ಮೊಸರಲ್ಲಿ ಕಲ್ಲು ಹುಡುಕುವುದು ಬಿಜೆಪಿ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್‌

KannadaprabhaNewsNetwork |  
Published : Jun 21, 2025, 12:49 AM IST
20ಲಕ್ಷ್ಮೀ | Kannada Prabha

ಸಾರಾಂಶ

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ. 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ, ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ.

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ: ಸಚಿವೆ

ಕನ್ನಡಪ್ರಭ ವಾರ್ತೆ ಉಡುಪಿ

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ. 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ, ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ.

ಶುಕ್ರವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಬಿಜೆಪಿಯವರಿಗೆ ರಾಜಕಾರಣ ಮಾಡಲು ಬೇರೆ ವಿಚಾರ ಉಳಿದಿಲ್ಲ, ಮೊದಲು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದರು, ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗುವುದಿಲ್ಲ ಎಂದರು, 136 ಸೀಟು ಗೆದ್ದ ಕಾಂಗ್ರೆಸ್ ಸರ್ಕಾರ ಆರು ತಿಂಗಳೂ ಉಳಿಯಲ್ಲ ಎಂದರು, ಅವರು ಸುಳ್ಳು ಹೇಳಿ ಜನರ ಭಾವನೆಗಳ ಜೊತೆ ಆಟವಾಡುವುದನ್ನು ಬಿಟ್ಟರೆ ಅವರಿಗೆ ಮಾಡುವುದಕ್ಕೆ ಬೇರೇನೂ ಉಳಿದಿಲ್ಲ ಎಂದು ಸಚಿವೆ ಲೇವಡಿ ಮಾಡಿದರು. ಕೋಮುವಾದಕ್ಕೆ ಪ್ರಚೋದನೆ:

ಒಂದು ಕಡೆ ಉಡುಪಿಯ ಬಿಜೆಪಿ ಶಾಸಕರು ಕೋಮುವಾದವನ್ನು ಪ್ರಚೋದನೆ ಮಾಡುತ್ತಿದ್ದಾರೆ, ಆದರೂ ನಾವು ಕೋಮು ಪ್ರಚೋದನೆ ಮಾಡುತ್ತಿಲ್ಲ ಎನ್ನುತ್ತಾರೆ. ಇನ್ನೊಂದು ಕಡೆ ರಾಜ್ಯ ಸರ್ಕಾರ ರಚಿಸಿರುವ ಕರಾವಳಿಯ ಕೋಮು ನಿಗ್ರಹದಳಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ.‌ ಇಂಥ ಮನೋಭಾವನೆಯ ಬಿಜೆಪಿ ಶಾಸಕರನ್ನು ನೋಡಿದರೆ ಅವರ ಮನಃಸ್ಥಿತಿ ಏನು ಅನ್ನುವುದು ಉಡುಪಿಯ ಜನತೆಗೆ ಅರ್ಥವಾಗುತ್ತೆ ಎಂದು ಸಚಿವರು ಜಿಲ್ಲೆಯ ಬಿಜೆಪಿ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ವಿಕೋಪ ಎದುರಿಸಲು ಸಿದ್ಧ !

ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಲಕ್ಷಣ ಇದೆ.‌ ಹೀಗಾಗಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ರೀತಿಯಲ್ಲಿ, ಉಡುಪಿ ಜಿಲ್ಲೆಯಲ್ಲಿ ಮಳೆ ಅವಾಂತರ ನಿಯಂತ್ರಿಸಲು ಬೇಕಾದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ. ಯಾವುದೇ ಪ್ರಮಾಣದಲ್ಲಿ ಮಳೆ ಬಂದರೂ ಎದುರಿಸಲು ನಾವು ಸಿದ್ಧವಾಗಿದ್ದೇವೆ ಎಂದು ಸಚಿವರು ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್‌ ಹೆಗ್ಡೆ ಕೊಳ‍್ಕೆಬೈಲು, ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಮುಂತಾದವರಿದ್ದರು.

..............................

ಸೂಲಿಬೆಲೆ ಸುಳ್ಳಿನ ಚಕ್ರವರ್ತಿ !ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್ಎಸ್‌ಯುಐ ಅಕ್ಷೇಪ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ, ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಹೇಳುತ್ತಾರೆ. ಆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು. ಆದ್ದರಿಂದ ಅವರ ಕಾರ್ಯಕ್ರಮನಕ್ಕೆ ವಿರೋಧ ವ್ಯಕ್ತವಾಗಿದೆ ಎಂದರು.

ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರುವುದನ್ನು ಕಪ್ಪು ಮಾಡುವುದರಲ್ಲಿ ಸೂಲಿಬೆಲೆ ನಿಸ್ಸೀಮರು. ನಾವು ಚಕ್ರವರ್ತಿ ಸೂಲಿಬೆಲೆ ಅವರಿಂದ ಪಾಠ ಕೇಳಬೇಕಾಗಿಲ್ಲ. ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಸೂಲಿಬೆಲೆ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಸೂಲಿಬೆಲೆ ತಮ್ಮ ಪ್ರವಾಸ ಮಾಡಬಹುದು. ದ್ವೇಷದ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ. ಯಾಕೆಂದರೆ ಉಡುಪಿ ಶಾಂತಿ ಪ್ರಿಯರ ಜಿಲ್ಲೆ ಎಂದು ಹೆಬ್ಬಾಳಕರ್ ಸಲಹೆ ಮಾಡಿದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ