ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ 537ನೇ ಕನಕ ಜಯಂತ್ಯುತ್ಸವವನ್ನು ಉದ್ಘಾಟಿಸಿ ಹಾಗೂ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.ಕನಕ ಬಂಡೆ ಅಭಿವೃದ್ಧಿಗೆ ಹಲವರು ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕನಕದಾಸರ ಇತಿಹಾಸವನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ವರದಿ ರಚಿಸಿ ನಂತರ ಮುಖ್ಯಮಂತ್ರಿಯವರ ಗಮನಕ್ಕೆ ತಂದು ಅಭಿವೃದ್ಧಿಗಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
‘ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೆನಾದರೂ ಬಲ್ಲಿರಾ’ ಎಂಬ ಕನಕದಾಸರ ಕೀರ್ತನೆ ಇಂದಿಗೂ ಪ್ರಸ್ತುತವಾಗಿದೆ. ಮೋಹನ ತರಂಗಿಣಿ, ನಳ ಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಸಾರ ಕೃತಿಗಳನ್ನು ಕನಕದಾಸರು ರಚಿಸಿದ್ದು, ಅವರು ತೋರಿದ ಸನ್ಮಾರ್ಗದಲ್ಲಿ ನಡೆಯೋಣ ಎಂದರು.ಕನ್ನಡ ಸಾಹಿತ್ಯ ಹಾಗೂ ಕರ್ನಾಟಕ ಸಂಗೀತಕ್ಕೆ ಅವರ ಕೊಡುಗೆ ಅಪಾರವಾಗಿದೆ. ಶ್ರೀಕೃಷ್ಣ ಪರಮಾತ್ಮ ದೇವರೇ ಕನಕದಾಸರ ಭಕ್ತಿಗೆ ಮೆಚ್ಚಿ ಅವರಿಗೆ ವಿಶೇಷ ದರ್ಶನ ನೀಡಿದ ಘಟನೆಯು ಜನಮಾನಸದಲ್ಲಿ ಭಕ್ತಿಪೂರ್ವಕವಾಗಿ ಉಳಿದಿದೆ ಎಂದು ಸ್ಮರಿಸಿದರು.
ಶಾಸಕ ಪಿ.ರವಿಕುಮಾರ್ ಮಾತನಾಡಿ, ಕನಕದಾಸರು ಜಾತಿ ಪದ್ಧತಿ ಹೋಗಲಾಡಿಸಲು ಹೋರಾಟ ಮಾಡಿದ ಒಬ್ಬ ಸಂತ. ಸಮಾಜದಲ್ಲಿ ಒಗ್ಗಟ್ಟನ್ನು ತರಲು ಅಂದು ಮಹಾನ್ ಹೋರಾಟಗಾರರಾಗಿ ಹೊರಹೊಮ್ಮಿದ ಕೀರ್ತಿ ಕನಕದಾಸರಿಗೆ ಸಲ್ಲುತ್ತದೆ ಎಂದರು.
ಇದಕ್ಕೂ ಮುನ್ನ ಕನಕ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಕುಮಾರ ಅವರು ಕನಕದಾಸರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆಯು ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಮಾವೇಶಗೊಂಡಿತು.