ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
14 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಶಾಲೆಯಲ್ಲಿ ಓದಿಕೊಂಡು ತಮ್ಮ ಕುಟುಂಬದಲ್ಲಿ ಕೃಷಿ, ಮನೆ ಕೆಲಸಗಳನ್ನು ಮಾಡಿದರೆ ಬಾಲ ಕಾರ್ಮಿಕ ಪದ್ಧತಿ ಆಗುವುದಿಲ್ಲ. ಮಕ್ಕಳು ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಮನೋಜ್ ಬೋಪಯ್ಯ ವಿವರಿಸಿದರು.ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳದಂತೆ ಗಮನಹರಿಸಬೇಕು. ಸ್ವಾತಂತ್ರ್ಯಾ ನಂತರ ರಾಜ್ಯ ನಿರ್ದೇಶಕ ತತ್ವಗಳಲ್ಲೂ ಸಹ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಹೇಳಲಾಗಿದೆ. 1986 ರಲ್ಲೂ ಸಹ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬಂಧಿಸಿದಂತೆ ವಿವರಿಸಲಾಗಿದೆ. ಹಾಗೆಯೇ 2016 ರಲ್ಲೂ ಸಹ ಬಾಲಕಾರ್ಮಿಕ ಪದ್ಧತಿ ವಿರೋಧ ಕಾಯ್ದೆ ಜಾರಿಗೆ ಬಂದಿದೆ ಎಂದು ಮನೋಜ್ ಬೋಪಯ್ಯ ಹೇಳಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿಯು ಕೆಟ್ಟದಾಗಿದ್ದು, ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ದೂಡುವುದರಿಂದ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ತೊಂದರೆಯಾಗಲಿದೆ ಎಂದರು.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲಿಕ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮೀ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ್ ಕೆ.ನರ್ವಾಡೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಸಮಗ್ರ ಗಿರಿಜನ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ತಾಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಆರ್.ಶೀರಾಝ್ ಅಹ್ಮದ್ ಮತ್ತಿತರರು ಇದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.