ಪ್ರಜಾಪ್ರಭುತ್ವ ದಿನ ಅರ್ಥಪೂರ್ಣವಾಗಿ ಆಚರಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

KannadaprabhaNewsNetwork |  
Published : Sep 10, 2024, 01:42 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಮಾತನಾಡಿದರು. | Kannada Prabha

ಸಾರಾಂಶ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಆಚರಣೆ ಪ್ರಯುಕ್ತ ಈಗಾಗಲೇ ಸೂಚಿಸಿರುವಂತೆ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮ ರಚಿಸಲು ಅಂತಿಮ ಸಿದ್ಧತೆಗಳನ್ನು ಕೈಗೊಳ್ಳುವಂತೆ ಡಿಸಿ ಸೂಚಿಸಿದರು.

ಕಾರವಾರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆ. 15ರಂದು ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಆಚರಣೆ ಪ್ರಯುಕ್ತ ಈಗಾಗಲೇ ಸೂಚಿಸಿರುವಂತೆ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮ ರಚಿಸಲು ಅಂತಿಮ ಸಿದ್ಧತೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಜಿಲ್ಲೆಯಲ್ಲಿನ ಅರಣ್ಯ ಪ್ರದೇಶ ಮತ್ತು ಅಪಾಯಕಾರಿ ಗುಡ್ಡಕುಸಿತ ಪ್ರದೇಶಗಳ ವ್ಯಾಪ್ತಿಯನ್ನು ಹೊರತುಪಡಿಸಿ ಇತರೆ ಮಾರ್ಗದಲ್ಲಿ ಮಾನವ ಸರಪಳಿ ರಚನೆ ಕುರಿತಂತೆ ಸಂಬಂಧಪಟ್ಟ ವ್ಯಾಪ್ತಿಯ ತಹಸೀಲ್ದಾರ್‌ಗಳು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಪಿಡಿಒಗಳು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.

ಪ್ರಜಾಪ್ರಭುತ್ವದ ಮೂಲ ಉದ್ದೇಶದಂತೆ ಎಲ್ಲರನ್ನೂ ಒಳಗೊಳ್ಳುವ ರೀತಿಯಲ್ಲಿ, ಜಿಲ್ಲೆಯಲ್ಲಿನ ಎಲ್ಲ ಜನಪ್ರತಿನಿಧಿಗಳು, ಸಾರ್ವಜನಿಕರು, ಸಂಘ- ಸಂಸ್ಥೆಗಳು, ಸ್ವ ಸಹಾಯ ಸಂಘಗಳು, ಜಿಲ್ಲೆಯ ಬುಡಕಟ್ಟು ಜನಾಂಗದವರು, ಶಾಲಾ ಕಾಲೇಜು ವಿದ್ಯಾರ್ಥಿಗಳು,

ಎಲ್ಲ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮ ಆಚರಣೆ ಆಗುವಂತೆ ನೋಡಿಕೊಳ್ಳಬೇಕು ಎಂದರು.

ರಾಜ್ಯಾದ್ಯಂತ ಏಕಕಾಲದಲ್ಲಿ ಬೆಳಗ್ಗೆ 9 ಗಂಟೆಯಿಂದ ಆರಂಭಗೊಳ್ಳುವ ಮಾನವ ಸರಪಳಿ ರಚನೆಯ ಕಾರ್ಯಕ್ರಮದ ಜತೆಗೆ ಇದೇ ಸಂದರ್ಭದಲ್ಲಿ ಜಿಲ್ಲಾದ್ಯಂತ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿಂದ ಗಿಡ ನೆಡುವ ಕಾರ್ಯಕ್ರಮವನ್ನು ವ್ಯವಸ್ಥಿತ ರೀತಿಯಲ್ಲಿ ಆಯೋಜಿಸುವಂತೆ ತಿಳಿಸಿದರು.

ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಅಗತ್ಯ ಭದ್ರತೆ ಒದಗಿಸಬೇಕು. ಆರೋಗ್ಯ ಇಲಾಖೆಯ ಮೂಲಕ ಆರೋಗ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲೆಯ ಎಲ್ಲ ನಗರಸ್ಥಳೀಯ ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡಬೇಕು. ಮಾನವ ಸರಪಳಿ ರಚನೆಯಾಗುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತಾಗಲು ಈ ಕಾರ್ಯಕ್ರಮದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!