ಜಲಜೀವನ್ ಮಿಷನ್ ಕಾಮಗಾರಿ ಗುಣಮಟ್ಟ ಪರಿಶೀಲಿಸಿ

KannadaprabhaNewsNetwork | Published : Dec 1, 2023 12:45 AM

ಸಾರಾಂಶ

ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ಮೂಲಕ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾಮಗಾರಿ ಗುಣಮಟ್ಟ ಪರಿಶೀಲಿಸಬೇಕೆಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಅಧಿಕಾರಿಗಳು ಸರ್ಕಾರಿ ಸೌಲಭ್ಯವನ್ನು ಅರ್ಹರಿಗೆ ತಲುಪಿಸುವಲ್ಲಿ ನಿರ್ಲಕ್ಷ್ಯ ತೋರುವುದನ್ನು ಸಹಿಸುವುದಿಲ್ಲ. ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಇದೆ

ಜಿಲ್ಲಾ ಪಂಚಾಯಿತಿ ಮಾಸಿಕ ಕೆಡಿಪಿ ಸಭೆಯಲ್ಲಿ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ತಾಕೀತು

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ಮೂಲಕ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾಮಗಾರಿ ಗುಣಮಟ್ಟ ಪರಿಶೀಲಿಸಬೇಕೆಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಅಧಿಕಾರಿಗಳು ಸರ್ಕಾರಿ ಸೌಲಭ್ಯವನ್ನು ಅರ್ಹರಿಗೆ ತಲುಪಿಸುವಲ್ಲಿ ನಿರ್ಲಕ್ಷ್ಯ ತೋರುವುದನ್ನು ಸಹಿಸುವುದಿಲ್ಲ. ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಇದೆ. ಹಾಗಾಗಿ ಪ್ರತಿಯೊಬ್ಬರಿಗೂ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಜಾರಿಯಾಗಿರುವ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ವಿಳಂಬ ಸಲ್ಲದು ಎಂದರು.

ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ದಂಡ ವಿಧಿಸುವ ಜೊತೆಗೆ ನೋಟಿಸ್ ಜಾರಿಮಾಡಬೇಕು. ಕಾಮಗಾರಿಯ ಕಾರ್ಯಾದೇಶ ಹಾಗೂ ಭೌತಿಕ ಅನುಷ್ಠಾನದಲ್ಲಿ ಬಹಳಷ್ಟು ವ್ಯತ್ಯಾಸ ಕಂಡುಬರುತ್ತಿದೆ. ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಮುಗಿಸದಿದ್ದರೆ ಶಿಸ್ತು ಕ್ರಮ ಜರುಗಿಸಬೇಕು. ಆದರೆ ಕೆಲಸದಲ್ಲಿ ನಿಯಮ ಉಲ್ಲಂಘನೆಯಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದರು.

ಗುಣಮಟ್ಟದ ಬಿಸಿಯೂಟ ನೀಡಿ:ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಪೋಷಕಾಂಶ ಭರಿತ ಮಧ್ಯಾಹ್ನದ ಬಿಸಿಯೂಟ ನೀಡಬೇಕು ಎಂದು ಅಕ್ಷರದಾಸೋಹ ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದರು. ಮಕ್ಕಳಿಗೆ ಉತ್ತಮಗುಣಮಟ್ಟದ ಊಟ ಕೊಡ್ತಿರಾ, ತಾಜಾ ತರಕಾರಿ ಬಳಸ್ತೀರಾ, ನೀವು ಊಟ ಪರೀಕ್ಷೆ ಮಾಡ್ತಿರಾ ಎಂದು ಪ್ರಶ್ನಿಸಿದ ಅವರು, ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ನೀಡಬೇಕು. ಊಟದ ಗುಣಮಟ್ಟ ಪರಿಶೀಲನೆಗೆ ಬಿಇಒಗಳ ತಂಡ ರಚನೆ ಮಾಡಿ, ಅನಿರೀಕ್ಷಿತವಾಗಿ ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ಮಾಡಬೇಕು ಎಂದು ತಾಕೀತು ಮಾಡಿದರು.ಮಕ್ಕಳ ದೂರು ಪುಸ್ತಕ ಕಡ್ಡಾಯ:ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಮಕ್ಕಳ ದೂರು ಪುಸ್ತಕ ಇಡಬೇಕು ಎಂದು ಬಿಸ್ವಾಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕುಡಿಯುವ ನೀರಿನ ಅಭಾವ, ಊಟದ ಸಮಸ್ಯೆ, ಶೌಚಾಲಯ ನಿರ್ವಹಣೆ ಸಮರ್ಪಕವಾಗಿಲ್ಲದಿರುವುದು ಸೇರಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಹಾಗಾಗಿ ಮಕ್ಕಳ ದೂರು ಸಂಗ್ರಹಿಸಲು ಕಡ್ಡಾಯವಾಗಿ ಎಲ್ಲಾ ವಿದ್ಯಾರ್ಥಿನಿಲಯಗಳಲ್ಲಿ ಮಕ್ಕಳ ದೂರು ಪುಸ್ತಕ ಇಡಬೇಕು. ಪ್ರತಿ ತಿಂಗಳು ವಿದ್ಯಾರ್ಥಿ ನಿಲಯದ ನಿಲಯ ಪಾಲಕರು ತಮ್ಮ ಸಹಿಯೊಂದಿಗೆ ತಾಲೂಕು ಪಂಚಾಯಿತಿ ಇಒ ಅವರಿಗೆ ವರದಿ ಸಲ್ಲಿಸಬೇಕು. ತಾಲೂಕು ಪಂಚಾಯಿತಿ ಇಒ ಗಳು ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share this article