ಕನ್ನಡಪ್ರಭ ವಾರ್ತೆ ಮದ್ದೂರು
ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಂಡ್ಯ ಜಿಲ್ಲೆಗೆ ಮೊದಲ ಬಾರಿಗೆ ಜಿಲ್ಲೆಯ ಗಡಿಭಾಗ ನಿಡಘಟ್ಟಕ್ಕೆ ಆಗಮಿಸಿದಾಗ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಂತರ ರೋಡ್‌ಶೋ ಮೂಲಕ ಪಟ್ಟಣಕ್ಕೆ ಆಗಮಿಸಿದ ಅವರು, ಪ್ರವಾಸಿ ಮಂದಿರ ವೃತ್ತದಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಲೋಕಸಭಾ ಚುನಾವಣಾ ವೇಳೆ ನಾನು ಕೊಟ್ಟ ಮಾತಿನಂತೆ ಕಾವೇರಿ ಸಮಸ್ಯೆಯನ್ನು ಇತ್ಯರ್ಥ ಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಲಹೆ ಮೇರೆಗೆ ಕಾವೇರಿ ವಿಚಾರವಾಗಿ ಸಂಬಂಧಿಸಿದಂತೆ ನೀವು ಕೊಟ್ಟ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡು ಕೇಂದ್ರ ಸರ್ಕಾರದೊಂದಿಗೆ ವ್ಯವಹರಿಸಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.
ಮಂಡ್ಯ ಜಿಲ್ಲೆ 50 ವರ್ಷಗಳ ಹಿಂದೆ ಹೇಗಿತ್ತೋ ಹಾಗೆಯೇ ಇದೆ. ಎಲ್ಲವನ್ನೂ ಸರಿಪಡಿಸಲು ನನಗೆ ಸ್ವಲ್ಪ ಸಮಯ ಅಂದರೆ, ಎರಡು ಮೂರು ತಿಂಗಳು ಕಾಲಾವಕಾಶ ಕೊಡಬೇಕು. ಯಾವ ರೀತಿ ಅಭಿವೃದ್ಧಿ ಮಾಡಬೇಕು ಎಂಬ ಬಗ್ಗೆ ಚಿಂತನೆ ನಡೆಸಿ, ನನ್ನ ಮೇಲೆ ಜಿಲ್ಲೆಯ ಜನತೆ ಇಟ್ಟಿರುವ ವಿಶ್ವಾಸದ ಋಣವನ್ನು ತೀರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಈ ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ ರೈತರ ಬದುಕಿನಲ್ಲಿ ಬೆಳಕು ಕಾಣುವಂತಹ ಪ್ರಯತ್ನ ಮಾಡಿದ್ದೇನೆ. ಅದೇ ರೀತಿ ಈಗ ಯುವಜನರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದರು.
ಮಂಡ್ಯ ಜಿಲ್ಲೆಗೂ ನಮಗೂ ಯಾವುದೋ ಒಂದು ಪೂರ್ವಜನ್ಮದ ಸಂಬಂಧ ಇದೆ. ಅದಕ್ಕಾಗಿ ನಾನು ಮತ್ತು ನನ್ನ ಕುಟುಂಬ ಈ ಜಿಲ್ಲೆಯ ಜನರನ್ನು ಹೃದಯದಲ್ಲಿಟ್ಟುಕೊಂಡು ಪೂಜಿಸುತ್ತಿದ್ದೇವೆ ಎಂದು ಹೇಳಿದರು.
ಜಿಲ್ಲೆಯ ಜವಾಬ್ದಾರಿ ನಿಖಿಲ್‌ಗೆ :
ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಖಾತೆ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಅಗತ್ಯವಿದೆ. ಹೀಗಾಗಿ ನಾನು 15 ದಿನಗಳ ಕಾಲ ಸತತವಾಗಿ ಅದನ್ನು ತಿಳಿಯುವ ಪ್ರಯತ್ನ ಮಾಡುತ್ತೇನೆ. ಅಲ್ಲಿಯವರೆಗೆ ಕಾಲಾವಕಾಶ ಬೇಕಾಗುತ್ತದೆ. ನಂತರ ನಾನು ಸಮಯ ಸಿಕ್ಕಾಗಲೆಲ್ಲಾ ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಗೂ ಭೇಟಿ ನೀಡಿ ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.