ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಧರ್ಮಧ್ವಜ ಸ್ಥಾಪನೆ ಮತ್ತು ನಾಂದಿ ಪೂಜೆ ಮಾಡುವ ಮೂಲಕ 9 ದಿನಗಳ ಜಾತ್ರಾ ಮಹೋತ್ಸವಕ್ಕೆ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮಂಗಳವಾರ ಬೆಳಗ್ಗೆ ವಿಧ್ಯುಕ್ತ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಧರ್ಮಧ್ವಜ ಸ್ಥಾಪನೆ ಮತ್ತು ನಾಂದಿ ಪೂಜೆ ಮಾಡುವ ಮೂಲಕ 9 ದಿನಗಳ ಜಾತ್ರಾ ಮಹೋತ್ಸವಕ್ಕೆ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮಂಗಳವಾರ ಬೆಳಗ್ಗೆ ವಿಧ್ಯುಕ್ತ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶ್ರೀಗಳು, ಹಿಂದೂ ಧರ್ಮದಲ್ಲಿ ಧರ್ಮ ಎಂಬುದು ಅತಿ ಪಾವಿತ್ರ್ಯವನ್ನು ಹೊಂದಿದೆ. ಈ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಧರ್ಮ ಅಚ್ಚಳಿಯದೆ ಉಳಿದು ಧರ್ಮದ ನೆಲೆಗಟ್ಟಿನಲ್ಲಿ ಪ್ರತಿಯೊಂದು ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯಲಿ ಎಂಬ ಪ್ರತೀಕಕ್ಕೆ ಪೂರಕವಾಗಿ ಧರ್ಮಧ್ವಜ ಸ್ಥಾಪನೆ ಮಾಡುವ ಮೂಲಕ ಒಂಭತ್ತು ದಿನಗಳ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತಿದೆ ಎಂದರು.
ಆದಿ ಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಶ್ರೀಮಠದ ಚೈತನ್ಯನಾಥ ಸ್ವಾಮೀಜಿ ಸೇರಿದಂತೆ ವಿವಿಧ ಶಾಖಾಮಠಗಳ ಶ್ರೀಗಳು ಮತ್ತು ನೂರಾರು ಮಂದಿ ಭಕ್ತರು ಪಾಲ್ಗೊಂಡಿದ್ದರು.
ಎಸ್ಪಿ ಭೇಟಿ ಸ್ಥಳ ಪರಿಶೀಲನೆ:
9 ದಿನಗಳ ಜಾತ್ರಾ ಮಹೋತ್ಸವಕ್ಕೆ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಅವರು ಮಂಗಳವಾರ ಮಧ್ಯಾಹ್ನ ಶ್ರೀಕ್ಷೇತ್ರಕ್ಕೆ ಭೇಟಿ ಕೊಟ್ಟು ರಥದ ಬೀದಿ ಸೇರಿದಂತೆ ಪ್ರತಿನಿತ್ಯ ಉತ್ಸವಗಳು ನಡೆಯುವ ಸ್ಥಳ ಪರಿಶೀಲನೆ ನಡೆಸಿದರು. ಜಾತ್ರೆಗೆ ಬರುವ ಭಕ್ತರ ಸುರಕ್ಷತೆ ದೃಷ್ಟಿಯಿಂದ ಅಗತ್ಯ ಪೊಲೀಸ್ ಬಂದೋಬಸ್ತ್ ನಿಯೋಜಿಸುವ ಜೊತೆಗೆ ನಿಗಧಿತ ಪಾರ್ಕಿಂಗ್ ಸ್ಥಳಗಳಲ್ಲಿಯೇ ವಾಹನಗಳ ನಿಲುಗಡೆ ಮಾಡಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಡಿವೈಎಸ್‌ಪಿ ಬಿ.ಚಲುವರಾಜು, ಸಿಪಿಐ ಹೇಮಂತ್‌ಕುಮಾರ್ ಹಾಗೂ ಬೆಳ್ಳೂರು ಪೊಲೀಸ್ ಠಾಣೆಯ ಪಿಎಸ್‌ಐ ವೈ.ಎನ್.ರವಿಕುಮಾರ್ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.