ಕನ್ನಡಪ್ರಭ ವಾರ್ತೆ ಬೆಂಗಳೂರು
ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಂತರ ರು. ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ತನಿಖೆಗೆ ಸಿಬಿಐ ಪ್ರವೇಶಿಸಿದ್ದು, ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯೂನಿಯನ್ ಬ್ಯಾಂಕ್‌ನ ಅಧಿಕಾರಿಗಳು ಸೇರಿ ಐವರ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದೆ. ಪ್ರಕರಣದ ತನಿಖೆಯನ್ನು ಸಿಬಿಐ ತೆಗೆದುಕೊಂಡಿರುವುದರಿಂದ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತನಿಖೆ ಸ್ಥಗಿತಗೊಳ್ಳಲಿದೆ. ಏಕಕಾಲಕ್ಕೆ ಎರಡು ತನಿಖಾ ತಂಡಗಳು ತನಿಖೆ ನಡೆಸುವುದು ಸಾಧ್ಯವಾಗುವುದಿಲ್ಲ. ಕೇಂದ್ರ ತನಿಖಾ ಸಂಸ್ಥೆ ಪ್ರಕರಣದಲ್ಲಿ ಪ್ರವೇಶಿಸಿರುವುದರಿಂದ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಯ ತನಿಖೆ ಸ್ಥಗಿತವಾಗಲಿದೆ.
ನಗರದ ಎಂ.ಜಿ.ರಸ್ತೆ ಶಾಖೆಯ ಉಪ ಪ್ರಧಾನ ವ್ಯವಸ್ಥಾಪಕ ಜೆ.ಮಹೇಶ್ ನೀಡಿರುವ ದೂರಿನನ್ವಯ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದೆ. ಪ್ರಕರಣ ಸಂಬಂಧ ಸಂಬಂಧ ಅಮಾನತುಗೊಂಡಿರುವ ಯೂನಿಯನ್ ಬ್ಯಾಂಕ್ ಅಧಿಕಾರಿಗಳಾದ ಸುಚಿಸ್ಮಿತಾ ರೌಲ್, ಡಿ.ದೀಪಾ, ಕೆ.ವಿ.ಕೃಷ್ಣಮೂರ್ತಿ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿತರು ವಾಲ್ಮಿಕಿ ಅಭಿವೃದ್ಧಿ ನಿಗಮ ನಿಯಮಿತದ ಖಾತೆಗಳಿಂದ ಅಕ್ರಮ ಹಣ ವರ್ಗಾವಣೆ ಮಾಡುವ, ಮೊತ್ತವನ್ನು ಹಿಂತೆಗೆದುಕೊಳ್ಳುವ ಮೂಲಕ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಮಹೇಶ್ ನೀಡಿರುವ ದೂರಿನ ಮೇರೆಗೆ ಸಿಬಿಐ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ವಾಂಗೇರ್ ತನಿಖೆಯನ್ನು ಕೈಗೆತ್ತಿಗೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ 187 ಕೋಟಿ ರು. ಪೈಕಿ 88 ಕೋಟಿ ರು. ಅವ್ಯವಹಾರ ನಡೆದಿರುವ ಬಗ್ಗೆ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದರು. ಇದರಲ್ಲಿ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದರು.
ಬ್ಯಾಂಕ್‌ಗೆ ತೆರಳಿ ಸಿಬಿಐ ಅಧಿಕಾರಿಗಳು ಪ್ರಾಥಮಿಕ ಹಂತದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಸಹ ತನಿಖೆಗೊಳಪಡಿಸಲಾಗುತ್ತದೆ. ತನಿಖೆಗೆ ಸಂಬಂಧಪಟ್ಟವರನ್ನು ಹೆಚ್ಚಿನ ವಿಚಾರಣೆಗೊಳಪಡಿಸಿ ಅಗತ್ಯ ಮಾಹಿತಿಯನ್ನು ಕ್ರೋಡೀಕರಿಸುವ ನಿರೀಕ್ಷೆ ಇದೆ. ಅಲ್ಲದೇ, ಚಂದ್ರಶೇಖರ್ ಡೆತ್‌ನೋಟ್‌ನಲ್ಲಿ ಸಚಿವ ಎಂದು ಉಲ್ಲೇಖವಾಗಿರುವುದರಿಂದ ಸಚಿವ ನಾಗೇಂದ್ರ ಅವರನ್ನು ಸಹ ಸಿಬಿಐ ತನಿಖೆಗೊಳಪಡಿಸಲಾಗುವುದು. ತನಿಖೆಯಲ್ಲಿ ಮೇಲ್ನೋಟಕ್ಕೆ ನಾಗೇಂದ್ರ ಅವರ ಪಾತ್ರ ಇರುವುದು ಕಂಡುಬಂದರೆ ಸರ್ಕಾರವು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎನ್ನಲಾಗಿದೆ.ಬೆಂಗಳೂರಿನ ಸಿಬಿಐ ಅಧಿಕಾರಿಗಳು ಪ್ರಾಥಮಿಕ ಹಂತದ ತನಿಖೆ ನಡೆಸಿ ಚೆನ್ನೈನಲ್ಲಿನ ಆರ್ಥಿಕ ವ್ಯವಹಾರ ತನಿಖಾ ತಂಡಕ್ಕೆ ಮಾಹಿತಿ ನೀಡಲಿದ್ದಾರೆ. ಅಕ್ರಮ ಹಣಕಾಸು ವ್ಯವಹಾರ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ಚೆನ್ನೈನ ತಂಡವು ಪ್ರಕರಣದ ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.