- ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಿಇಒ ಕಚೇರಿಯಲ್ಲಿ ಅಭಿನಂದನೆ
- - -ಕನ್ನಡಪ್ರಭ ವಾರ್ತೆ ಚನ್ನಗಿರಿ
ತಾಲೂಕಿನ ಎಲ್ಲ ಪ್ರೌಢಶಾಲೆಗಳ ಶಿಕ್ಷಕರ ಪರಿಶ್ರಮದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಚನ್ನಗಿರಿ ತಾಲೂಕು ಮೂರನೇ ಸ್ಥಾನ ಪಡೆದುಕೊಂಡಿದೆ ಎಂದು ಶಾಸಕ ಬಸವರಾಜ ವಿ.ಶಿವಗಂಗಾ ಶ್ಲಾಘಿಸಿದರು.ಸೋಮವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿನಲ್ಲಿಯೇ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾದ ಜಿ.ಡಿ.ಚೈತನ್ಯ, ಅಜೀಯಾ ಫಾತಿಮಾ ಮತ್ತು ಬಿ.ಎಚ್. ಚಂದನ ಅವರಿಗೆ ಅಭಿನಂಧನೆ ಸಲ್ಲಿಸಿ, ಸಿಹಿ ತಿನ್ನಿಸಿ ಅವರು ಮಾತನಾಡಿದರು.
ಶಾಸಕನಾದ ದಿನದಿಂದ ಕ್ಷೇತ್ರದಲ್ಲಿ ಶಿಕ್ಷಣ ಇಲಾಖೆ ಪ್ರಗತಿಗೆ ಹೆಚ್ಚು ಉತ್ತೇಜನ ನೀಡುತ್ತಿದ್ದೇನೆ. ನನ್ನ ಅಧಿಕಾರದ ಅವಧಿಯಲ್ಲಿ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ ನೀಡುವ ಉದ್ದೇಶ ಹೊಂದಲಾಗಿದೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಚನ್ನಗಿರಿ ತಾಲೂಕು ಜಿಲ್ಲೆಯಲ್ಲಿ ತೃತೀಯ ಸ್ಥಾನ ಪಡೆಯಲು ಶಾಸಕರ ಸಹಕಾರ ಬಹಳಷ್ಟಿದೆ. ತಾಲೂಕಿನ ಪ್ರತಿ ಪ್ರೌಢಶಾಲೆಗಳಲ್ಲಿ ರಾತ್ರಿ ತರಗತಿ, ಟಾಪರ್ಸ ವಿದ್ಯಾರ್ಥಿಗಳಿಗೆ ಕಾರ್ಯಾಗಾರ, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ನುರಿತ ಸಂಪನ್ಮೂಲ ಶಿಕ್ಷಕರಿಂದ ಮಾಹಿತಿ, ಪ್ರಶ್ನೆಪತ್ರಿಕೆಗಳನ್ನು ಬಿಡಿಸುವ ಬಗ್ಗೆ ಕ್ವಿಜಲಿಟಿ ಎಂಬ ಆ್ಯಪ್ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಸಲಹೆ ನೀಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಮೂವರು ವಿದ್ಯಾರ್ಥಿಗಳಿಗೆ ಶಾಸಕ ಶಿವಗಂಗಾ ಬಸವರಾಜ್ ಸನ್ಮಾನಿಸಿ ಶುಭ ಕೋರಿದರು. ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತಾಲೂಕಿನ ಕೆರೆಬಿಳಚಿ ಗ್ರಾಮಾಂತರ ಪ್ರೌಢಶಾಲೆ ವಿದ್ಯಾರ್ಥಿ ಮಹಮದ್ ರಿಯಾನ್ ಅವರನ್ನು ಸಹ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗಣೇಶ್, ಶಿಕ್ಷಕರ ಸಂಘದ ಪಿ.ವಿ.ಸ್ವಾಮಿ ಸೇರಿದಂತೆ ಮೊದಲಾದವರು ಹಾಜರಿದ್ದರು.
- - --5ಕೆಸಿಎನ್‌ಜಿ1:
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು, ಪ್ರತಿಭಾನ್ವೇಷಣೆ ಪರೀಕ್ಷೆ ಸಾಧಕ ಮಹಮದ್ ರಿಯಾನ್ ಅವರನ್ನು ಶಾಸಕ ಬಸವರಾಜ ಗೌರವಿಸಿದರು.