ಚಾ.ನಗರ, ಮಂಡ್ಯ ಉಭಯ ಜಿಲ್ಲಾಧಿಕಾರಿಗಳ ಸಭೆ

KannadaprabhaNewsNetwork |  
Published : Mar 08, 2024, 01:46 AM IST
7ಸಿಎಚ್‌ಎನ್‌63ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿಯ ಮಯೂರ ಸಭಾಂಗಣದಲ್ಲಿ ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಕುರಿತು  ಅಂತರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಯಿತು. | Kannada Prabha

ಸಾರಾಂಶ

ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಜಿಲ್ಲೆಗಳ ಗಡಿಭಾಗಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣಾ ಕಾರ್ಯವನ್ನು ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಮಂಡ್ಯದ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಜಿಲ್ಲೆಗಳ ಗಡಿಭಾಗಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣಾ ಕಾರ್ಯವನ್ನು ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಮಂಡ್ಯದ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೊಳ್ಳೇಗಾಲ ತಾಲೂಕಿನ ಭರಚುಕ್ಕಿಯ ಮಯೂರ ಸಭಾಂಗಣದಲ್ಲಿ ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಕುರಿತು ನಡೆದ ಅಂತರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಉಭಯ ಜಿಲ್ಲಾಧಿಕಾರಿಗಳು ಮಾತನಾಡಿದರು. ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಕಟ್ಟುನಿಟ್ಟಾಗಿ ಮಾದರಿ ನೀತಿಸಂಹಿತೆ ಪಾಲನೆ ಮಾಡಬೇಕಿದೆ. ಚಾಮರಾಜನಗರ, ಮಂಡ್ಯ ಜಿಲ್ಲೆಗಳನ್ನು ಸಂಪರ್ಕಿಸುವ ಗಡಿಭಾಗಗಳ ಚೆಕ್ ಪೋಸ್ಟ್‌ಗಳಲ್ಲಿ ಪರಿಣಾಮಕಾರಿಯಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಪರಸ್ಪರ ಸಮನ್ವಯ ಸಹಕಾರದಿಂದ ಅತ್ಯಂತ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲೆಗಳ ಗಡಿ ಭಾಗದಲ್ಲಿ ಬರುವ ಚೆಕ್ ಪೋಸ್ಟ್ ಗಳು 24*7ಅವಧಿಯಲ್ಲೂ ಕಾರ್ಯನಿರ್ವಹಿಸಬೇಕು. ವ್ಯಾಪಕವಾಗಿ ವಾಹನಗಳ ತಪಾಸಣೆ ಮಾಡಬೇಕು. ಗೂಡ್ಸ್ ವಾಹನಗಳಲ್ಲಿ ಸಾಗಿಸಲಾಗುವ ಸಾಮಗ್ರಿಗಳನ್ನು ಪರಿಶೀಲಿಸಬೇಕು. ಸೂಕ್ತ ದಾಖಲೆಗಳು ಇವೆಯೇ ಎಂದು ಪರಿಶೀಲಿಸಬೇಕು. ವಾಣಿಜ್ಯ ತೆರಿಗೆ ಅಧಿಕಾರಿಗಳ ತಂಡ ಸಹ ಸಂಪೂರ್ಣವಾಗಿ ಪರಿಶೀಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಚೆಕ್ ಪೋಸ್ಟ್‌ಗಳಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುವ ಹಣ, ಅಕ್ರಮ ಮದ್ಯ, ಆಮಿಷ ಉಡುಗೊರೆ ವಸ್ತುಗಳು ಕಂಡು ಬಂದಲ್ಲಿ ಕೂಡಲೇ ಕ್ರಮ ಜರುಗಿಸಬೇಕು. ಎರಡು ಜಿಲ್ಲೆಗಳ ಅಧಿಕಾರಿಗಳು ಸೂಕ್ತ ಮಾಹಿತಿ ವಿನಿಮಯ ಮಾಡಿಕೊಂಡು ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಉಭಯ ಜಿಲ್ಲೆಗಳ ಗಡಿ ಭಾಗಗಳಲ್ಲಿ ವಿಶೇಷ ಕಣ್ಗಾವಲು ಇರಬೇಕು. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಗೆ ಪೂರಕವಾಗುವಂತೆ ಹಾಗೂ ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಮತ್ತು ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಅವರು ತಿಳಿಸಿದರು.ಚಾಮರಾಜನಗರ ಜಿಲ್ಲೆಯ ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಎಸ್ಪಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಎಂ. ಶಿವಮೂರ್ತಿ, ಮಂಡ್ಯ ಜಿಲ್ಲೆಯ ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶೇಖ್ ತನ್ವೀರ್ ಆಸಿಫ್, ಎಸ್ಪಿ ಎನ್. ಯತೀಶ್, ಉಭಯ ಜಿಲ್ಲೆಗಳ ಅಬಕಾರಿ, ಕಂದಾಯ, ಪೊಲೀಸ್, ಸಹಾಯಕ ಚುನಾವಣಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ