ಪ್ರತಿಯೊಬ್ಬರೂ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಣೆಗಾಗಿ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು.
ಗದಗ: 12ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಜೂ. 21ರಂದು ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯುಷ್ ಇಲಾಖೆಯ ವತಿಯಿಂದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿಯೊಬ್ಬರೂ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಣೆಗಾಗಿ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ಇಂದಿನ ಒತ್ತಡಮಯ ಜೀವನಶೈಲಿಯಿಂದಾಗಿ ಪ್ರತಿಯೊಬ್ಬರಿಗೂ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳು ಉಂಟಾಗುವುದು ಸರ್ವೇಸಾಮಾನ್ಯ. ನೌಕರರು ಹಾಗೂ ಸಾರ್ವಜನಿಕರು ಮಾನಸಿಕ ಹಾಗೂ ದೈಹಿಕ ಸದೃಢತೆಗೆ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು.
ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆ ಹಾಗೂ ಕಾಲೇಜುಗಳಲ್ಲಿ ಯೋಗ ದಿನಾಚರಣೆಯನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು. ಕೇವಲ ಒಂದು ದಿನದ ಆಚರಣೆಯಾಗದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹಾಗೂ ನೆನಪಿನ ಶಕ್ತಿಯನ್ನು ಉತ್ತಮಪಡಿಸಲು ಯೋಗವನ್ನು ನಿರಂತರವಾಗಿ ಅಭ್ಯಾಸ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ನಿರಂತರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯೋಗ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ವಯಸ್ಸಿನ ನಿರ್ಬಂಧವಿಲ್ಲದೆ, ಸಾರ್ವಜನಿಕರು, ಹಿರಿಯ ನಾಗರಿಕರು ಮತ್ತು ಯೋಗಾಸಕ್ತರು ಮುಕ್ತವಾಗಿ ಭಾಗವಹಿಸಲು ಸಾರ್ವಜನಿಕರ ಮುಕ್ತ ಭಾಗಿತ್ವ ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ. ಜುಬೇದಬೇಗಂ ಮಾತನಾಡಿ, ಜೂ. 21ರಂದು ಬೆಳಗ್ಗೆ 6.15ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನಾ ಸಮಾರಂಭ ಜರುಗಲಿದೆ. ನಂತರ ಬೆಳಗ್ಗೆ 7ರಿಂದ ಯೋಗಾಭ್ಯಾಸ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮ ಹಿಂದಿನ ದಿನ ಜೂ. 20ರಂದು 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾಥಾವು ಅಂದು ಬೆಳಗ್ಗೆ 9.30ಕ್ಕೆ ನಗರಸಭೆ ಆವರಣದಿಂದ ಹೊರಟು ಟಾಂಗಾ ಕೂಟ, ರೋಟರಿ ಸರ್ಕಲ್, ಗಾಂಧಿ ಸರ್ಕಲ್ ಮಾರ್ಗವಾಗಿ ನಗರಸಭೆ ಆವರಣಕ್ಕೆ ಬಂದು ತಲುಪಲಿದೆ ಎಂದರು.ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರ, ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಸಂಜೀವ ನಾರಪ್ಪನವರ, ಡಾ. ಸತೀಶ್ ಹೊಂಬಾಳಿ, ಬ್ರಹ್ಮಕುಮಾರಿ ಅಕ್ಕನವರು, ಡಾ. ಬಿ.ಎಂ. ಲೋಕಪುರಿ, ಡಾ. ಎಂ.ಎಂ. ಹಾದಿಮನಿ, ಡಾ. ಸಾಯಿಪ್ರಕಾಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಯೋಗ ಸಂಸ್ಥೆಯ ಪದಾಧಿಕಾರಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.