ಗಾಂಧಿಗಿರಿಗೆ ಶತಮಾನೋತ್ಸವ : ಬೆಳಗಾವಿಯ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವಕ್ಕೆ ಅದ್ಧೂರಿ ಚಾಲನೆ

KannadaprabhaNewsNetwork | Updated : Dec 27 2024, 06:25 AM IST

ಸಾರಾಂಶ

ಮಹಾತ್ಮ ಗಾಂಧೀಜಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಧಿವೇಶನ ನಡೆಸಿ 100 ವರ್ಷ ಸಂದ ಹಿನ್ನೆಲೆಯಲ್ಲಿ 2 ದಿನಗಳ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಬೆಳಗಾವಿಯಲ್ಲಿ ಗುರುವಾರ ಅದ್ದೂರಿ ಚಾಲನೆ ನೀಡಲಾಯಿತು.

 ಬೆಳಗಾವಿ : ಮಹಾತ್ಮ ಗಾಂಧೀಜಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಧಿವೇಶನ ನಡೆಸಿ 100 ವರ್ಷ ಸಂದ ಹಿನ್ನೆಲೆಯಲ್ಲಿ 2 ದಿನಗಳ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಬೆಳಗಾವಿಯಲ್ಲಿ ಗುರುವಾರ ಅದ್ದೂರಿ ಚಾಲನೆ ನೀಡಲಾಯಿತು.

ಸಮಾರಂಭದ ಮೊದಲ ದಿನ ಗುರುವಾರ ನಗರದ ಟಿಳಕವಾಡಿಯ ವೀರಸೌಧದಲ್ಲಿ ಗಾಂಧೀಜಿ ಪುತ್ಥಳಿ ಅನಾವರಣ, ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗಂಗಾಧರರಾವ್‌ ದೇಶಪಾಂಡೆ ಅವರ ಸ್ಮಾರಕ ಭವನ‌ಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 3 ಗಂಟೆಗೆ ಟಿಳಕವಾಡಿಯ ವೀರಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನೇತೃತ್ವದಲ್ಲಿ ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ರಾಹುಲ್‌ ಸೇರಿ ಕಾಂಗ್ರೆಸ್‌ನ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.

ರಾಹುಲ್‌ಗೆ ಅದ್ದೂರಿ ಸ್ವಾಗತ:

ಅಧಿವೇಶನದಲ್ಲಿ ಪಾಲ್ಗೊಳ್ಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿ ಗಣ್ಯರ ದಂಡೇ ಬೆಳಗಾವಿಗೆ ಆಗಮಿಸಿದ್ದು, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಜರಿದ್ದು, ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ, ಮಧ್ಯಾಹ್ನ 3 ಗಂಟೆಗೆ ನಗರದ ಟಿಳಕವಾಡಿ ವೀರಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನೇತೃತ್ವದಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆ (ಸಿಡಬ್ಲ್ಯುಸಿ)ಯಲ್ಲಿ ಕಾಂಗ್ರೆಸ್‌ ನಾಯಕರು ಪಾಲ್ಗೊಂಡರು.

ಇದಕ್ಕೂ ಮೊದಲು, ಬೆಳಗ್ಗೆ 10 ಗಂಟೆಗೆ ನಗರದ ಟಿಳಕವಾಡಿಯ ವೀರಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ನವೀಕೃತ ಫೋಟೋ ಗ್ಯಾಲರಿಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‌ಲೋಕಾರ್ಪಣೆಗೊಳಿಸಿದರು. ಬಳಿಕ, ಖಾದಿ ಉತ್ಸವಕ್ಕೆ ಸಿಎಂ ಚಾಲನೆ ನೀಡಿದರು.

ನಂತರ, ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗಂಗಾಧರರಾವ್‌ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗದಲ್ಲಿ ₹1.58 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಆವರಣದ ಕಾಂಪೌಂಡ್, ತಂತಿಬೇಲಿ, ಫೇವರ್ಸ್ ಹಾಗೂ ಉದ್ಯಾನ ನಿರ್ಮಿಸಲಾಗಿದೆ.

ಇಂದು ಬೃಹತ್‌ ಕಾಂಗ್ರೆಸ್‌ ಸಮಾವೇಶ:

ಶುಕ್ರವಾರ ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪುತ್ಥಳಿಯನ್ನು ಅನಾವರಣಗೊಳಿಸಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಪುತ್ಥಳಿ ಅನಾವರಣಗೊಳಿಸಲಿದ್ದಾರೆ. ಸ್ವಾತಂತ್ರ್ಯ ಯೋಧರು, ಸಂಸದರು, ಶಾಸಕರು, ಗಣ್ಯರು ಸೇರಿ ಸುಮಾರು 600 ಪ್ರಮುಖ ನಾಯಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ, ಸುವರ್ಣಸೌಧದಲ್ಲಿ ಫೋಟೋ ಸೆಷನ್ ನಡೆಯಲಿದೆ.

ನಂತರ, ಮಧ್ಯಾಹ್ನ 12ಕ್ಕೆ ನಗರದ ಕ್ಲಬ್‌ ರಸ್ತೆಯ ಸಿಪಿಎಡ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಕಾಂಗ್ರೆಸ್‌ ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಎಂದು ಹೆಸರಿಡಲಾಗಿದೆ. ಐದು ಸಾವಿರ ಗಣ್ಯರು ಸೇರಿ ಸುಮಾರು 1.5 ಲಕ್ಷ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Share this article