ಹೂವಿನಹಡಗಲಿ: ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿಯಲ್ಲಿ ಪ್ರತಿ ಮನೆಗೂ ನಳ ಹಾಕುವ ಕಾಮಗಾರಿ ಅರೆಬರೆ ಮಾಡಿರುವ ಗುತ್ತಿಗೆದಾರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಅಂಬೇಡ್ಕರ್ ಸನಗುಂದ ತಿಳಿಸಿದ್ದಾರೆ.
ತಾಲೂಕಿನ ದುಂಗಾವತಿ ತಾಂಡಾದಲ್ಲಿ ಜೆಜೆಎಂ ಕಾಮಗಾರಿ ಕಳೆದ ಒಂದು ವರ್ಷದಿಂದ ನಡೆಯುತ್ತಿತ್ತು. ಈ ಕುರಿತು ಗುತ್ತಿಗೆದಾರರಿಗೆ 7 ಬಾರಿ ನೋಟಿಸ್ ನೀಡಿದ್ದರೂ ಕಾಮಗಾರಿ ಸ್ಥಳಕ್ಕೆ ಬಂದಿಲ್ಲ. ಆದ್ದರಿಂದ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.
ತಾಲೂಕಿನ ವಿವಿಧ ಕಡೆಗಳಲ್ಲಿ ಮುಖ್ಯ ರಸ್ತೆ ಹಾಗೂ ಸಿಸಿ ರಸ್ತೆ ಕಿತ್ತು ಹಾಕಿದ್ದಾರೆ. ಅವುಗಳನ್ನು ಸರಿಯಾಗಿ ದುರಸ್ತಿ ಮಾಡಲು ಸೂಚಿಸಲಾಗಿದೆ. ಗುತ್ತಿಗೆದಾರರು ಸರಿಯಾಗಿ ಕಾಮಗಾರಿ ಮಾಡದಿದ್ದರೆ ಅವರ ವಿರುದ್ಧ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದರು.ಬಿಸಿಎಂ ಇಲಾಖೆ ವಿಸ್ತರಣಾಧಿಕಾರಿ ಎಂ.ಪಿ.ಎಂ. ಅಶೋಕ ಮಾತನಾಡಿ, ಮಾಗಳ, ಬೂದನೂರು ವಸತಿ ನಿಲಯಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಕೊಳವೆಬಾವಿ ಕೊರೆಸಿ ನೀರಿನ ವ್ಯವಸ್ಥೆ ಮಾಡಬೇಕಿದೆ. ಜತೆಗೆ ಮಾಗಳ, ಬೂದನೂರು, ಕತ್ತೆಬೆನ್ನೂರು ಗ್ರಾಮಗಳ ವಸತಿ ನಿಲಯಗಳಿಗೆ ಕಾಂಪೌಂಡ್ ವ್ಯವಸ್ಥೆ ಮಾಡಬೇಕಿದೆ. ಜತೆಗೆ ಕೆಲವು ಕಡೆಗಳಲ್ಲಿ ಶೌಚಾಲಯ ವ್ಯವಸ್ಥೆ ಬೇಕಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸರ್ಕಾರಿ ಶಾಲೆಗಳ ಆಸ್ತಿಗಳನ್ನು ಕಡ್ಡಾಯವಾಗಿ ಇ-ಸ್ವತ್ತು ಮಾಡಬೇಕಿದೆ. ಬಾಕಿ ಉಳಿದಿರುವ ಆಸ್ತಿಗಳ ಸೂಕ್ತ ದಾಖಲೆಗಳನ್ನು ಸಲ್ಲಿಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಭೀಮಪ್ಪ ಹೇಳಿದರು.
ಸಭೆಯಲ್ಲಿ ತಾಪಂ ಇಒ ಎಂ. ಉಮೇಶ ಉಪಸ್ಥಿತರಿದ್ದರು.