ ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡರು. ಈ ವೇಳೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹಾಗೂ ಕೆಜಿಎಫ್ ಎಸ್ಪಿ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಘವೇಂದ್ರ ಎಂಬ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಾಲಕಿ ಹಾಗೂ ಆಕೆಯ ಪೋಷಕರಿಂದ ಮಾಹಿತಿ ಪಡೆಯಲಾಗಿದೆ. ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಲಾಗುವುದು, ಸಾರ್ವಜನಿಕರು ಯಾವುದೇ ಪ್ರಚೋಧನೆಗೆ ಒಳಗಾಗದೆ ಶಾಂತವಾಗಿ ವರ್ತಿಸಬೇಕೆಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.