ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಜಿಪಂ ಸಿಇಒ ಪರಿಶೀಲಿಸಿ ವರದಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ವೀಡಿಯೋ ಸಂವಾದದಲ್ಲಿ ಪ್ರತಿ ತಾಲೂಕಿನಲ್ಲಿ 5 ಗ್ರಾಮಗಳ ಕಾಮಗಾರಿಗಳನ್ನು ಜು. 15 ರಿಂದ 31ರೊಳಗೆ ಅಭಿಯಾನ ಮಾದರಿಯಲ್ಲಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸಿಇಒ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 1226 ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಈವರೆಗೆ 1021 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 428 ಕಾಮಗಾರಿಗಳನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದೆ. ಈ ಪೈಕಿ 25 ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ.ಇತ್ತೀಚೆಗೆ (ಜು. 15) ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮಕ್ಕೆ ಭೇಟಿ ನೀಡಿ ಜೆಜೆಎಂ ಯೋಜನೆಯಡಿ ಅಳವಡಿಸಿರುವ ಕಾರ್ಯಾತ್ಮಕ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ, ಕಾರ್ಯಾಚರಣೆ, ನಿರ್ವಹಣೆ ನೀತಿ ಅಳವಡಿಕೆ ಕುರಿತು ವರದಿಗಳನ್ನು ಪರಿಶೀಲಿಸಿದರು.
ಗ್ರಾಮಗಳಲ್ಲಿನ ಕೂಸಿನ ಮನೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದರು. ನಂತರ ಉಮ್ಮತ್ತೂರು ಗ್ರಾಮದಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ (ಎಂವಿಎಸ್) ನೀರು ಶುದ್ದಿಕರಣ ಘಟಕ ಪರಿಶೀಲಿಸಿದರು.ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿನ ನೀರು ಸರಬರಾಜು ಕುರಿತು ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಜೆಜೆಎಂ ಕಾಮಗಾರಿಯನ್ನು ಪರಿಶೀಲಿಸಿದರು. ಗ್ರಾಮದ ಕೂಸಿನ ಮನೆ, ಶಾಲೆ, ಡಿಜಿಟಲ್ ಗ್ರಂಥಾಲಯ ಮತ್ತು ಅಂಗನವಾಡಿಗಳಿಗೆ ಭೇಟಿ ನೀಡಿದರು.
ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ಎಸ್. ಜಗದೀಶ್, ಸಹಾಯಕ ಎಂಜಿನಿಯರ್ ಪುರುಷೋತ್ತಮ್, ಚಾಮರಾಜನಗರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠರಾಜೇ ಅರಸ್, ಜೆ.ಜೆ.ಎಂ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಸಿ.ಎಂ. ಆಶಾ, ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಸದ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಜರಿದ್ದರು.