ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಚನ್ನಬಸವ ಸ್ವಾಮೀಜಿಗಳ ಅಂತ್ಯಕ್ರಿಯೆಯನ್ನು ಶುಕ್ರವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ವಿರಕ್ತಮಠದ ಸಂಪ್ರದಾಯದಂತೆ ನೆರವೇರಿಸಲಾಯಿತು.
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಚನ್ನಬಸವ ಸ್ವಾಮೀಜಿಗಳ ಅಂತ್ಯಕ್ರಿಯೆಯನ್ನು ಶುಕ್ರವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ವಿರಕ್ತಮಠದ ಸಂಪ್ರದಾಯದಂತೆ ನೆರವೇರಿಸಲಾಯಿತು. ವಚನ ಶಿಲಾ ಮಂಟಪದ ಆವರಣದಲ್ಲಿ ನಿರ್ಮಿಸಿದ್ದ ಗದ್ದುಗೆಯಲ್ಲಿ ಶ್ರೀಗಳು ಲೀನರಾದರು.
ಸರ್ಕಾರದ ಪರವಾಗಿ ಭಾಗಿಯಾಗಿದ್ದ ಸಚಿವ ಎಂ.ಬಿ.ಪಾಟೀಲ ಹಾಗೂ ಶಿವಾನಂದ ಪಾಟೀಲ ಸಮ್ಮುಖದಲ್ಲಿ ಲಿಂಗೈಕ್ಯ ಶ್ರೀಗಳ ಗೌರವಾರ್ಥವಾಗಿ ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ವಂದನೆ ಸಲ್ಲಿಸಿದರು. ಶಾಸಕ ರಾಜುಗೌಡ ಪಾಟೀಲ, ಎಂಎಲ್ಸಿ ಭೀಮರಾವ ಪಾಟೀಲ, ಜಿಲ್ಲಾಧಿಕಾರಿ ಕೆ.ಆನಂದ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸಿಇಒ ರಿಷಿ ಆನಂದ ಸೇರಿದಂತೆ ನಾಡಿನ ವಿವಿಧೆಡೆಗಳಿಂದ ಅಪಾರ ಭಕ್ತರು ಆಗಮಿಸಿ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.
ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆಯು ವಿರಕ್ತಮಠದಿಂದ ಶುಕ್ರವಾರ ಮಧ್ಯಾಹ್ನ ಆರಂಭವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಿರಕ್ತಮಠಕ್ಕೆ ಸಂಜೆ ಆಗಮಿಸಿತು. ಮೆರವಣಿಗೆಯಲ್ಲಿ ವಿವಿಧ ವಾದ್ಯ ಮೇಳಗಳು ಭಾಗವಹಿಸಿದ್ದವು. ಶ್ರೀಗಳ ಪಾರ್ಥಿವ ಶರೀರವನ್ನು ಪಲ್ಲಕ್ಕಿಯಲ್ಲಿ ಕೂಡಿಸಿ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ನಡೆಯಿತು. ಮೆರವಣಿಗೆಯ ಸಾಗುವ ಮಾರ್ಗದಲ್ಲಿ ಗ್ರಾಮಸ್ಥರು ರಂಗೋಲಿ ಚಿತ್ತಾರ ಬಿಡಿಸಲಾಗಿತ್ತು. ರಸ್ತೆ ಅಕ್ಕ-ಪಕ್ಕದಲ್ಲಿ ನೆರೆದಿದ್ದ ಸಾವಿರಾರು ಭಕ್ತರು ಭಕ್ತ ಸಮೂಹ ಓಂ ಶ್ರೀಗುರುಬಸವ ಲಿಂಗಾಯನಮಃ ಪಠಿಸಿದರು.
ಪೂಜ್ಯರು ಶ್ರೀಮಠಕ್ಕೆ ಆಗಮಿಸುತ್ತಿದ್ದ ಭಕ್ತರಿಗೆ ಉಣಬಡಿಸುತ್ತಿದ್ದ ತುಪ್ಪ, ಸಜ್ಜಕ, ಅನ್ನ ಸಾರು ಪ್ರಸಾದವನ್ನು ಅಂತಿಮ ದರ್ಶನ ಪಡೆಯಲು ಬಂದ ಭಕ್ತರು ಸ್ವೀಕರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.