ಚಿತ್ರದುರ್ಗದ 16 ಕೇಂದ್ರಗಳಲ್ಲಿ ಇಂದಿನಿಂದ ಸಿಇಟಿ ಪರೀಕ್ಷೆ

KannadaprabhaNewsNetwork |  
Published : Apr 16, 2025, 12:34 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ  | Kannada Prabha

ಸಾರಾಂಶ

6741 ಅಭ್ಯರ್ಥಿಗಳಿಂದ ನೋಂದಣಿ । ವಸ್ತ್ರ ಸಂಹಿತೆ ಪಾಲನೆಗೆ ಜಿಪಂ ಸಿಇಒ ಸೋಮಶೇಖರ್ ಸೂಚನೆ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಏ.16 ಮತ್ತು 17 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ಚಿತ್ರದುರ್ಗ ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಜಿಲ್ಲೆಯಲ್ಲಿ ಒಟ್ಟು 6,741 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ಹೊಳಲ್ಕೆರೆ ರಸ್ತೆಯ ಎಸ್‌ಜೆಎಂ ಪದವಿಪೂರ್ವ ಕಾಲೇಜು, ಚೈತನ್ಯ ಪಿಯು ಕಾಲೇಜು, ಮಹಾರಾಣಿ ಪಿಯು ಕಾಲೇಜು, ಕಂಪಳರಂಗ ಪಿಯು ಕಾಲೇಜು, ಬೃಹನ್ಮಠ ಪಿಯು ಕಾಲೇಜು, ಪಿ.ಕೆ.ಹಳ್ಳಿಯ ಕೆಎಂಎಸ್‌ ಪಿಯು ಕಾಲೇಜು, ಡಾನ್ ಬೋಸ್ಕೋ ಪಿಯು ಕಾಲೇಜು, ಎಸ್‌ಆರ್‌ಎಸ್ ಪಿಯು ಕಾಲೇಜು, ವೆಸ್ಟರ್ನ್ ಹಿಲ್ಸ್ ಪಿಯು ಕಾಲೇಜು, ಎಂ.ಕೆ.ಹಟ್ಟಿ ಎಸ್‌ಜೆಎಂ ಪಿಯು ಕಾಲೇಜು, ಎಸ್‌ಜೆಎಂಐಟಿ, ಸರ್ಕಾರಿ ವಿಜ್ಞಾನ ಕಾಲೇಜು, ಸರ್ಕಾರಿ ಕಲಾ ಕಾಲೇಜು ಹಾಗೂ ನಮ್ಮ ಎಕ್ಸಫರ್ಟ್ ಪಿಯು ಕಾಲೇಜು ಸೇರಿದಂತೆ ಒಟ್ಟು 16 ಪರೀಕ್ಷೆ ಕೇಂದ್ರಗಳಲ್ಲಿ ಒಟ್ಟು 6741 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಏ.16 ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನಶಾಸ್ತ್ರ ಹಾಗೂ ಏ.17ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 11.50 ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸಿಇಟಿ ಪರೀಕ್ಷೆ ಬರೆಯುವ ಪುರುಷ, ಮಹಿಳಾ ಅಭ್ಯರ್ಥಿಗಳು ವಸ್ತ್ರ ಸಂಹಿತೆ ಪರಿಪಾಲನೆ ಮಾಡಬೇಕು. ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಸಾಧಾರಣ ಶರ್ಟ್, ಟೀ ಶರ್ಟ್ ಧರಿಸಬೇಕು. ಕುರ್ತಾ ಪೈಜಾನು, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಜೇಬುಗಳು ಇಲ್ಲದಿರುವ, ಕಮ್ಮಿ ಜೇಬುಗಳಿರುವ ಪ್ಯಾಂಟ್ ಮತ್ತು ಸರಳ ಪ್ಯಾಂಟ್ ಧರಿಸಬೇಕು. ಬಟ್ಟೆಗಳು ಹಗುರವಾಗಿರಬೇಕು. ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಬಟ್ಟೆಗಳಿರಬಾರದು. ಪರೀಕ್ಷಾ ಕೊಠಡಿಯಲ್ಲಿ ಶೂಗಳು ನಿಷಿದ್ದವಾಗಿದ್ದು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗದ ಚಪ್ಪಲಿ ಧರಿಸಬೇಕು. ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರಗಳು, ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳನ್ನು ಹೊಂದಿರುವ ಬಟ್ಟೆಗಳ ಧರಿಸುವುದು ನಿಷಿದ್ದ. ಪೂರ್ಣ ತೋಳಿನ ಬಟ್ಟೆ, ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಮತ್ತು ವಸ್ತ್ರ ಸಂಹಿತೆಯಂತೆ ಬಟ್ಟೆ ಧರಿಸಬೇಕು. ಹೀಲ್ಡ್ ಚಪ್ಪಲಿ, ಶೂಗಳನ್ನು ಧರಿಸಬಾರದು, ತೆಳುವಾದ ಅಡಿಪಾಯವಿರುವ ಚಪ್ಪಲಿ ಧರಿಸಬೇಕು. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಲೋಹದ ಆಭರಣ ಧರಿಸುವಂತಿಲ್ಲ.

ಡ್ರೆಸ್ ಕೋಡ್ ಜೊತೆಗೆ ಎಲೆಕ್ಟ್ರಾನಿಕ್ಸ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂಥ್, ಕೈ ಗಡಿಯಾರಗಳನ್ನು ಕೊಠಡಿಗೆ ತರುವಂತಿಲ್ಲ. ಬಣ್ಣದ ಹಾಗೂ ಲೋಹದ ಕುಡಿಯುವ ನೀರಿನ ಬಾಟಲಿಗೂ ಅನುಮತಿ ಇಲ್ಲ, ಕೇಂದ್ರದಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.

ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸುವಂತಿಲ್ಲ ಹಾಗೂ ಮುಖ ಮುಚ್ಚುವಂತೆ ಮಾಸ್ಕ್ ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಬೇಕು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕು. ಪರೀಕ್ಷಾ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು, ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಸಮರ್ಪಕವಾಗಿ ದೊರೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ
ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ