23, 24ರಂದು ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ

KannadaprabhaNewsNetwork |  
Published : Apr 20, 2026, 01:30 AM IST
ಪೊಟೋ: 19ಎಸ್‌ಎಂಜಿಕೆಪಿ01ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಿಇಟಿ ಪರೀಕ್ಷೆ ಸಿದ್ದತೆ ಕುರಿತು ಚರ್ಚಿಸಲು ಪರೀಕ್ಷಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್‌ ಮಾತನಾಡಿದರು.  | Kannada Prabha

ಸಾರಾಂಶ

ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶನಿವಾರ ಸಿಇಟಿ ಪರೀಕ್ಷೆ ಸಿದ್ಧತೆ ಕುರಿತು ಚರ್ಚಿಸಲು ಪರೀಕ್ಷಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಬಾರಿ ಜಿಲ್ಲೆಯಾದ್ಯಂತ ಒಟ್ಟು 29 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಶಿವಮೊಗ್ಗ ನಗರದಲ್ಲಿ 21, ಭದ್ರಾವತಿಯಲ್ಲಿ 5 ಹಾಗೂ ಸಾಗರದಲ್ಲಿ 03 ಕೇಂದ್ರಗಳಿವೆ. ಒಟ್ಟು 9,864 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಶಿವಮೊಗ್ಗದಿಂದ 7,456, ಭದ್ರಾವತಿಯಿಂದ 1,120 ಮತ್ತು ಸಾಗರ ತಾಲೂಕಿನಿಂದ 1,288 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ನಿಷೇಧಿತ ಆಜ್ಞೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144ರಡಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಈ ಭಾಗದಲ್ಲಿ ಜೆರಾಕ್ಸ್ ಅಂಗಡಿಗಳು, ಸೈಬರ್ ಅಂಗಡಿಗಳನ್ನು ಪರೀಕ್ಷಾ ವೇಳೆಯಲ್ಲಿ ಬಂದ್ ಮಾಡಲು ಸೂಚಿಸಲಾಗಿದೆ. ಪ್ರಶ್ನೆ ಪತ್ರಿಕೆಗಳ ಸಾಗಾಣಿಕೆ ಮತ್ತು ಪರೀಕ್ಷಾ ಕೇಂದ್ರಗಳ ಸುರಕ್ಷತೆಗಾಗಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಕೋರಲಾಗಿದೆ. ಪ್ರತಿ ವಾಹನಕ್ಕೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಸೂಚಿಸಲಾಗಿದೆ.

ವೆಬ್ ಕ್ಯಾಸ್ಟಿಂಗ್: ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಜಿಲ್ಲಾ ಪಂಚಾಯತ್ ಮೂಲಕ ಎಲ್ಲಾ ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

ಪರೀಕ್ಷಾ ನಿರ್ವಹಣೆ: ಪ್ರಶ್ನೆ ಪತ್ರಿಕೆಗಳ ವಿತರಣೆಗಾಗಿ ಒಟ್ಟು 10 ಮಾರ್ಗಗಳನ್ನು (ಶಿವಮೊಗ್ಗ-6, ಭದ್ರಾವತಿ-2, ಸಾಗರ-2) ಗುರುತಿಸಲಾಗಿದ್ದು, ಸಾಗಾಣಿಕೆ ಉಸ್ತುವಾರಿಗೆ ಮೂವರು ಸದಸ್ಯರ ಸಮಿತಿಯನ್ನು ನೇಮಿಸಲಾಗಿದೆ. ಅಲ್ಲದೆ, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಗಾಗಿ ಮುಖ್ಯ ಅಧೀಕ್ಷಕರು, ವೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಈ ಬಾರಿ ಪ್ರತಿ ಕೇಂದ್ರಕ್ಕೂ ''''''''ಡ್ರೆಸ್ ಕೋಡ್ ಆಫೀಸರ್'''''''' ಅವರನ್ನು ಹೊಸದಾಗಿ ನೇಮಕ ಮಾಡಲಾಗಿದೆ.

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಲು ಮೆಸ್ಕಾಂ ಇಲಾಖೆಗೆ ಪತ್ರ ಬರೆಯಲಾಗಿದೆ. ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಸ್ಕ್ಯಾನ್ ಮಾಡಿ ಪರಿಶೀಲಿಸುವ ಆಧುನಿಕ ವ್ಯವಸ್ಥೆಯನ್ನು ಇಲಾಖೆ ಮಾಡಿಕೊಂಡಿದೆ ಎಂದು ಸಭೆಯಲ್ಲಿ ಅವರು ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ ಅವರು, ಸೂಕ್ತ ಆಸನ ವ್ಯವಸ್ಥೆ, ಕುಡಿಯಲು ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು. ಮುಖ್ಯವಾಗಿ ವಿಕಲಚೇತನ ಅಭ್ಯರ್ಥಿಗಳಿಗೆ ನೆಲ ಅಂತಸ್ತಿನಲ್ಲಿ ಕುಳಿತು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮತ್ತು ಅವರಿಗೆ ನಿಗದಿಪಡಿಸಲಾದ ಸೌಲಭ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಗಿ ಖರೀದಿ ಕೇಂದ್ರಕ್ಕೆ ಹೊರ ಜಿಲ್ಲೆಯ ರಾಗಿ
ಬಹುಮತವಿದ್ದರೂ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ಸಿಗರೇ ಅಡ್ಡಗಾಲು