ಕನ್ನಡಪ್ರಭ ವಾರ್ತೆ, ತುಮಕೂರು
ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕರಾದಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು. ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಅದ್ಧೂರಿಯಾಗಿ ಆಚರಿಸಿದರು.
ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಸಾವಿರಾರು ಮುಸ್ಲಿಂ ಬಾಂಧವರು ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಬೆಳಿಗ್ಗೆ 10ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು. ಹೊಸ ಉಡುಪುಗಳನ್ನು ಧರಿಸಿ, ಒಬ್ಬರಿಗೊಬ್ಬರು ಆಲಿಂಗನ ಮಾಡಿ ಹಬ್ಬದ ಶುಭಾಶಯ ಕೋರಿದ್ದು ವಿಶೇಷವಾಗಿತ್ತು.ರಂಜಾನ್ ಹಬ್ಬದ ಸಂಭ್ರಮ ಹಿಂದೂ ಮತ್ತು ಮುಸ್ಲಿಂ ಬಾಂಧವರ ಭಾವೈಕ್ಯತೆಯ ಸಂಕೇತವಾಗಿ ಮಾರ್ಪಟ್ಟಿದ್ದು, ಮುಸ್ಲಿಂ ಬಾಂಧವರಿಗೆ ಹಿಂದೂ ಸಮುದಾಯದವರು ಸಹ ಹಬ್ಬದ ಶುಭಾಶಯ ಕೋರುವ ಮೂಲಕ ಭಾವೈಕ್ಯತೆಯನ್ನು ಸಾರಿದರು.
ಈದ್ಗಾ ಮೈದಾನಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಮುದ್ದಹನುಮೇಗೌಡ ಹಾಗೂ ಮುರುಳೀಧರ ಹಾಲಪ್ಪ ಅವರನ್ನು ಮುಸ್ಲಿಂ ಬಾಂಧವರು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಒಂದು ತಿಂಗಳು ರೋಜಾ ಆಚರಣೆ ಮಾಡಿ ಅತ್ಯಂತ ಪವಿತ್ರವಾಗಿ ಆಚರಿಸುವ ಹಬ್ಬ ರಂಜಾನ್. ಎಲ್ಲಾ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಶುಭಾಶಯ ಕೋರುತ್ತೇನೆ ಎಂದರು.
ಹಬ್ಬದ ಪ್ರಯುಕ್ತ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಯಾವುದೇ ರೀತಿಯ ಅಡಚಣೆಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು.