ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಿಇಟಿ ಪರೀಕ್ಷೆ ಸಿದ್ಧತೆ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಇರಬೇಕು. ಪರೀಕ್ಷಾ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ, ಸ್ವಚ್ಛತೆ, ಶೌಚಾಲಯ ಇರಬೇಕು. ಸಿಇಟಿ ಪರೀಕ್ಷೆ ಸಂಬಂಧ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದರು.ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಸುಗಮವಾಗಿ ಪರೀಕ್ಷೆ ನಡೆಸಬೇಕು. ಪೊಲೀಸರ ನಿಯೋಜನೆ, ರೂಟ್ ಅಧಿಕಾರಿಗಳು ಮತ್ತು ಮೇಲ್ವಿಚಾರಕರ ನಿಯೋಜನೆ ಮತ್ತಿತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದರು.
ಸಿಇಟಿ ಪರೀಕ್ಷಾ ದಿನಗಳಂದು ಸಮಯ ಪಾಲನೆಯಿಂದ ಅತಿಮುಖ್ಯವಾಗಿದ್ದು, ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಸಿಇಟಿ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ 1767 ಮಂದಿ ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 849, ಸಂತ ಮೈಕಲರ ಪಿಯು ಕಾಲೇಜಿನಲ್ಲಿ 264, ಸಂತ ಜೋಸೆಫರ ಪಿಯು ಕಾಲೇಜಿನಲ್ಲಿ 414 ಮತ್ತು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ 240 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದರು.
ಏ. 16 ರಂದು ಬೆಳಗ್ಗೆ 10.30 ಗಂಟೆಯಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನ ಶಾಸ್ತ್ರ, ಏಪ್ರಿಲ್, 17 ರಂದು ಬೆಳಗ್ಗೆ 10.30 ಯಿಂದ 11.50 ರ ವರೆಗೆ ಗಣಿತ ಮತ್ತು ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಕೆ.ಮಂಜುಳ ಅವರು ವಿವರಿಸಿದರು.
ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ಮದೆನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರದ ವಿಜಯ್ ಅವರು ಸಿಇಟಿ ಪರೀಕ್ಷೆ ಸಂಬಂಧ ಹಲವು ಮಾಹಿತಿ ನೀಡಿದರು.