ಬಳ್ಳಾರಿ: ಸಾರ್ವಜನಿಕರು ಇಂದಿನ ಡಿಜಿಟಲ್ ಯುಗದಲ್ಲಿ ವ್ಯವಹರಿಸುವಾಗ ಬಹಳ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ತಿಳಿಸಿದರು.
ಔದ್ಯೋಗಿಕರಣದ ನಂತರ ಬಂದಿರುವ ಪ್ರಸ್ತುತ ಡಿಜಿಟಲ್ ಯುಗದಲ್ಲಿ ಜನರು ಬಹುತೇಕ ಆನ್‍ಲೈನ್‍ನಲ್ಲಿಯೇ ವ್ಯವಹರಿಸುವುದು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಷ್ಟೇ ಪ್ರಮಾಣದಲ್ಲಿ ಮೋಸ ಕೂಡ ಹೋಗುತ್ತಿದ್ದಾರೆ. ಆದ್ದರಿಂದ ಗ್ರಾಹಕರು ಆನ್‍ಲೈನ್‍ನಲ್ಲಿ ವ್ಯವಹರಿಸುವಾಗ ಬಹಳ ಎಚ್ಚರಿಕೆ ವಹಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್. ತಿಪ್ಪೇಸ್ವಾಮಿ ಅವರು, ಹೋಟೆಲ್‍ಗಳಲ್ಲಿ ತಿನ್ನುವ ಆಹಾರ ಪದಾರ್ಥ ರುಚಿ ಮತ್ತು ಗುಣಮಟ್ಟ ಇಲ್ಲದಿದ್ದಲ್ಲಿ, ಸಂಬಂಧಿಸಿದ ಇಲಾಖೆಗಳಿಗೆ ದೂರು ಸಲ್ಲಿಸಬಹುದು. ಮಾಲ್‍ಗಳಲ್ಲಿ ಯಾವುದೇ ವಸ್ತು ಅಥವಾ ಇನ್ನಿತರ ಸಾಮಗ್ರಿಗಳನ್ನು ಖರೀದಿ ಮಾಡಿದಾಗ ಅವುಗಳನ್ನು ಕೊಂಡೊಯ್ಯಲು ನೀಡುವ ಬ್ಯಾಗ್‍ಗಳಿಗೂ ಬೆಲೆ ನಿಗದಿ ಮಾಡಿರುತ್ತಾರೆ. ಸುಪ್ರೀಂ ಕೋರ್ಟ್‍ನ ಆದೇಶದಂತೆ ಕ್ಯಾರಿ ಬ್ಯಾಗ್‍ಗಳನ್ನು ಉಚಿತವಾಗಿ ನೀಡಬೇಕು. ಇಲ್ಲದಿದ್ದಲ್ಲಿ ಗ್ರಾಹಕರ ವ್ಯಾಜ್ಯಗಳ ಆಯೋಗಕ್ಕೆ ದೂರು ನೀಡಬಹುದು ಎಂದರು.ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸಕೀನಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಕೀಲರಾದ ಎನ್. ಪ್ರಕಾಶ್ ಅವರು “ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯಾಪಾರ ಯುಗದಲ್ಲಿ ಗ್ರಾಹಕರ ರಕ್ಷಣೆ” ವಿಷಯ ಕುರಿತು ಹಾಗೂ ಹಿರಿಯ ವಕೀಲ ಬಿ. ವೆಂಕಟೇಶ್ ಪ್ರಸಾದ್ ಅವರು “ಗ್ರಾಹಕರ ಸಂರಕ್ಷಣಾ ಕಾಯ್ದೆ 2019ರ ಕಲಂ 72”ರ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು.ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ, ಕಾನೂನು ಮಾಪನ ಶಾಸ್ತ್ರದ ಸಹಾಯಕ ನಿಯಂತ್ರಕ ಅಮೃತಾ ಪಿ. ಚವ್ಹಾಣ, ಜಿಲ್ಲಾ ಪರಿವೀಕ್ಷಣಾ ಘಟಕದ ಜಿಲ್ಲಾ ಅಂಕಿತಾಧಿಕಾರಿ ಡಾ. ಪ್ರಕಾಶ್ ಎಸ್. ಪುಣ್ಯಶೆಟ್ಟಿ, ಶ್ರೀಮೇಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮ್ ಕಿರಣ್, ಸಂಡೂರು ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಪ್ರಾಧಿಕಾರದ ಅಧಿಕಾರಿ ಅಂಬಾದಾಸ್, ಬಳ್ಳಾರಿ ಬಾರ್ ಕೌನ್ಸಿಲ್‍ನ ಕಾರ್ಯದರ್ಶಿ ರವೀಂದ್ರ ಸೇರಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶ್ರೀಮೇಧಾ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.