ಕನ್ನಡಪ್ರಭ ವಾರ್ತೆ ಕುಶಾಲನಗರ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರಕಾರದ ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಮೀರಿದ ಹಿನ್ನೆಲೆಯಲ್ಲಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೆ ಬಂದು ಎರಡು ವರ್ಷಗಳು ಸಂದ ಸಂಭ್ರಮಾಚರಣೆ ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆಯಿತು.ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳೊಂದಿಗೆ ಸೇರಿ ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗೆ ಪೂಜೆ ನೆರವೇರಿಸಲಾಯಿತು. ಇದೇ ಸಂದರ್ಭ
ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇತಿಹಾಸದಲ್ಲಿ ಯಾವುದೇ ಸರ್ಕಾರ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಮಹಿಳಾ ಫಲಾನುಭವಿಗಳಿಗೆ ಉಚಿತ ಸಾರಿಗೆ ಸೌಲಭ್ಯ ನೀಡಿದ ದೃಷ್ಟಾಂತ ಮತ್ತೊಂದಿಲ್ಲ. ಇಂಥದೊಂದು ಯೋಜನೆಯನ್ನು ಪರಿಣಾಮಕಾರಿಯಾಗಿ ಹಾಗೂ ವ್ಯವಸ್ಥಿತವಾಗಿ ಜಾರಿಗೆ ತಂದ ಶ್ರೇಯಸ್ಸು ರಾಜ್ಯ ಕಾಂಗ್ರೆಸ್ ನೇತ್ರತ್ವದ ಸರ್ಕಾರದ ಹಿರಿಮೆಯಾಗಿದೆ ಎಂದರು. ಚಾಲಕರು, ನಿರ್ವಾಹಕರು, ಸಂಸ್ಥೆ ಅಧಿಕಾರಿಗಳ ಸೇವೆ ಕೂಡ ಗಮನಾರ್ಹವಾಗಿದೆ ಎಂದರು. ಚಾಲಕರು, ನಿರ್ವಾಹಕರು ಸೇವೆ ಒದಗಿಸಲು ತಾತ್ಸಾರ ತೋರದಂತೆ ಅವರು ಸೂಚಿಸಿದರು.
ಈ ಸಂದರ್ಭ ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ, ಮಡಿಕೇರಿ ಘಟಕ ಸಾರಿಗೆ ಸಂಸ್ಥೆ ಸಹಾಯಕ ಸಂಚಾರ ಅಧೀಕ್ಷಕ ಎ.ಈರಸಪ್ಪ, ಕೆಡಿಪಿ ಸದಸ್ಯ ಟಿ.ಪಿ.ಹಮೀದ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಸೇರಿದಂತೆ ಪುರಸಭೆ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.