ಚಿತ್ರದುರ್ಗದ 16 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ

KannadaprabhaNewsNetwork |  
Published : Apr 19, 2026, 01:15 AM IST
ಚಿತ್ರದುರ್ಗ  ಎರಡನೇ ಪುಟದ ಲೀಡ್     | Kannada Prabha

ಸಾರಾಂಶ

ಸಿಇಟಿ ಪರೀಕ್ಷೆ ಹಿನ್ನಲೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ಏ.23 ಮತ್ತು 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಚಿತ್ರದುರ್ಗ ನಗರದ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 6640 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅತ್ಯಂತ ವ್ಯವಸ್ಥಿತ ಹಾಗೂ ಸುಗಮವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ಧತೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಬೆಳಕು ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿರಬೇಕು. ವಿಶೇಷವಾಗಿ ವಿಕಲಚೇತನ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ನೆಲಮಹಡಿಯಲ್ಲೇ ಪರೀಕ್ಷಾ ಕೊಠಡಿಗಳ ವ್ಯವಸ್ಥೆ ಮಾಡಬೇಕು. ಬಿಸಿಲಿನ ತಾಪ ಹೆಚ್ಚಿರುವುದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ನೆರಳಿನ ವ್ಯವಸ್ಥೆ ಹಾಗೂ ಅಗತ್ಯವಿದ್ದರೆ ಶಾಮಿಯಾನ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೆಇಎ ನಿಯಮದಂತೆ ಪರೀಕ್ಷಾ ಕೇಂದ್ರಗಳ ಮೇಲೆ ವೆಬ್‍ಕಾಸ್ಟಿಂಗ್ ಮೂಲಕ ನಿಗಾ ಇಡಲಾಗುವುದು. ಪ್ರತಿ ಕಾಲೇಜಿಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗಿದ್ದು, ಅವರು ಪರೀಕ್ಷಾ ಪ್ರಕ್ರಿಯೆಯನ್ನು ಹತ್ತಿರದಿಂದ ಗಮನಿಸಲಿದ್ದಾರೆ. ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ಹಾಗೂ ಸಂಗ್ರಹಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನುಗಳನ್ನು ತರುವುದು ಹಾಗೂ ಕೈ ಗಡಿಯಾರವನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ತಿಮ್ಮಯ್ಯ ಮಾತನಾಡಿ, ಚಿತ್ರದುರ್ಗ ನಗರದ ಎಸ್‍ಆರ್‍ಎಸ್ ಪಿಯು ಕಾಲೇಜು, ಕೆಎಂಎಸ್ ಪಿಯು ಕಾಲೇಜು, ಎಸ್‍ಜೆಎಂ ಪಿಯು ಕಾಲೇಜು, ನಮ್ಮ ಎಕ್ಸಫರ್ಟ್ ಪಿಯು ಕಾಲೇಜು, ಎಸ್‍ಜೆಎಂ ಪಿಯು ಕಾಲೇಜು, ಚಿನ್ಮೂಲಾದ್ರಿ ಪಿಯು ಕಾಲೇಜು, ಚೈತನ್ಯ ಪಿಯು ಕಾಲೇಜು, ವಾಸವಿ ಪ್ರೌಢಶಾಲೆ, ವೆಸ್ಟರ್ನ್ ಹಿಲ್ಸ್ ಪಿಯು ಕಾಲೇಜು, ಶ್ರೀ ಕಂಪಳರಂಗ ಪಿಯು ಕಾಲೇಜು, ಸೇಂಟ್ ಜೋಸೆಫ್ ಪಿಯು ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು, ಬಾಲಕರ ಸರ್ಕಾರಿ ಪಿಯು ಕಾಲೇಜು, ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಎಸ್‍ಜೆಎಂಐಟಿ ಹಾಗೂ ಮಹಾರಾಣಿ ಪದವಿಪೂರ್ವ ಕಾಲೇಜು ಸೇರಿದಂತೆ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ 6640 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಏ.23ರಂದು ಬೆಳಗ್ಗೆ 10:30 ರಿಂದ 11:50 ರವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2:30 ರಿಂದ 3:50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಏ.24ರಂದು ಬೆಳಿಗ್ಗೆ 10:30 ರಿಂದ 11:50 ರವರೆಗೆ ಗಣಿತಶಾಸ್ತ್ರ ಮತ್ತು ಮಧ್ಯಾಹ್ನ 2:30 ರಿಂದ 3:50 ರವರೆಗೆ ಜೀವಶಾಸ್ತ್ರ ಪರೀಕ್ಷೆ ಜರುಗಲಿದೆ.

ಪರೀಕ್ಷೆಗೆ ಬರುವ ಅಭ್ಯರ್ಥಿಗಳ Facial Recognitionಮಾಡಲು ಚಿತ್ರದುರ್ಗ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರು ಕ್ರಮವಹಿಸಬೇಕು. ಪರೀಕ್ಷಾ ನಡೆಯುವ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವಾಗ ಸಿಸಿಟಿವಿ ವೀಕ್ಷಣೆಯಡಿಯಲ್ಲಿ ಕಾರ್ಯನಿರ್ವಹಿಸುವುದು ಮತ್ತು ಎಲ್ಲ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಗಳಿಗಾಗಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಪ್ರಕಟಿಸಿದ್ದು, ಅಭ್ಯರ್ಥಿಗಳು ವಸ್ತ್ರಸಂಹಿತೆಯ ನಿಯಮಗಳನ್ನು ಪಾಲಿಸುವುದು ಕಡ್ಡಾಯ. ಡ್ರೆಸ್ ಕೋಡ್ ಸಮಸ್ಯೆ ಆಗದ ರೀತಿ ಗಮನಿಸಲು ಹಿರಿಯ ಉಪನ್ಯಾಸಕರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಸೋಮಶೇಖರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮ ಹಾನಗಲ್, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಬಿ.ಮಂಜುನಾಥ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರ ಅವಕಾಶ ಕಸಿದುಕೊಂಡ ಕಾಂಗ್ರೆಸ್
ರಸ್ತೆ ಅಪಘಾತಗಳ ಸ್ಥಳ ಗುರುತಿಸಲು ಸೂಚನೆ