ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ದೇಶದ ಕೃಷಿಕರ ಸಮಗ್ರ ಅಭ್ಯುದಯವನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿದ್ದು, ನಿರಂತರವಾಗಿ ರೈತಸ್ನೇಹಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶನಿವಾರ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ ಮೂಲಕ ಯಾವುದೇ ಮಧ್ಯವರ್ತಿ ಹಾಗೂ ಕಡಿತಗಳಿಲ್ಲದೆ ಸಂಪೂರ್ಣ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವ ಮೂಲಕ ಪಾರದರ್ಶಕತೆಯನ್ನು ಉಳಿಸಿಕೊಂಡಿದ್ದು, ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದೆ ಎಂದು ತಿಳಿಸಿದರು.
ಪ್ರಮುಖ ಬೆಳೆಗಳಿಗೆ ಗರಿಷ್ಠ ಬೆಂಬಲ ಬೆಲೆಯನ್ನು ನಿಗದಿ ಮಾಡಿ ರೈತರ ಬೇಡಿಕೆಗಳಿಗೆ ಸ್ಪಂದಿಸಲಾಗಿದ್ದು, ಪ್ರದೇಶವಾರು ಪ್ರಮುಖ ಆಹಾರ ಮತ್ತು ವಾಣಿಜ್ಯ ಬೆಳೆಗಳನ್ನು ಈ ವ್ಯಾಪ್ತಿಗೆ ತರಲಾಗಿದೆ. ಕೃಷಿಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಬೆಸೆಯುವ ಮೂಲಕ ಅತ್ಯಾಧುನಿಕ ಆಲೋಚನೆಗಳನ್ನು ಜಾರಿಗೊಳಿಸಲಾಗಿದೆ. ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ಒತ್ತು ನೀಡಿ, ಆಹಾರ ಸ್ವಾವಲಂಬನೆಯನ್ನು ಸದೃಢಗೊಳಿಸಲಾಗಿದೆ. ರೈತರನ್ನು ಆರ್ಥಿಕವಾಗಿ ಸದೃಢರಾಗಿಸುವ ಉದ್ದೇಶದಿಂದ ಬೆಳೆಸಾಲ, ವಿಮೆ ಸೇರಿದಂತೆ ವಿವಿಧ ಸವಲತ್ತುಗಳನ್ನು ಸರಳೀಕರಣಗೊಳಿಸಲಾಗಿದೆ. ಕಳೆದ ಜುಲೈ ತಿಂಗಳ ಆರಂಭದಿಂದ ದೇಶಾದ್ಯಂತ ವಿಕಸಿತ ಕೃಷಿ ಅಭಿಯಾನ ಜಾರಿಯಲ್ಲಿದ್ದು, ಬ್ಯಾಂಕ್ ಗಳ ಅಧಿಕಾರಿಗಳು ರೈತರ ಮನೆಬಾಗಿಲಿಗೆ ಯೋಜನೆಗಳನ್ನು ತಲುಪಿಸುವ ಪ್ರಯತ್ನದಲ್ಲಿದ್ದಾರೆ ಎಂದು ಹೇಳಿದರು.ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20ನೇಯ ಕಂತಿನಲ್ಲಿ ದೇಶದ 9 ಕೋಟಿ 70 ಲಕ್ಷ ರೈತರು ಫಲಾನುಭವಿಗಳಾಗಿದ್ದು, 20 ಸಾವಿರದ 500 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಅರ್ಹ ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. 21ನೇ ಶತಮಾನದಲ್ಲಿ ಭಾರತ ಎಲ್ಲ ರಂಗಗಳಲ್ಲಿ ತನ್ನ ಪ್ರಬಲ ಅಸ್ತಿತ್ವವನ್ನು ಪ್ರತಿಪಾದಿಸಿ, ವಿಕಸಿತ ಭಾರತವಾಗಿ ರೂಪುಗೊಳ್ಳುತ್ತಿರುವುದನ್ನು ಜಗತ್ತು ಕುತೂಹಲದಿಂದ ವೀಕ್ಷಿಸುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ರೈತರಿಗೆ ಆರ್ಥಿಕ ನೆರವಿನೊಂದಿಗೆ ತಾಂತ್ರಿಕ ಬಲವನ್ನೂ ನೀಡುವುದು ಅಗತ್ಯ. ಗ್ರಾಮೀಣ ಕೃಷಿ ಆಧಾರಿತ ಬದುಕಿಗೆ ಬಲ ನೀಡುವ ನಿಟ್ಟಿನಲ್ಲಿ ಯೋಜನೆಗಳು ಮಹತ್ವದ ಪಾತ್ರ ನಿರ್ವಹಿಸುವುದು ಅಗತ್ಯ ಎಂದು ತಿಳಿಸಿದರು.ಸಂಸದ ಡಾ.ಕೆ.ಸುಧಾಕರ್, ಶಾಸಕ ಧೀರಜ್ ಮುನಿರಾಜ್, ಜಿಲ್ಲಾಧಿಕಾರಿ ಎ.ಬಿ.ಬಸವರಾಜ್, ಕೃಷಿ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಸುರೇಶ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.ಫೋಟೋ-
2ಕೆಡಿಬಿಪಿ9- ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿ ಶನಿವಾರ ಪಿಎಂ ಕಿಸಾನ್ ಸಮ್ಮಾನ್ ಯೋಜನೆ 20ನೇ ಕಂತು ಬಿಡುಗಡೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.--
2ಕೆಡಿಬಿಪಿ10- ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿ ಗೋಪೂಜೆ ನೆರವೇರಿಸಿದ ಕೇಂದ್ರ ಸಚಿವ ವಿ.ಸೋಮಣ್ಣ.--
2ಕೆಡಿಬಿಪಿ11- ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿ ಶನಿವಾರ ಪಿಎಂ ಕಿಸಾನ್ ಸಮ್ಮಾನ್ ಯೋಜನೆ 20ನೇ ಕಂತು ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮತ್ತಿತರರು ಭಾಗಿಯಾದರು.