ಸಂಭ್ರಮ ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಿ

KannadaprabhaNewsNetwork |  
Published : Aug 01, 2025, 11:45 PM IST
ಪೋಟೋ, 1ಎಚ್‌ಎಸ್‌ಡಿ5: ಸ್ವಾತಂತ್ರ್ಯ ದಿನಚಾರಣೆ ಪೂರ್ವ ಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್‌ ಮಾತನಾಡಿದರು. | Kannada Prabha

ಸಾರಾಂಶ

ಸ್ವಾತಂತ್ರ್ಯ ದಿನಚಾರಣೆ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್‌ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಜಿಲ್ಲಾ ಕೇಂದ್ರದಲ್ಲಿ ಸಡಗರ, ಸಂಭ್ರಮದೊಂದಿಗೆ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತದ ಸ್ವಾತಂತ್ರ್ಯ ದಿನಾಚರಣೆ ಎಂಬುದು ನಮ್ಮ ದೇಶದ ರಾಷ್ಟ್ರೀಯ ಹಬ್ಬ, ಇದರಲ್ಲಿ ಸಾರ್ವಜನಿಕರು, ಎಲ್ಲ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು. ಆ. 15 ರಂದು ಬೆಳಿಗ್ಗೆ 08 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ರಾಷ್ಟç ಧ್ವಜಾರೋಹಣ ನೆರವೇರಲಿದ್ದು, ಬೆಳಿಗ್ಗೆ 09 ಗಂಟೆಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಆಯೋಜಿಸಲಾಗುವುದು. ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಕಚೇರಿಗಳಲ್ಲಿ ಧ್ವಜಾರೋಹಣ ನಡೆಸಬೇಕು ಎಂದರು.

ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಅಂದು ಬೆ.09 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಸಮಾರಂಭಕ್ಕೆ ಶಿಷ್ಟಾಚಾರದಂತೆ ಎಲ್ಲ ಗಣ್ಯಮಾನ್ಯರು, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು, ಆಯಾ ತಾಲೂಕಿನ ತಹಸೀಲ್ದಾರರು ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ, ಶಾಸಕರಿಗೆ ಆಹ್ವಾನ ಪತ್ರಿಕೆ ತಲುಪಿಸಬೇಕು. ವೇದಿಕೆ ನಿರ್ಮಾಣ, ಅಲಂಕಾರ ಸಮರ್ಪಕವಾಗಿರಬೇಕು. ಸಮಾರಂಭದ ಪ್ರಮುಖ ಆಕರ್ಷಣೆಯಾಗಿರುವ ಪರೇಡ್ ನಲ್ಲಿ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕದಳ, ಸೇವಾದಳ, ಎನ್‌ಸಿಸಿ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ತಂಡಗಳು ಭಾಗವಹಿಸಲಿದ್ದು, ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ಮಕ್ಕಳು ಕೂಡ ಪರೇಡ್ ತಂಡದಲ್ಲಿ ಪಾಲ್ಗೊಳ್ಳಲಿವೆ ಎಂದರು.

ಈ ತಂಡಗಳಿಗೆ ಕನಿಷ್ಟ ಮೂರು ದಿನಗಳ ಕಾಲ ತರಬೇತಿ ನೀಡಬೇಕು, ತರಬೇತಿಗೆ ಹಾಜರಾಗುವ ಮಕ್ಕಳಿಗೆ ಉಪಹಾರ ಹಾಗೂ ಕುಡಿವ ನೀರಿನ ವ್ಯವಸ್ಥೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಅರ್ಥಪೂರ್ಣವಾಗಿರಬೇಕು. ಎಲ್ಲ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ, ಪ್ರತಿಯೊಂದು ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು. ಎಲ್ಲ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು, ಗೈರು ಹಾಜರಾಗುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು, ಈ ನಿಟ್ಟಿನಲ್ಲಿ ಕಾರ್ಯಕ್ರಮ ಸ್ಥಳದಲ್ಲಿ ಹಾಜರಾತಿ ಪಡೆಯುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯನ್ನು ಯಶಸ್ವಿಯಾಗಿ ಆಯೋಜಿಸಲು ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ವೇದಿಕೆ, ಸ್ವಾಗತ, ಸಾಂಸ್ಕೃತಿಕ ಸೇರಿದಂತೆ ಹಲವು ಉಪಸಮಿತಿಗಳನ್ನು ರಚಿಸಲಾಗಿದ್ದು ಅದಕ್ಕೆ ಅನುಗುಣವಾಗಿ ಆಯಾ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು. ಜನಪ್ರತಿನಿಧಿಗಳು, ಗಣ್ಯರು, ಮಾಧ್ಯಮದವರು ಸೇರಿದಂತೆ ಎಲ್ಲರಿಗೂ ಸಮರ್ಪಕವಾಗಿ ಆಸನ ವ್ಯವಸ್ಥೆಯನ್ನು ಕಲ್ಪಿಸಬೇಕು ಶಾಲಾ ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಳಗ್ಗೆ ಸಿಹಿ ತಿನಿಸು ವಿತರಿಸುವಂತಾಗಲು, ಆ.14 ರಂದೇ ಆಯಾ ಶಾಲೆಗಳಿಗೆ ಸಿಹಿ ತಿನಿಸು ತಲುಪಿಸಬೇಕು. ನಗರದ ಪ್ರಮುಖ ವೃತ್ತಗಳು, ಸರ್ಕಾರಿ ಕಟ್ಟಡಗಳು ವಿದ್ಯುತ್ ದೀಪಾಲಂಕಾರ ಮಾಡಬೇಕು. ವಿವಿಧ ಇಲಾಖೆಗಳ ಕಚೇರಿಗಳಲ್ಲೂ ಕೈಗೊಳ್ಳಲಾಗುವ ರಾಷ್ಟ್ರ ಧ್ವಜಾರೋಹಣ ಸಂದರ್ಭದಲ್ಲಿ ಆರೋಹಣ ಹಾಗೂ ಅವರೋಹಣಕ್ಕೆ ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ತ.ರಾ.ಸು ರಂಗಮಂದಿರದ ನವೀಕರಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಗರದ ಕಲ್ಯಾಣ ಮಂಟಪ ಒಂದರಲ್ಲಿ ಆಯೋಜಿಸಲು ಪೌರಾಯುಕ್ತರು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಆಹಾರ ಇಲಾಖೆ ಉಪನಿರ್ದೇಶಕ ಸಿದ್ದರಾಮ ಮಾರಿಹಾಳ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ, ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ. ಆನಂದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೆಸಿಂಘೆ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''