16, 17ರಂದು 28 ಕೇಂದ್ರಗಳಲ್ಲಿ ಸಿಇಟಿ: ಜಿಪ ಸಿಇಒ

KannadaprabhaNewsNetwork |  
Published : Apr 14, 2025, 01:18 AM IST
ಕ್ಯಾಪ್ಷನ11ಕೆಡಿವಿಜಿ 41 ದಾವಣಗೆರೆಯಲ್ಲಿ ಜಿಪಂ ಸಿಇಒ ಸುರೇಶ ಬಿ.ಇಟ್ನಾಳ್ ಅಧ್ಯಕ್ಷತೆಯಲ್ಲಿ ಸಿಇಟಿ ಪರೀಕ್ಷಾಪೂರ್ವ ಸಿದ್ದತಾ ಸಭೆ ನಡೆಯಿತು. | Kannada Prabha

ಸಾರಾಂಶ

ಸಿಇಟಿ-2025ರ ಪರೀಕ್ಷೆಯು ಏಪ್ರಿಲ್ 16 ಮತ್ತು 17ರಂದು ರಾಜ್ಯಾದ್ಯಂತ ನಡೆಯಲಿದೆ. ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಹೇಳಿದ್ದಾರೆ.

- 12875 ವಿದ್ಯಾರ್ಥಿಗಳು ನೋಂದಣಿ । ಪಾರದರ್ಶಕ ಪರೀಕ್ಷೆಗೆ ಸಹಕರಿಸಲು ಸುರೇಶ್‌ ಇಟ್ನಾಳ್‌ ಸೂಚನೆ

- - - ಕನ್ನಡಪ್ರಭ ವಾರ್ತೆ ದಾವಣಗೆರೆ

ಸಿಇಟಿ-2025ರ ಪರೀಕ್ಷೆಯು ಏಪ್ರಿಲ್ 16 ಮತ್ತು 17ರಂದು ರಾಜ್ಯಾದ್ಯಂತ ನಡೆಯಲಿದೆ. ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇತ್ತೀಚೆಗೆ ಡಿಸಿ ಅನುಪಸ್ಥಿತಿಯಲ್ಲಿ ನಡೆದ ಸಿಇಟಿ ಪರೀಕ್ಷಾಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಏ.16ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಏ.17ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಗಣಿತಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ. ಎಲ್ಲ ವಿಷಯಗಳು 60 ಅಂಕಗಳಿಗೆ ಸೀಮಿತವಾಗಿರುತ್ತವೆ. ದಾವಣಗೆರೆ ನಗರದಲ್ಲಿನ 28 ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 12875 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ ಎಂದರು.

ಕೇಂದ್ರಗಳಲ್ಲಿ ಮೂಲ ಸೌಕರ್ಯ:

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಗಾಳಿ, ಬೆಳಕು ಸರಿಯಾಗಿರಬೇಕು. ಶೌಚಾಲಯ ಬಳಿಯ ಕೊಠಡಿಗಳನ್ನು ಹೆಚ್ಚು ಸ್ವಚ್ಛವಾಗಿಡಬೇಕು. ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದರು.

ವಸ್ತ್ರಸಂಹಿತೆ:

ಸಿಇಟಿ-2025 ಬರೆಯುವ ಪುರುಷ, ಮಹಿಳೆಯರು ವಸ್ತ್ರಸಂಹಿತೆ ಪರಿಪಾಲನೆ ಮಾಡಬೇಕು. ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಮಾತ್ರ ಧರಿಸಬೇಕು. ಕಾಲರ್ ರಹಿತ ಸಾಧಾರಣ ಶರ್ಟ್, ಟೀ ಶರ್ಟ್ ಧರಿಸಬೇಕು. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಜೇಬುಗಳು ಇಲ್ಲದ, ಕಮ್ಮಿ ಜೇಬಿಗಳಿರುವ ಪ್ಯಾಂಟ್ ಮತ್ತು ಸರಳ ಪ್ಯಾಂಟ್ ಧರಿಸಬೇಕು. ಬಟ್ಟೆಗಳು ಹಗುರವಾಗಿರಬೇಕು. ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಬಟ್ಟೆಗಳಿರಬಾರದು. ಶೂಗಳು ನಿಷಿದ್ಧ. ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗದ ಚಪ್ಪಲಿಗಳನ್ನು ಧರಿಸಬೇಕು. ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರುಗಳು, ಕಡಗ ಧಾರಣೆ ನಿಷೇಧಿಸಲಾಗಿದೆ ಎಂದರು.

ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳ ಧರಿಸುವುದು ನಿಷಿದ್ದ, ಪೂರ್ಣ ತೋಳಿನ ಬಟ್ಟೆ, ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಮತ್ತು ವಸ್ತ್ರ ಸಂಹಿತೆಯಂತೆ ಬಟ್ಟೆ ಧರಿಸಬೇಕು. ಹೀಲ್ಡ್ ಚಪ್ಪಲಿ, ಶೂಗಳನ್ನು ಧರಿಸಬಾರದು, ತೆಳುವಾದ ಅಡಿಪಾಯವಿರುವ ಚಪ್ಪಲಿ ಧರಿಸಬೇಕು. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಲೋಹದ ಆಭರಣ ಧರಿಸುವಂತಿಲ್ಲ.

ಎಲೆಕ್ಟ್ರಾನಿಕ್ಸ್ ವಸ್ತು ನಿಷೇಧ:

ಎಲೆಕ್ಟ್ರಾನಿಕ್ಸ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂಥ್, ಕೈ ಗಡಿಯಾರಗಳು, ತಿನ್ನುವಂಥ ವಸ್ತುಗಳನ್ನು ಕೊಠಡಿಗೆ ತರುವಂತಿಲ್ಲ. ಬಣ್ಣದ, ಲೋಹದ ಕುಡಿಯುವ ನೀರಿನ ಬಾಟಲಿಯೂ ನಿಷಿದ್ಧ. ಕೇಂದ್ರದಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಕೇಂದ್ರದೊಳಗೆ ತರುವಂತಿಲ್ಲ. ತಲೆ ಮೇಲೆ ಟೋಪಿ ಧರಿಸುವಂತಿಲ್ಲ. ಮುಖ ಮುಚ್ಚುವಂತಹ ಮಾಸ್ಕ್ ಧರಿಸುವಂತಿಲ್ಲ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಹಾಗೂ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಅಧಿಕಾರಿಗಳು ಉಪಸ್ಥಿತರಿದ್ದರು.

- - -

(ಬಾಕ್ಸ್‌) ಕೊಠಡಿಯೊಳಗೆ ಅನುಮತಿಸಲಾದ ವಸ್ತುಗಳು ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಬೇಕು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಕಡ್ಡಾಯ. ಅಭ್ಯರ್ಥಿಗಳು ಕೇಂದ್ರದೊಳಗೆ ಕನಿಷ್ಠ ಮೊದಲ ಬೆಲ್ ಆಗುವ 2 ಗಂಟೆ ಮುಂಚಿತವಾಗಿ ಹಾಜರಿರಬೇಕು. ಕೇಂದ್ರದಲ್ಲಿ ಕೊಠಡಿ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳ ಮುಖವನ್ನಾಧರಿಸಿ ಆಪ್‌ ಮೂಲಕ ಗುರುತು ಪತ್ತೆ ಮಾಡುವ ಕಾರ್ಯ ನಡೆಯಲಿದೆ. ಎಲ್ಲ ಅಭ್ಯರ್ಥಿಗಳ ಸಂಪೂರ್ಣ ತಪಾಸಣೆ ನಡೆಯುವುದರಿಂದ ಮೊದಲ ಬೆಲೆ ಆಗುವ ಮುನ್ನ 2 ಗಂಟೆ ಕಾಲ ಮುಂಚಿತವಾಗಿ ಕೇಂದ್ರದಲ್ಲಿರಬೇಕು. ಬೆಳಗ್ಗೆ 10.20ಕ್ಕೆ ಮತ್ತು ಮಧ್ಯಾಹ್ನ 2.20 ಕ್ಕೆ ಮೊದಲ ಬೆಲ್‌ ಆಗಲಿದೆ. ಪರೀಕ್ಷೆ ವೇಳೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇಲ್ಲ.

- - -

-11ಕೆಡಿವಿಜಿ41.ಜೆಪಿಜಿ:

ದಾವಣಗೆರೆಯಲ್ಲಿ ಜಿಪಂ ಸಿಇಒ ಸುರೇಶ ಬಿ. ಇಟ್ನಾಳ್ ಅಧ್ಯಕ್ಷತೆಯಲ್ಲಿ ಸಿಇಟಿ ಪರೀಕ್ಷಾಪೂರ್ವ ಸಿದ್ಧತಾ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''