ಕನ್ನಡಪ್ರಭ ವಾರ್ತೆ, ತುಮಕೂರು
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ದಿಶಾ ಸಮಿತಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು. ಜಿಲ್ಲೆಯಲ್ಲಿ ಜೆಜೆಎಂ ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಕಳಪೆ ಗುಣಮಟ್ಟದ ಕಾಮಗಾರಿಗಳು ಕಂಡು ಬಂದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಜಿಲ್ಲೆಯಲ್ಲಿ ಕೇಂದ್ರದ ಜೆಜೆಎಂ ಯೋಜನೆಯು ಶಾಶ್ವತ ಕುಡಿಯುವ ನೀರಿನ ಯೋಜನೆಯಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ತುಮಕೂರು-ದಾವಣಗೆರೆ ರೈಲ್ವೆ ಮಾರ್ಗದ ಪ್ರಗತಿ ಯಾವ ಹಂತದಲ್ಲಿದೆ ಎಂದು ಪ್ರಶ್ನಿಸಿದಾಗ ಈ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಶೇ.90ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, 59 ಎಕರೆ ಮಾತ್ರ ಭೂಸ್ವಾಧೀನವಾಗಬೇಕಿದೆ. ಮುಂದಿನ ಒಂದೂವರೆ ವರ್ಷದೊಳಗೆ ಜಿಲ್ಲೆಯಲ್ಲಿ ಕೈಗೊಂಡಿರುವ ಎಲ್ಲಾ ರೈಲ್ವೆ ಯೋಜನೆಗಳು ಪೂರ್ಣಗೊಳ್ಳಲಿವೆ ಎಂದು ಸಂಸದ ಸೋಮಣ್ಣ ಉತ್ತರಿಸಿದರು.ಗ್ರಾಮಾಂತರ ಶಾಸಕ ಸುರೇಶ್ ಗೌಡ ಮಾತನಾಡಿ, ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ 11 ಘಟಕಗಳಿದ್ದು, ಈ ಯೋಜನೆಯಿಂದ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ. ಜನರಿಗೆ ಕುಡಿಯುವ ನೀರು ಸರಬರಾಜು ಮಾಡುವ ಇಚ್ಛಾಶಕ್ತಿ ಅಧಿಕಾರಿಗಳಿಗಿಲ್ಲವೆಂದು ಸಭೆಗೆ ದೂರು ನೀಡಿದಾಗ, ಪ್ರತಿಕ್ರಿಯಿಸಿದ ಸೋಮಣ್ಣ ಕೂಡಲೇ ದುರಸ್ತಿಯಲ್ಲಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ಘಟಕಗಳನ್ನು ಸುಸ್ಥಿತಿಗೆ ತರಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್‌ಗೆ ಸೂಚನೆ ನೀಡಿದರು.
ಗ್ರಾಮೀಣ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಸರ್ಕಾರಿ ಶಾಲೆಗಳ ಕಟ್ಟಡಗಳ ಸ್ಥಿತಿ ಉತ್ತಮವಾಗಿಲ್ಲದಿರುವುದನ್ನು ಕೊರಟಗೆರೆ ಮತ್ತು ಮಧುಗಿರಿ ತಾಲೂಕುಗಳಲ್ಲಿ ಪ್ರವಾಸ ಮಾಡಿದ ಸಂದರ್ಭದಲ್ಲಿ ಗಮನಿಸಿದ್ದೇನೆ. ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳು, ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಮಧುಗಿರಿ ಮತ್ತು ತುಮಕೂರು ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರಿಗೆ ಕಾರ್ಯನಿರ್ವಹಿಸಬೇಕೆಂದು ಸಚಿವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಮಾತನಾಡಿ, ಬಿದರೆಹಳ್ಳ ಕಾವಲ್‌ನಲ್ಲಿ ಹೆಲಿಕಾಪ್ಟರ್ ಘಟಕ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವುದು ಬೇಸರದ ಸಂಗತಿ. ಈ ಕುಟುಂಬಗಳಿಗೆ ಆದ್ಯತೆ ನೀಡಿ ಉದ್ಯೋಗ ನೀಡಬೇಕು ಎಂದು ಸಭೆಗೆ ಮನವಿ ಮಾಡಿದರು.