ಗಣೇಶ ಹಬ್ಬ, ಈದ್ ಮಿಲಾದ್ ಹಿನ್ನೆಲೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ
ಗಣೇಶ ಮತ್ತು ಈದ್ ಮಿಲಾದ್ ಎರಡೂ ಹಬ್ಬಗಳು ಏಕಕಾಲಕ್ಕೆ ಬಂದಿರುವುದರಿಂದ ಎಲ್ಲರೂ ಪರಸ್ಪರ ಸ್ನೇಹ ಭಾವನೆಯಿಂದ ಕೂಡಿ ಹಬ್ಬ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಿನ್ನೆಲೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಕೊಪ್ಪಳ ಜಿಲ್ಲೆಗೆ ಕಳಂಕ ಬಾರದ ರೀತಿಯಲ್ಲಿ ಎಲ್ಲ ಧರ್ಮೀಯರೂ ಸೇರಿ ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಭಾವನೆಗಳಿಗೆ ಧಕ್ಕೆ ಬಾರದ ರೀತಿ ಶಾಂತಿ ಸೌಹಾರ್ದತೆಯಿಂದ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಆಚರಿಸಬೇಕು. ಹಬ್ಬ ಆಚರಣೆ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪಾಲನೆ ಮಾಡಬೇಕು. ಆಸ್ಪತ್ರೆ, ಶಾಲೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದರು.
ಗಣೇಶ ಮೂರ್ತಿಗಳ ವಿಸರ್ಜನೆ, ಮೆರವಣಿಗೆ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗುವುದು ಎಂದರು.
ರಸ್ತೆಯಲ್ಲಿ ಪೆಂಡಾಲ್ ಹಾಕಿ ಸಾರ್ವಜನಿಕರಿಗೆ, ಆ್ಯಂಬುಲೆನ್ಸ್, ಅಗ್ನಿಶಾಮಕ ವಾಹನಗಳ ಓಡಾಟಕ್ಕೆ ತೊಂದರೆ ಮಾಡಲು ಅವಕಾಶವಿಲ್ಲ. ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಪರಿಸರ ಸ್ನೇಹಿ ಹಾಗೂ ಮಣ್ಣಿನಿಂದ ಮಾಡಿದ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದರು. ಜಿಲ್ಲೆಯ ಸಾರ್ವಜನಿಕರು ಇದುವರೆಗೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಗೆ ಸಹಕಾರ ನೀಡಿದ್ದಾರೆ. ಮುಂದೆಯು ಸಹ ಸಹಕಾರ ನೀಡಿ ಎರಡೂ ಹಬ್ಬಗಳು ಶಾಂತಿಯಿಂದ ನೆರವೇರಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಿಸಿದ್ದಿ ಮಾತನಾಡಿ, ಗಣೇಶ ಪ್ರತಿಷ್ಠಾಪನೆಯ ಪೆಂಡಾಲ್‌ಗಳಲ್ಲಿ ಅಗ್ನಿನಂದಕ ಬಳಕೆ ಮಾಡಬೇಕು, ಪೆಂಡಾಲ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪೆಂಡಾಲ್‌ನಲ್ಲಿ ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ದ್ವಾರ ಮಾರ್ಗ ನಿರ್ಮಿಸಬೇಕು. ಗಣೇಶ ಪ್ರತಿಷ್ಠಾಪಣಾ ಮಂಡಳಿಯವರು ಮೂರ್ತಿಗಳ ವಿಸರ್ಜನೆ, ಮೆರವಣಿಗೆ ಮಾಡುವ ಮಾರ್ಗವನ್ನು ಮುಂಚಿತವಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ತಿಳಿಸಿ ಕಡ್ಡಾಯವಾಗಿ ಪರವಾನಿಗೆ ಪಡೆದುಕೊಳ್ಳಬೇಕು. ಪರವಾನಿಗೆ ಪಡೆದ ಮಾರ್ಗವನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವಂತಿಲ್ಲ. ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಎಲ್ಲರೂ ಶಾಂತಿ, ಸಂಯಮದಿಂದ ವರ್ತಿಸಿ, ಕಾನೂನು ಸುವ್ಯವಸ್ಥೆ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಬೇಕು. ಈದ್ ಮಿಲಾದ್ ಹಬ್ಬವನ್ನು ಸಹ ಶಾಂತಿಯುತವಾಗಿ ಆಚರಿಸಬೇಕು ಎಂದರು.
ನಗರಸಭೆ ಅಧ್ಯಕ್ಷ ಅಮಜದ್ ಪಟೇಲ್ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ. ಇಲ್ಲಿ ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಬಾಳುತ್ತಿದ್ದೇವೆ. ಎಲ್ಲ ಹಬ್ಬಗಳನ್ನು ಹಿಂದೂ-ಮುಸ್ಲಿಂರು ಒಗ್ಗೂಡಿಕೊಂಡು ಆಚರಿಸುತ್ತೇವೆ ಎಂದರು.ಮುಖಂಡರಾದ ಮರಿಯಪ್ಪ ಮಾತನಾಡಿ, ಹಬ್ಬದ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧ ಕಟ್ಟುನಿಟ್ಟಾಗಿ ಜಾರಿಯಾಗಬೇಕು ಎಂದರು.
ಮುಖಂಡರಾದ ನಾಸೀರ ಹುಸೇನಿ, ರಾಜಶೇಖರ ಆಡೂರ, ಗಂಗಾವತಿಯ ಶಾಮೀದ್ ಮನಿಯಾರ ಮಾತನಾಡಿದರು.ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ್, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರರು, ಪೊಲೀಸ್ ಇಲಾಖೆಯ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿ, ಗಣೇಶ ಮಂಡಳಿಯ ಮುಖ್ಯಸ್ಥರು ಮತ್ತು ಮತ್ತಿತರರಿದ್ದರು.