78ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ
ಜಿಲ್ಲಾ ಕೇಂದ್ರದಲ್ಲಿ ಆ. 15ರಂದು ಆಚರಿಸಲಾಗುವ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಸಮಿತಿ ರಚಿಸಲಾಗಿದ್ದು, ಹಂಚಿಕೆ ಮಾಡಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಮೂಲಕ ವ್ಯವಸ್ಥಿತ ಹಾಗೂ ಅರ್ಥಪೂರ್ಣ ಆಚರಣೆಗೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸ್ವಾತಂತ್ರ್ಯೋ ತ್ಸವ ದಿನಾಚರಣೆ ನಿಮಿತ್ತ ಆ. 15ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಾಗೂ ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನಡೆಯಲಿದೆ. ಸ್ವಾತಂತ್ರೋತ್ಸವದ ಹಿನ್ನೆಲೆ ರಚಿಸಲ್ಪಟ್ಟ ಸಮಿತಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಹಾಗೂ ಸರ್ಕಾರದ ಶಿಷ್ಠಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜನೆ ಮಾಡಬೇಕು. ಅಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಕೂಡ ಇರುವುದರಿಂದ ಜಿಲ್ಲಾಡಳಿತದಿಂದ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಡೆಯುವ ಪಥಸಂಚಲನಕ್ಕೆ ಅಗತ್ಯ ಪೂರ್ವಭಾವಿ ತರಬೇತಿ ನೀಡಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೆಕೆಎಸ್ಆರ್‌ಟಿಸಿ ಬಸ್ ಸೌಕರ್ಯ ಒದಗಿಸಬೇಕು. ಮಕ್ಕಳಿಗೆ ಹಾಲು ಅಥವಾ ಲಘು ಉಪಾಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಆ್ಯಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆಯಿಂದ ಅಗ್ನಿಶಾಮಕ ವಾಹನ ಒದಗಿಸಬೇಕು. ಪ್ಲಾಸ್ಟಿಕ್ ಧ್ವಜವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಯಾವ ಅಂಗಡಿಗಳಲ್ಲೂ ಪ್ಲಾಸ್ಟಿಕ್ ಧ್ವಜ ಮಾರಾಟವಾಗದಂತೆ ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಕ್ರಮಕೈಗೊಳ್ಳಬೇಕು ಹಾಗೂ ಈ ಬಗ್ಗೆ ಸಾರ್ವಜನಿಕರಿಗೂ ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತ ಕ್ಯಾ.ಮಹೇಶ ಮಾಲಗಿತ್ತಿ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಕೃಷ್ಣಮೂರ್ತಿ ದೇಸಾಯಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಆಯುಷ್ ಅಧಿಕಾರಿ ಡಾ. ಪಿ.ಬಿ. ಹಿರೇಗೌಡರ್, ನಗರಸಭೆ ಆಯುಕ್ತ ಗಣಪತಿ, ತಹಶೀಲ್ದಾರ ವಿಠ್ಠಲ್ ಚೌಗಲಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.