ಕನ್ನಡಪ್ರಭ ವಾರ್ತೆ ಮಂಡ್ಯ
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿ, ಇತ್ತೀಚೆಗೆ ನಾಯಿ ಕಡಿತಕ್ಕೆ ಔಷಧ ಪಡೆಯಲು ಮಿಮ್ಸ್ ಆಸ್ಪತ್ರೆಗೆ ತೆರಳುವ ವೇಳೆ ಸಂಭವಿಸಿದ ಅಪಘಾತದಲ್ಲಿ ಮಗುವೊಂದು ಮೃತಪಟ್ಟಿದೆ. ಬಾಲಕಿಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಕ್ಕಿದ್ದರೆ ಈ ಅಪಘಾತ ಸಂಭವಿಸುತ್ತಿರಲಿಲ್ಲ ಎಂದರು.
ತುರ್ತು ಸಂದರ್ಭಗಳಲ್ಲಿ ಬೇಕಿರುವ ಔಷಧಗಳು ಆರೋಗ್ಯ ಕೇಂದ್ರಗಳಲ್ಲಿ ದಾಸ್ತಾನಿರಬೇಕು. ಇದನ್ನು ಪರಿಶೀಲಿಸಲು ಆಯಾ ತಾಲೂಕು ಆರೋಗ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಅವರು ನಿಗದಿತವಾಗಿ ತಮ್ಮ ವ್ಯಾಪ್ತಿಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕು ಎಂದರು.ಔಷಧಗಳ ದಾಸ್ತಾನು ಕುರಿತು ಮೊಬೈಲ್‌ನಲ್ಲೇ ವೈದ್ಯರು ಮಾಹಿತಿ ಪಡೆಯಬಹುದು. ತಂತ್ರಜ್ಞಾನವನ್ನು ಹೆಚ್ಚು ಬಳಸಿಕೊಳ್ಳಿ. ಪ್ರತಿ ಜೀವವೂ ಅಮೂಲ್ಯ. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸುವಂತೆ ಹೇಳಿದರು.
ಜಿಲ್ಲೆಯಲ್ಲಿ ಒಂದು ಕೋವಿಡ್ ಪ್ರಕರಣ ವರದಿಯಾಗಿದ್ದು, ಹೋಮ್ ಐಸೋಲೇಷನ್‌ನಲ್ಲಿ ಇರಿಸಲಾಗಿದೆ. ಮಿಮ್ಸ್‌ನಲ್ಲಿ ಎಸ್‌ಎಆರ್‌ಐ ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅದೇ ರೀತಿ ಖಾಸಗಿ ಆಸ್ಪತ್ರೆಗಳಲ್ಲಿ ಎಸ್‌ಎಆರ್‌ಐ ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಹೃದಾಯಘಾತದಿಂದ ಮರಣ ಹೊಂದುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ಕುರಿತಂತೆ ವಯೋಮಿತಿವಾರು ಸಮೀಕ್ಷೆ ನಡೆಸಿ. ಹೃದಯ ವೈಶಾಲ್ಯ ಯೋಜನೆಯಡಿ ಎಷ್ಟು ಜನರ ಸ್ಕ್ರೀನಿಂಗ್ ನಡೆಯುತ್ತಿದೆ. ಹೃದಯ ಸಂಬಂಧಿ ಕಾಯಿಲೆ ಇದ್ದಲ್ಲಿ ಮುಂದಿನ ಚಿಕಿತ್ಸೆಗೆ ರೆಫರ್ ಮಾಡುತ್ತಿರುವ ಬಗ್ಗೆ ವರದಿ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ -೨ ಟಿ.ಲಕ್ಷ್ಮೀ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಕೆ. ಮೋಹನ್, ಆರ್‌ಸಿಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಎಂ.ಎನ್.ಆಶಾಲತಾ, ನಿವೃತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಟಿ.ಎನ್ ಮರೀಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.