ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ
ಜಿಲ್ಲಾದ್ಯಂತ ಗೌರಿ ಹಾಗೂ ಗಣೇಶ ಹಬ್ಬವನ್ನು ಪರಿಸರ ಸ್ನೇಹಿ, ಶಿಸ್ತು ಬದ್ಧವಾಗಿ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ-ಗಣೇಶ ಹಬ್ಬ ಆಚರಿಸುವ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರಾಜ್ಯ ಸರ್ಕಾರವು ರಾಜ್ಯ ವ್ಯಾಪ್ತಿಯಲ್ಲಿನ ಸಮುದ್ರ, ನದಿ, ತೊರೆ, ಹಳ್ಳ, ಕೆರೆ, ಬಾವಿ ಸೇರಿದಂತೆ ಜಲಮೂಲಗಳು ಮಾಲಿನ್ಯಗೊಳ್ಳದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣಗಳಿಂದ ಅಲಂಕೃತಗೊಂಡ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ ಗಣೇಶ ಮೂರ್ತಿಗಳು ಹಾಗೂ ಇತರೆ ವಿಗ್ರಹಗಳ ಉತ್ಪಾದನೆ, ಮಾರಾಟ ಮತ್ತು ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದರು.
ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಸೇರಿದಂತೆ ಹಸಿ ಕಸವನ್ನು ಮೂರ್ತಿಯೊಂದಿಗೆ ನೀರಿಗೆ ಹಾಕದೆ ಪ್ರತ್ಯೇಕವಾಗಿ ಸಂಗ್ರಹಿಸಿ, ಸ್ಥಳೀಯ ಸಂಸ್ಥೆಗಳ ಮೂಲಕ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಸರ್ಕಾರದ ಆದೇಶ ಹಾಗೂ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ತುರ್ತು ಸಂದರ್ಭ ಹೊರತುಪಡಿಸಿ ಧ್ವನಿವರ್ಧಕ, ಡೋಲು, ತಮ್ಮಟೆ ಸೇರಿದಂತೆ ಧ್ವನಿ ಉಂಟುಮಾಡುವ ಸಾಧನಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಈ ವೇಳೆ ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಹಾಗೂ ಅಧಿಕಾರಿಗಳು ಇದ್ದರು.