ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನ-ಜಾನುವಾರು ಹಾಗೂ ಆಸ್ತಿ ರಕ್ಷಣೆಗೆ ಮುಂದಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ವಿಡಿಯೋ ಸಂವಾದ ಮೂಲಕ ಶುಕ್ರವಾರ ಮಾತನಾಡಿದ ಅವರು, ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ ಎರಡು ಮೂರು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಾಗಲೇ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಂತೆ ಸೂಚಿಸಿದರು.
ಜಿಲ್ಲೆಯ 103 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಸ್ಕ್‌ಫೋರ್ಸ್ ಸಮಿತಿ ರಚಿಸಿ ಪ್ರವಾಹ, ಬರೆಕುಸಿತ ಮತ್ತಿತರ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು.ಪ್ರಾಕೃತಿಕ ವಿಕೋಪ ಸಂಬಂಧ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಎಲ್ಲಾ ಹಂತದ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಪ್ರವಾಹ ಪೀಡಿತ ಪ್ರದೇಶದವರನ್ನು ಸ್ಥಳಾಂತರಿಸಲು ಕಾಳಜಿ ಕೇಂದ್ರ ತೆರೆಯಬೇಕು. ಕಾಳಜಿ ಕೇಂದ್ರದಲ್ಲಿ ವಿದ್ಯುತ್, ಶೌಚಾಲಯ, ಇತರ ಮೂಲ ಸೌಲಭ್ಯಗಳು ಇರುವಂತೆ ಗಮನಹರಿಸಬೇಕು. ತಹಸೀಲ್ದಾರರು, ತಾ.ಪಂ.ಇಒಗಳು ಇತರರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.ಕಾಳಜಿ ಕೇಂದ್ರದಲ್ಲಿ ಆರೋಗ್ಯ ಸೇವೆ ಕಲ್ಪಿಸಬೇಕು. ಆಂಬ್ಯುಲೆನ್ಸ್ ಸೇವೆ ಸಿದ್ಧವಾಗಿರಬೇಕು. ಸಂತ್ರಸ್ತರಿಗೆ ತಕ್ಷಣವೇ ಸ್ಪಂದಿಸುವ ಕಾರ್ಯ ಆಗಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಹಾಸಿಗೆಗಳು ಇವೆ ಎಂದು ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸೂಚಿಸಿದರು.
ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸಬೇಕು. ಜಿಲ್ಲಾಡಳಿತದಿಂದ ಕಾಲಕಾಲಕ್ಕೆ ಹೊರಡಿಸುವ ಆದೇಶವನ್ನು ಚಾಚುತಪ್ಪದೆ ಪಾಲಿಸಬೇಕು. ಸುಳ್ಯ ಕಡೆಯಿಂದ ಬರುವ ವಾಹನಗಳಿಗೆ ಮಾಹಿತಿ ಫಲಕ ಅಳವಡಿಸಬೇಕು ಎಂದು ಹೆದ್ದಾರಿ ವಿಭಾಗದ ಎಂಜಿನಿಯರ್‌ಗೆ ಸೂಚಿಸಿದರು.ಶಿಕ್ಷಣ ಸಂಸ್ಥೆ ಸಿಬ್ಬಂದಿ ಹಾಜರಿ ಕಡ್ಡಾಯ:
ಶಾಲಾ-ಕಾಲೇಜು ರಜೆ ಇದೆ ಎಂದು ಸಿಬ್ಬಂದಿ ಗೈರು ಆಗಬಾರದು. ಸಿಬ್ಬಂದಿಗಳು ಶಾಲಾ-ಕಾಲೇಜಿಗೆ ಹಾಜರಾಗಬೇಕು. ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ಪ್ರಾಕೃತಿಕ ವಿಕೋಪ ಜೊತೆ ಡೆಂಘೀ ನಿಯಂತ್ರಣ ಬಗ್ಗೆ ಗಮನಹರಿಸಬೇಕು. ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಿಕೊಂಡು, ಆರೋಗ್ಯ ಸೇವೆ ಕಲ್ಪಿಸಬೇಕು ಎಂದು ಸೂಚಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಹೆದ್ದಾರಿಯಲ್ಲಿ ಸಾರಿಗೆ ಸಂಪರ್ಕಕ್ಕೆ ಯಾವುದೇ ರೀತಿ ತೊಂದರೆ ಆಗದಂತೆ ಗಮನಹರಿಸಲಾಗಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸಲಾಗಿದೆ ಎಂದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ತಾ.ಪಂ.ಇಒಗಳಾದ ಶೇಖರ್ ಮತ್ತು ಅಪ್ಪಣ್ಣ,ತಹಸೀಲ್ದಾರ್ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ರಾಮಚಂದ್ರ ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜಾಚಾರಿ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳು, ಇತರರು ವಿಡಿಯೊ ಸಂವಾದದಲ್ಲಿ ಪಾಲ್ಗೊಂಡಿದ್ದರು.ವಿಡಿಯೊ ಸಂವಾದ ಬಳಿಕ ಜಿಲ್ಲೆಯಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಶಾಲಾ ಕಟ್ಟಡಗಳ ಸ್ಥಿತಿಗತಿ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ಅವರಿಂದ ಮಾಹಿತಿ ಪಡೆದರು.
ಬಳಿಕ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ಜತೆ ನಡೆದ ವಿಡಿಯೊ ಸಂವಾದದಲ್ಲಿ ಪಾಲ್ಗೊಂಡು ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಪ್ರವಾಹ ಪೀಡಿತ ಸಂತ್ರಸ್ತರ ಸ್ಥಳಾಂತರ, ಕಾಳಜಿ ಕೇಂದ್ರ ಸ್ಥಾಪನೆ ಮತ್ತಿತರ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಹಿತಿ ನೀಡಿದರು.