ಹಳಿಯಾಳ: ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಕ್ಷಣ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿ ಹಾಗೂ ರೈತ ಮುಖಂಡರೊಂದಿಗೆ ಸಭೆ ನಡೆಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಆಗ್ರಹಿಸಿದರು.
ಈಗಿನ ಪರಿಸ್ಥಿತಿಯಲ್ಲಿ ಕೃಷಿ ಉತ್ಪಾದನೆಗಿಂತ ಖರ್ಚು ಹೆಚ್ಚಾಗಿದೆ. ರಸಗೊಬ್ಬರ, ಬೀಜ, ಕೃಷಿ ಕಾರ್ಮಿಕರ ಕೂಲಿ ಸೇರಿದಂತೆ ಬೇಸಾಯದ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ ಕಬ್ಬು ಬೆಳೆಗಾರರ ಬೇಡಿಕೆಗಳು ನ್ಯಾಯಯುತವಾಗಿವೆ. ಕೇಂದ್ರ ಸರ್ಕಾರ ಈ ಎಲ್ಲ ಅಂಶಗಳನ್ನು ಪರಿಗಣಿಸಿ ರೈತರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ವಿ. ಸೋಮಣ್ಣ, ಎಚ್.ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆಯವರು ಮತ್ತು ರಾಜ್ಯದ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ರೈತರಿಗೆ ನ್ಯಾಯ ಕೊಡಿಸಬೇಕು. ಅಗತ್ಯಬಿದ್ದರೆ ಪ್ರಧಾನಮಂತ್ರಿಗಳನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು ಎಂದರು.ಕ್ರೀಡೆಯಲ್ಲಿ ಸಾಧನೆ: ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ತಾಲೂಕಿನ ಶಿವಾಜಿ ಮಾದಪ್ಪಗೌಡರ ಅವರು 10 ಸಾವಿರ ಮೀಟರ್ ಓಟದಲ್ಲಿ ಚಿನ್ನದ ಪದಕವನ್ನು ಗಳಿಸಿದ್ದು, ಆ ಮೂಲಕ ತಾಲೂಕಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಬೆಳಗಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪಾಟೀಲ, ಯುವ ಕಾಂಗ್ರೆಸ್ ಮುಖಂಡ ರವಿ ತೋರಣಗಟ್ಟಿ, ಪುರಸಭಾ ಮಾಜಿ ಅಧ್ಯಕ್ಷ ಉಮೇಶ ಬೊಳಶೆಟ್ಟಿ ಇದ್ದರು.